Liquor Sales; ಆದಾಯ ಸಂಗ್ರಹ: ಮದ್ಯ ಮಾರಾಟಕ್ಕೆ ಗುರಿ ನಿಗದಿ ಬಗ್ಗೆ ಅಬಕಾರಿ ಸಚಿವ ತಿಮ್ಮಾಪುರ ಸ್ಪಷ್ಟನೆ
ಬೆಳಗಾವಿ, ಡಿಸೆಂಬರ್ 09: ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ ಎಂದು ರಾಜ್ಯ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು ಸ್ಪಷ್ಟಪಡಿಸಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ವಿಧಾನಸಭೆಯಲ್ಲಿನ ಪ್ರಶ್ನೋತ್ತರ ಕಲಾಪದಲ್ಲಿ ಚಿಕ್ಕನಾಯಕನಹಳ್ಳಿ ಶಾಸಕ ಸಿ.ಬಿ. ಸುರೇಶ್ ಬಾಬು ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಸಣ್ಣ ಸಣ್ಣ ಅಂಗಡಿಗಳಲ್ಲಿಯೂ ಅವ್ಯಾಹತವಾಗಿ, ಅಕ್ರಮವಾಗಿ ಮದ್ಯ ಮಾರಾಟವಾಗುತ್ತಿದ್ದು, ಇದರಿಂದ ವಯಸ್ಕರು, ಮಕ್ಕಳು ಕೂಡ ಕುಡಿತದ ದಾಸರಾಗುತ್ತಿದ್ದಾರೆ.

ಗೃಹಲಕ್ಷ್ಮಿ ಯೋಜನೆ, ಶಕ್ತಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿಗೊಳಿಸಿ, ನಮ್ಮದು ಮಹಿಳೆಯರ ಪರ ಸರ್ಕಾರ ಎಂದು ಹೇಳುತ್ತೀರಿ, ಆದರೆ ಅಕ್ರಮ ಮದ್ಯ ಮಾರಾಟದಿಂದ ಮಹಿಳೆಯರೇ ತೊಂದರೆಗೆ ಒಳಗಾಗುತ್ತಿದ್ದಾರೆ. ಹೀಗಾಗಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಬೇಕು. ಹೆಚ್ಚಿನ ಆದಾಯ ಸಂಗ್ರಹಿಸಲು ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂದು ಗುರಿ ನಿಗದಿ ಮಾಡುವುದನ್ನು ಬಿಡಬೇಕು ಎಂದು ಒತ್ತಾಯಿಸಿದರು.
ಇದಕ್ಕೆ ಉತ್ತರ ನೀಡಿದ ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಅವರು, ರಾಜ್ಯದಲ್ಲಿ ಮದ್ಯ ಮಾರಾಟ ಸಂಬಂಧಿಸಿದಂತೆ, ಇಷ್ಟೇ ಪ್ರಮಾಣದ ಮದ್ಯವನ್ನು ನಿಗದಿತ ಅವಧಿಯಲ್ಲಿ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿಯನ್ನು ಅಬಕಾರಿ ಇಲಾಖೆಗೆ ನೀಡಿಲ್ಲ. ಆದರೆ ಮದ್ಯ ಮಾರಾಟದಿಂದ ಇಂತಿಷ್ಟು ಪ್ರಮಾಣದ ಆದಾಯ ಲಭ್ಯವಾಗಬಹುದು ಎಂಬ ನಿರೀಕ್ಷೆಯನ್ನು ಮಾತ್ರ ಹೊಂದಲಾಗಿದೆ. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಇಲಾಖೆಯು ನಿರಂತರವಾಗಿ ದಾಳಿ ನಡೆಸಿ, ಕ್ರಮ ಕೈಗೊಳ್ಳುತ್ತಿದೆ. ಅಲ್ಲದೆ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ನಿಯಮಿತವಾಗಿ ರಸ್ತೆ ಕಾವಲು ನಡೆಸಿ, ಸಂಶಯಾಸ್ಪದ ವಾಹನಗಳನ್ನು ತಪಾಸಣೆಗೆ ಒಳಪಡಿಸಿ, ಅಕ್ರಮ ಚಟುವಟಿಕೆಗಳಲ್ಲಿ ತೊಡಗಿರುವವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ.
ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 721 ಅಬಕಾರಿ ದಾಳಿ ನಡೆಸಿ, 491 ಪ್ರಕರಣಗಳನ್ನು ದಾಖಲಿಸಿದ್ದು, 448 ಜನರನ್ನು ದಸ್ತಗಿರಿ ಮಾಡಲಾಗಿದೆ. 641 ಲೀ. ಅಕ್ರಮ ಮದ್ಯ ವಶಪಡಿಸಿಕೊಂಡಿದ್ದು, 16 ವಾಹನಗಳನ್ನು ಜಪ್ತಿ ಮಾಡಿ, 12.69 ಲಕ್ಷ ರೂ. ದಂಡ ವಿಧಿಸಲಾಗಿದೆ. ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟವನ್ನು ತಡೆಗಟ್ಟಲು ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಅಬಕಾರಿ ಸಚಿವ ತಿಮ್ಮಾಪುರ ಭರವಸೆ ನೀಡಿದರು.
ಆರ್ಥಿಕ ಇಲಾಖೆಯ ಸಹಮತಿ ಬಳಿಕ ಗೌರವಧನ ಪರಿಷ್ಕರಣೆ: ರಹೀಂ ಖಾನ್
ನಗರ ಸ್ಥಳೀಯ ಸಂಸ್ಥೆಗಳಾದ ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತಿಗಳ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಿಸುವ ಪ್ರಸ್ತಾವನೆಯು ಪರಿಶೀಲನೆಯಲ್ಲಿರುತ್ತದೆ ಎಂದು ಪೌರಾಡಳಿತ ಹಾಗೂ ಹಜ್ ಸಚಿವರಾದ ರಹೀಂ ಖಾನ್ ಅವರು ಸ್ಪಷ್ಟನೆ ನೀಡಿದರು.
ಪರಿಷತ ಸದಸ್ಯರಾದ ಸುನೀಲ್ ಗೌಡ ಪಾಟೀಲ ಅವರ ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 255ರ ಮೇಲಿನ ಚರ್ಚೆಯಲ್ಲಿ ಮಾತನಾಡಿದ ಸಚಿವರು, ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅಧ್ಯಕ್ಷರು. ಉಪಾಧ್ಯಕ್ಷರು, ಸದಸ್ಯರು ಮತ್ತು ಮಹಾನಗರ ಪಾಲಿಕೆಗಳಲ್ಲಿನ ಮೇಯರ್, ಉಪಮೇಯರ್ ಮತ್ತು ಸದಸ್ಯರ ಗೌರವಧನವನ್ನು ಹೆಚ್ಚಳ ಮಾಡುವ ಕುರಿತು ಇತರ ರಾಜ್ಯಗಳ ಚುನಾಯಿತ ಪ್ರತಿನಿಧಿಗಳ ಗೌರವಧನದ ದಾಖಲೆಗಳನ್ನು ನಿಯಮಾನುಸಾರ ಪರಿಶೀಲಿಸಿ, ಗೌರವಧನ ಹೆಚ್ಚಳ ಮಾಡುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ 20/09/2025ರ ಪತ್ರದನ್ವಯ ಪೌರಾಡಳಿತ ನಿರ್ದೇಶನಾಲಯ ನಿರ್ದೇಶಕರಿಗೆ ಕೋರಲಾಗಿತ್ತು.
ಪ್ರಸ್ತುತ, ಪೌರಾಡಳಿತ ನಿರ್ದೇಶನಾಲದ ನಿರ್ದೇಶಕರು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದು, ಪರಿಶೀಲನೆಯಲ್ಲಿರುತ್ತದೆ. ಈ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯ ಸಹಮತಿ ದೊರೆತ ನಂತರ ಗೌರವಧನ ಪರಿಷ್ಕರಿಸಲು ಅವಕಾಶವಾಗುತ್ತದೆ ಎಂದು ಸಚಿವರು ವಿವರಿಸಿದರು.












Click it and Unblock the Notifications