Lok Sabha Election: ಉತ್ತರ ಕರ್ನಾಟಕದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ: ಪ್ರಮುಖ ದಿನಾಂಕಗಳ ಮಾಹಿತಿ
ಬೆಂಗಳೂರು, ಏಪ್ರಿಲ್ 12: ಕರ್ನಾಟಕದಲ್ಲಿ ಮೊದಲ ಹಂತದ ಹದಿನಾಲ್ಕು ಕ್ಷೇತ್ರಗಳಲ್ಲಿ ಪ್ರಚಾರದ ಭರಾಟೆ ಜೋರಾಗಿದೆ. ರಾಜ್ಯದಲ್ಲಿ ಉಳಿದ 14 ಲೋಕಸಭಾ ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆ ಪ್ರಯುಕ್ತ ನಾಮಪತ್ರ ಸಲ್ಲಿಕೆಗೆ ಇಂದು ಶುಕ್ರವಾರ ಅಧಿಸೂಚನೆ ಘೋಷಣೆ ಆಗಲಿದೆ.
ಇಂದು ಬೆಳಗ್ಗೆ 11ಗಂಟೆಯಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಏಪ್ರಿಲ್ 12ರಿಂದ ಏಪ್ರಿಲ್ 19 ನಾಮಪತ್ರ ಸಲ್ಲಿಕೆಗೆ ಕೊನೆದಿನವಾಗಿದೆ. ಆಯಾ ರಾಜಕೀಯ ಪಕ್ಷದ ಅಭ್ಯರ್ಥಿಗಳಿಗೆ ರಜಾದಿನ ಬಿಟ್ಟು ಉಳಿದ ದಿನ ಉಮೇದುವಾರಿಕೆ ಸಲ್ಲಿಸಬಹುದು. ಬೆಳಗ್ಗೆ 11ಗಂಟೆಯಿಂದ ಮಧ್ಯಾಹ್ನ 03 ಗಂಟೆವರೆಗೆ ನಾಮಪತ್ರ ಸಲ್ಲಿಸಬಹುದಾಗಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮೇ 7ರಂದು ಮತದಾನ
ದಕ್ಷಿಣ ಕರ್ನಾಟಕದ ಮೈಸೂರು ಭಾಗದ ಕ್ಷೇತ್ರಗಳು ಸೇರಿದಂತೆ ಒಟ್ಟು 14 ಕ್ಷೇತ್ರಗಳಿಗೆ ಇದೇ ಏಪ್ರಿಲ್ 26 ರಂದು ಮೊದಲ ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನೂ ಎರಡನೇ ಹಂತದಲ್ಲಿ ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕದ ಕ್ಷೇತ್ರಗಳು ಸೇರಿ ಒಟ್ಟು 14 ಕ್ಷೇತ್ರಗಳಲ್ಲಿ ಮೇ 7ರಂದು ಮತದಾನ ಜರುಗಲಿದೆ.
ಈ ಹಿನ್ನೆಲೆಯಲ್ಲಿ ಇಂದಿನಿಂದ ಏಪ್ರಿಲ್ 19ರವರೆಗೆ ಉಮೇದುವಾರಿಕೆ ಸಲ್ಲಿಕೆಗೆ ಅವಕಾಶ ನೀಡಲಾಗಿದೆ. ಮರುದಿನ ಏಪ್ರಿಲ್ 20ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಏಪ್ರಿಲ್ 22ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ ಎಂದು ಚುನಾವಣೆ ಆಯೋಗ ತಿಳಿಸಿದೆ.
ಯಾವೆಲ್ಲ ಕ್ಷೇತ್ರಗಳಿಗೆ ಚುನಾವಣೆ?
ಉತ್ತರ ಕರ್ನಾಟಕ ಭಾಗದ ಬೆಳಗಾವಿ, ಬಾಗಲಕೋಟೆ, ಚಿಕ್ಕೋಡಿ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಧಾರವಾಡ, ಕೊಪ್ಪಳ್ಳ, ಬಳ್ಳಾರಿ, ವಿಜಯಪುರ, ಕಲಬುರಗಿ, ರಾಯಚೂರು, ಬೀದರ್ ಹಾಗೂ ಶಿವಮೊಗ್ಗ ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಲೋಕಸಭೆಗೆ ಚುನಾವಣೆ ನಡೆಯಲಿದೆ.

ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಕೆ
ಇಂದಿನಿಂದಲೇ ಉತ್ತರ ಕರ್ನಾಟಕದಲ್ಲಿ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿರಲಿದೆ. ಧಾರವಾಡದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಯವರು ಇದೇ ಏಪ್ರಿಲ್ 15ರಂದು ನಾಮಪತ್ರ ಸಲ್ಲಿಸಲಿದ್ದಾರೆ. ಅದ್ಧೂರಿ ಮೆರವಣಿಗೆ ಮೂಲಕ ನಾಮಪತ್ರ ಸಲ್ಲಿಸಲಿದ್ದಾರೆ. ಇದೇ ರೀತಿ ಇತರ ನಾಯಕರು ರೋಡ್ ಶೋ ಮೂಲಕ ಚುನಾವಣಾಧಿಕಾರಿಗಳ ಕಚೇರಿಗೆ ಆಗಮಿಸಿ ಉಮೇದುವಾರಿಕೆ ಸಲ್ಲಿಸಲಿದ್ದಾರೆ.












Click it and Unblock the Notifications