ಅ. 2ರೊಳಗೆ ಉತ್ತರ ಕರ್ನಾಟಕದ ಜಿಲ್ಲೆಗಳು ಬಯಲು ಶೌಚ ಮುಕ್ತ
ಬೆಂಗಳೂರು, ಜೂನ್ 24 : ಅಕ್ಟೋಬರ್ 2, 2018ರೊಳಗೆ ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳನ್ನು ಬಯಲು ಶೌಚ ಮುಕ್ತವಾಗಿ ಘೋಷಣೆ ಮಾಡಲಾಗುತ್ತದೆ. ಪ್ರತಿ ಮನೆಯಲ್ಲಿಯೂ ಶೌಚಾಲಯ ನಿರ್ಮಾಣ ಮಾಡಲು ರಾಜ್ಯ ಸರ್ಕಾರ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದೆ.
ನಿರ್ಮಲ ಭಾರತ ಅಭಿಯಾನದಡಿ ಲಭ್ಯವಿರುವ ಅನುದಾನ ಬಳಸಿಕೊಂಡು ಪ್ರತಿ ಮನೆಯಲ್ಲೂ ಶೌಚಾಲಯ ನಿರ್ಮಿಸಬೇಕು ಎಂದು ಜಿಲ್ಲಾಡಳಿತಕ್ಕೆ ಸೂಚನೆ ರವಾನಿಸಲಾಗಿದೆ. ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳು ಅನುದಾನವನ್ನು ಬಳಸಿಕೊಂಡಿಲ್ಲ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಕೃಷ್ಣ ಬೈರೇಗೌಡ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಉತ್ತರ ಕರ್ನಾಟಕದ 6 ರಿಂದ 7 ಜಿಲ್ಲೆಗಳು ಈ ಕಾರ್ಯಕ್ರಮವನ್ನು ಸರಿಯಾಗಿ ಅನುಷ್ಠಾನ ಮಾಡಿಲ್ಲ' ಎಂದು ಅವರು ಹೇಳಿದ್ದಾರೆ.

ಯಾದಗಿರಿ, ಕಲಬುರಗಿ, ರಾಯಚೂರು, ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಪ್ರತಿ ಮನೆಯಲ್ಲಿಯೂ ಶೌಚಾಲಯ ನಿರ್ಮಿಸುವ ಕಾರ್ಯಕ್ರಮ ಸರಿಯಾಗಿ ಜಾರಿಯಾಗಿಲ್ಲ. ಆದ್ದರಿಂದ, ಈ ಜಿಲ್ಲೆಗಳಿಗೆ ಅನುದಾನ ಸರ್ಕಾರ ಸೂಚನೆ ನೀಡಿದೆ.
ಜಿಲ್ಲಾಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿಯಲ್ಲಿನ ಅಧಿಕಾರಿಗಳು ಯೋಜನೆ ರೂಪಿಸಿ ಪ್ರತಿ ಮನೆಯಲ್ಲಿ ಶೌಚಾಲಯ ನಿರ್ಮಾಣವಾಗುವಂತೆ ಕ್ರಮ ಕೈಗೊಳ್ಳಬೇಕು. ಅಧಿಕಾರಿಗಳು ಇದನ್ನು ಪರಿಶೀಲನೆ ನಡೆಸಬೇಕು ಎಂದು ಸರ್ಕಾರ ಸೂಚನೆ ನೀಡಿದೆ.
ಉತ್ತರ ಕರ್ನಾಟಕ ಭಾಗದ ಯಾವ ಜಿಲ್ಲೆಯಲ್ಲಿ ಇನ್ನೂ ಕಾರ್ಯಕ್ರಮ ಸರಿಯಾಗಿ ಅನುಷ್ಠಾನಗೊಂಡಿಲ್ಲವೊ ಅಲ್ಲಿ ಅಕ್ಟೋಬರ್ 2, 2018ರೊಳಗೆ ಶೌಚಾಲಯ ನಿರ್ಮಿಸುವಂತೆ ರಾಜ್ಯ ಸರ್ಕಾರ ಹೇಳಿದೆ.












Click it and Unblock the Notifications