ಗ್ರಾಮ ಪಂಚಾಯಿತಿಯಲ್ಲೇ ಆರೋಗ್ಯ ಕರ್ನಾಟಕ ಕಾರ್ಡ್ ಪಡೆಯಿರಿ
ಬೆಂಗಳೂರು, ನವೆಂಬರ್ 14; ಕರ್ನಾಟಕ ಸರ್ಕಾರ ಜನರ ಸಮಯ ಮತ್ತು ಹಣ ಉಳಿತಾಯ ಮಾಡಲು, ಕಛೇರಿಗಳಿಗೆ ವಿವಿಧ ದಾಖಲೆಗಳಿಗಾಗಿ ಅಲೆದಾಡುವುದನ್ನು ತಪ್ಪಿಸಲು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯಿತಿಯಲ್ಲಿಯೇ ಹಲವು ಸೇವೆಗಳು ಸಿಗುವಂತೆ ಮಾಡಿದೆ. ಈಗ ಆರೋಗ್ಯ ಕರ್ನಾಟಕ ಕಾರ್ಡ್ ಸಹ ಪಂಚಾಯಿತಿ ಮಟ್ಟದಲ್ಲಿಯೇ ಸಿಗಲಿದೆ.
ಜನರಿಗೆ ತಮ್ಮ ಸಾಮಾಜಿಕ, ಶೈಕ್ಷಣಿಕ, ವಾಣಿಜ್ಯ ಹಾಗೂ ಕೃಷಿ ಚಟುವಟಿಕೆಗಳಗಾಗಿ ವಿವಿಧ ಇಲಾಖೆಗಳಿಂದ ಹಲವಾರು ದಾಖಲೆಗಳು ಬೇಕಾಗುತ್ತವೆ. ಇವುಗಳನ್ನು ತ್ವರಿತವಾಗಿ ಒಂದೇ ಸೂರಿನಡಿ ಪಡೆದುಕೊಳ್ಳಲು ಅನುಕೂಲವಾಗುವಂತೆ ಗ್ರಾಮ ಪಂಚಾಯಿತಿ ಮಟ್ಟದಲ್ಲಿ 'ಬಾಪೂಜಿ ಸೇವಾ ಕೇಂದ್ರ'ವನ್ನು ಸರ್ಕಾರ ಸ್ಥಾಪನೆ ಮಾಡಿದೆ.

ಆರೋಗ್ಯ ಕರ್ನಾಟಕ ಕಾರ್ಡ್; ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಮತ್ತು ಯೋಗಕ್ಷೇಮವನ್ನು ಸಾಧಿಸುವ ದಿಸೆಯಲ್ಲಿ 'ಆರೋಗ್ಯ ಕರ್ನಾಟಕ' ಯೋಜನೆಯು ಕಾರ್ಯೋನ್ಮುಖವಾಗಿದೆ. ಇದಕ್ಕಾಗಿ 'ಆರೋಗ್ಯ ಕರ್ನಾಟಕ' ಯೋಜನೆಯನ್ನು ಆರಂಭಿಸಲಾಗಿದೆ. ಇದರಲ್ಲಿ ವಿವಿಧ ಆರೋಗ್ಯ ಯೋಜನೆಗಳ ಸಂಪನ್ಮೂಲವನ್ನು ಕ್ರೋಡೀಕರಿಸಲಾಗಿದೆ.
ವಾಜಪೇಯಿ ಆರೋಗ್ಯಶ್ರೀ, ಯಶಸ್ವಿನಿ ಯೋಜನೆ, ರಾಜೀವ್ ಆರೋಗ್ಯ ಭಾಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ಭೀಮ ಯೋಜನೆ, ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮ, ಮುಖ್ಯಮಂತ್ರಿ ಸಾಂತ್ವನ ಹರೀಶ್ ಯೋಜನೆ, ಇಂದಿರಾ ಸುರಕ್ಷಾ ಯೋಜನೆ ಇತ್ಯಾದಿಗಳು.
ಕರ್ನಾಟಕದ ಎಲ್ಲಾ ನಾಗರಿಕರಿಗೆ ಪ್ರಾಥಮಿಕ, ದ್ವಿತೀಯ ಮತ್ತು ತೃತೀಯ ಆರೈಕೆಗಳನ್ನು ನೀಡುವುದರ ಮೂಲಕ ಸಾರ್ವತ್ರಿಕ ಆರೋಗ್ಯ ಸೇವೆಯನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆಯು ಹೊಂದಿದೆ. ಭಾರತ ಸರ್ಕಾರವು ಆಯುಷ್ಮಾನ್ ಭಾರತ್ ಯೋಜನೆಯನ್ನು ಜಾರಿಗೊಳಿಸಿರುತ್ತದೆ.
ಈ ಎರಡೂ ಯೋಜನೆಗಳ ಉದ್ದೇಶ, ವ್ಯಾಪ್ತಿಗಳಲ್ಲಿ ಹೋಲಿಕೆ ಇರುವುದರಿಂದ ಎರಡೂ ಯೋಜನೆಗಳನ್ನು ಸಂಯೋಜಿಸಿ 'ಆಯ್ತುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ' ಎಂದು ಹೆಸರಿಸಲಾಗಿದೆ. ಈ ಯೋಜನೆಯು 2018ರಿಂದ ಹಂತಹಂತವಾಗಿ ಜಾರಿಗೆ ಬರುತ್ತಿದೆ.
ಅರ್ಹತೆ ಹಾಗೂ ಚಿಕಿತ್ಸಾ ಮೊತ್ತ; ಬಿಪಿಎಲ್ ಪಡಿತರ ಕಾರ್ಡ್ ಹೊಂದಿರುವವರು ಹಾಗೂ ರಾಷ್ಟ್ರೀಯ ಸ್ವಾಸ್ಥ್ಯ ಭೀಮಾ ಯೋಜನೆಯಲ್ಲಿ ನೋಂದಾಯಿತವಾಗಿರುವ ಫಲಾನುಭವಿಗಳಿಗೆ ಒಂದು ವರ್ಷಕ್ಕೆ ರೂ. 5 ಲಕ್ಷಗಳವರೆಗೆ ಉಚಿತ ಚಿಕಿತ್ಸೆ ಲಭ್ಯವಿದೆ.
ಎಪಿಎಲ್ ಕಾರ್ಡುದಾರರು ಆಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರಿಗೆ ಸಹ-ಪಾವತಿ ಆಧಾರದ ಮೇಲೆ ಸರ್ಕಾರಿ ಪ್ಯಾಕೇಜ್ ದರದ ಶೇ 30ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದೆ. ವಾರ್ಷಿಕ ಮಿತಿ ಪ್ರತಿ ಕುಟುಂಬಕ್ಕೆ ರೂ.1.50 ಲಕ್ಷ ಇರುತ್ತದೆ. ಪಡಿತರ ಚೀಟಿ ಮತ್ತು ಆಧಾರ್ ಕಾರ್ಡ್ ಹಾಜರುಪಡಿಸಿ ಚಿಕಿತ್ಸೆ ಪಡೆದುಕೊಳ್ಳಬಹುದು.
ಸಾಮಾನ್ಯ ದ್ವಿತೀಯ ಹಂತದ 291 ಚಿಕಿತ್ಸಾ ವಿಧಾನಗಳು, ಕ್ಲಿಷ್ಟಕರ ದ್ವಿತೀಯ ಹಂತದ 254 ಚಿಕಿತ್ಸಾ ವಿಧಾನಗಳು, ಮಾರಣಾಂತಿಕ ಕಾಯಿಲೆಗಳಾದ ಹೃದಯರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಕಾಯಿಲೆ ಮುಂತಾದ ತೃತೀಯ ಹಂತದ 900 ಚಿಕಿತ್ಸಾ ವಿಧಾನಗಳು 169 ತುರ್ತು ಚಿಕಿತ್ಸೆಗಳು ಮತ್ತು 36 ಉಪಚಿಕಿತ್ಸಾ ವಿಧಾನಗಳು ಸೇರಿ ಒಟ್ಟು 1650 ಚಿಕಿತ್ಸೆಗಳು ಲಭ್ಯವಿದೆ. 169 ತುರ್ತು ಚಿಕಿತ್ಸೆಗಳಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.
ಪ್ರಾಥಮಿಕ ಮತ್ತು ಸಾಮಾನ್ಯ ದ್ವಿತೀಯ ಚಿಕಿತ್ಸೆಗಳನ್ನು ಸರ್ಕಾರಿ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತದೆ. ದ್ವಿತೀಯ ಕ್ಲಿಷ್ಟಕರ ಚಿಕಿತ್ಸೆಗಳು ಮತ್ತು ತೃತೀಯ ಹಂತದ ಕಾಯಿಲೆಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಲಭ್ಯವಿದ್ದಲ್ಲಿ ಅಲ್ಲಿಯೇ ನೀಡಲಾಗುತ್ತದೆ. ಇಲ್ಲದಿದ್ದರೆ ರೆಫರಲ್ ನೀಡಲಾಗುತ್ತದೆ. ರೆಫರಲ್ ಪಡೆದುಕೊಂಡ ರೋಗಿಯು ತಾನು ಇಚ್ಚಿಸುವ ಯಾವುದೇ ನೋಂದಾಯಿತ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬಹುದು. ರಸ್ತೆ ಅಪಘಾತ ಸೇರಿದಂತೆ 169 ತುರ್ತು ಚಿಕಿತ್ಸೆಗಳಿಗೆ ಯಾವುದೇ ರೆಫರಲ್ ಇಲ್ಲದೆ ನೇರವಾಗಿ ನೋಂದಾಯಿತ ಆಸ್ಪತ್ರೆಗೆ ಹೋಗಿ ಚಿಕಿತ್ಸೆ ಪಡೆಯಬಹುದು.












Click it and Unblock the Notifications