NWKRTCಗೆ ಮರುನಾಮಕರಣ.. ಇನ್ಮುಂದೆ ವಾಯುವ ಕರ್ನಾಟಕ ಸಾರಿಗೆ ಸಂಸ್ಥೆ ಇರಲ್ಲ..
NWKRTC: ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ನಡೆದ ಕಿತ್ತೂರು ಉತ್ಸವದ ಸಮಾರಂಭದಲ್ಲಿ ಭಾಗವಹಿಸಿದ್ದ ಸಿಎಂ ಡಿ.ಕೆ.ಶಿವಕುಮಾರ್ ಅವರು ಉತ್ತರ ಕರ್ನಾಟಕ ಭಾಗದ ಸಾರಿಗೆ, ಪ್ರವಾಸೋದ್ಯಮ ಮತ್ತು ನೀರಾವರಿ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಪ್ರಮುಖ ಘೋಷಣೆಗಳನ್ನು ಮಾಡಿದರು. ಇದೇ ವೇಳೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ (NWKRTC) ರಾಣಿ ಚೆನ್ನಮ್ಮ ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಕಟಿಸಿ ಗಮನ ಸೆಳೆದರು.
ನಾಡಿನ ಸ್ವಾತಂತ್ರ್ಯ ಸಂಗ್ರಾಮದ ಅಪ್ರತಿಮ ನಾಯಕಿ, ಕಿತ್ತೂರು ರಾಣಿ ಚೆನ್ನಮ್ಮನವರ ಶೌರ್ಯ ಹಾಗೂ ತ್ಯಾಗದ ಸವಿನೆನಪನ್ನು ಶಾಶ್ವತವಾಗಿ ಉಳಿಸುವ ನಿಟ್ಟಿನಲ್ಲಿ ಈ ಐತಿಹಾಸಿಕ ತೀರ್ಮಾನ ಕೈಗೊಳ್ಳಲಾಗಿದೆ. ಅದರಂತೆ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯನ್ನು ಇನ್ಮುಂದೆ 'ರಾಣಿ ಚನ್ನಮ್ಮ ಸಾರಿಗೆ ಸಂಸ್ಥೆ' ಎಂದು ಅಧಿಕೃತವಾಗಿ ಮರುನಾಮಕರಣ ಮಾಡಲಾಗುವುದು ಎಂದು ಡಿ.ಕೆ. ಶಿವಕುಮಾರ್ ಘೋಷಿಸಿದರು.

ಕೋಟೆ ಮರುಸೃಷ್ಟಿಗೆ 40 ಕೋಟಿ ರೂಪಾಯಿ ಅನುದಾನ
ಸ್ಥಳೀಯ ಶಾಸಕರು ಹಾಗೂ ನಾಗರಿಕರ ದೀರ್ಘಕಾಲದ ಬೇಡಿಕೆಗೆ ಸ್ಪಂದಿಸಿದ ಸಿಎಂ ಡಿಕೆ ಶಿವಕುಮಾರ್ ಅವರು, 'ಐತಿಹಾಸಿಕ ಕಿತ್ತೂರು ರಾಣಿ ಚನ್ನಮ್ಮನ ಕೋಟೆಯನ್ನು ಮರುಸೃಷ್ಟಿಸಲು ಮುಂಬರುವ ರಾಜ್ಯ ಬಜೆಟ್‌ನಲ್ಲಿ 40 ಕೋಟಿ ರೂಪಾಯಿ ಕಾಯ್ದಿರಿಸಲಾಗುವುದು. ಈ ಸಂಬಂಧ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಲಾಗುವುದು. ನಮ್ಮ ನಾಡಿನ ವೈಭವಯುತ ಇತಿಹಾಸವನ್ನು ಮುಂದಿನ ಪೀಳಿಗೆಗೆ ತಲುಪಿಸಲು ಇಂತಹ ಸ್ಮಾರಕಗಳ ಪುನರುಜ್ಜೀವನ ಅಗತ್ಯ,' ಎಂದು ಹೇಳಿದರು.
ನೀರಾವರಿ ಯೋಜನೆಗೆ 500 ಕೋಟಿ ರೂಪಾಯಿ ಕೊಡುಗೆ
ಈ ಭಾಗದ ರೈತರ ಕೃಷಿ ಹಾಗೂ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ, ಬಹುದಿನಗಳ ಬೇಡಿಕೆಯಾಗಿದ್ದ ವೃಷಭೇಂದ್ರ ಏತನೀರಾವರಿ ಯೋಜನೆಗೆ 500 ಕೋಟಿ ರೂಪಾಯಿ ಅನುದಾನ ಮೀಸಲಿಡಲಾಗುವುದು ಎಂದು ಸ್ಪಷ್ಟಪಡಿಸಿದರು. ಸಾರಿಗೆ ಸಂಸ್ಥೆಯ ಮರುನಾಮಕರಣ, ಕೋಟೆ ಅಭಿವೃದ್ಧಿ ಹಾಗೂ ನೀರಾವರಿ ಯೋಜನೆಗೆ ನೀಡಿರುವ ಈ ಬೃಹತ್ ಕೊಡುಗೆಗಳು ಉತ್ತರ ಕರ್ನಾಟಕದ ಜನರಲ್ಲಿ ಹೊಸ ಭರವಸೆ ಹಾಗೂ ಸಂತಸ ಮೂಡಿಸಿವೆ ಎನ್ನಬಹುದು.
ಕರ್ನಾಟಕದ ನಾಲ್ಕು ಸಾರಿಗೆ ನಿಗಮಗಳ ವಿವರ
ಕರ್ನಾಟಕದಲ್ಲಿ ಜನರ ದೈನಂದಿನ ಪ್ರಯಾಣ, ಶಿಕ್ಷಣ, ಉದ್ಯೋಗ, ವ್ಯಾಪಾರ ಹಾಗೂ ಪ್ರವಾಸೋದ್ಯಮಕ್ಕೆ ಸರ್ಕಾರಿ ಬಸ್‌ಗಳು ಪ್ರಮುಖ ಪಾತ್ರ ವಹಿಸುತ್ತವೆ. ರಾಜ್ಯದ ಸಾರ್ವಜನಿಕ ರಸ್ತೆ ಸಾರಿಗೆ ವ್ಯವಸ್ಥೆಯನ್ನು ಸುಗಮವಾಗಿ ನಿರ್ವಹಿಸಲು ನಾಲ್ಕು ಪ್ರಮುಖ ಸಾರಿಗೆ ನಿಗಮಗಳು ಕಾರ್ಯನಿರ್ವಹಿಸುತ್ತಿವೆ. ಅವುಗಳೆಂದರೆ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯೂಕೆಆರ್‌ಟಿಸಿ ಮತ್ತು ಬಿಎಂಟಿಸಿ. ಇದೀಗ ಇದರಲ್ಲಿ NWKRTCಯನ್ನು ಕಿತ್ತೂರು ರಾಣಿ ಚೆನ್ನಮ್ಮ ಸಾರಿಗೆ ಸಂಸ್ಥೆ ಎಂದು ಮರುನಾಮಕಾರಣ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.
* ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC): ಇದರ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದೆ. ದಕ್ಷಿಣ ಕರ್ನಾಟಕದ ಹಲವು ಜಿಲ್ಲೆಗಳಿಗೆ ಬಸ್ ಸೇವೆ ಒದಗಿಸುವುದರ ಜೊತೆಗೆ, ರಾಜ್ಯದ ವಿವಿಧ ನಗರಗಳು ಮತ್ತು ಪಟ್ಟಣಗಳ ನಡುವೆ ಸಂಪರ್ಕ ಕಲ್ಪಿಸುತ್ತದೆ.
* ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (KKRTC): ಕಲಬುರಗಿಯಲ್ಲಿ ಕೇಂದ್ರ ಕಚೇರಿ ಹೊಂದಿರುವ ಈ ನಿಗಮವು ಕಲ್ಯಾಣ ಕರ್ನಾಟಕದ ಜಿಲ್ಲೆಗಳಲ್ಲಿ ಸಾರ್ವಜನಿಕ ಸಾರಿಗೆ ಸೇವೆ ಒದಗಿಸುತ್ತದೆ. ಗ್ರಾಮೀಣ ಪ್ರದೇಶಗಳು, ಪಟ್ಟಣಗಳು ಮತ್ತು ಪ್ರಮುಖ ನಗರಗಳ ನಡುವೆ ಪ್ರಯಾಣಿಕರ ಸಂಪರ್ಕಕ್ಕೆ ನೆರವಾಗುತ್ತದೆ.
* ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ (NWKRTC): ಹುಬ್ಬಳ್ಳಿಯನ್ನು ಕೇಂದ್ರವಾಗಿಟ್ಟುಕೊಂಡಿರುವ ಈ ನಿಗಮವು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಿಗೆ ಬಸ್ ಸೇವೆ ನೀಡುತ್ತದೆ. ಗ್ರಾಮೀಣ ಭಾಗಗಳಿಂದ ನಗರಗಳಿಗೆ ಪ್ರಯಾಣಿಸುವ ಜನರಿಗೆ ಇದರ ಸೇವೆಗಳು ಉಪಯುಕ್ತವಾಗಿವೆ. ಇದೀಗ ಈ ಸಾರಿಗೆ ಸಂಸ್ಥೆಯನ್ನು ಮರುನಾಮಕರಣ ಮಾಡುವುದಾಗಿ ಸಿಎಂ ಘೋಷಿಸಿದ್ದಾರೆ.
* ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC): ಇದು ಬೆಂಗಳೂರಿನ ನಗರ, ಉಪನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕ ಬಸ್ ಸೇವೆ ಒದಗಿಸುತ್ತದೆ. ಉದ್ಯೋಗಿಗಳು, ವಿದ್ಯಾರ್ಥಿಗಳು ಮತ್ತು ದಿನನಿತ್ಯ ಪ್ರಯಾಣಿಸುವ ಜನರಿಗೆ ಇದು ಪ್ರಮುಖ ಸಾರಿಗೆ ವ್ಯವಸ್ಥೆಯಾಗಿದೆ. ಒಟ್ಟಿನಲ್ಲಿ ಈ ನಾಲ್ಕು ನಿಗಮಗಳು ರಾಜ್ಯದ ಜನರಿಗೆ ಸಾರ್ವಜನಿಕ ಸಾರಿಗೆ ಸೌಲಭ್ಯ ಒದಗಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ ಅಂತಲೇ ಹೇಳಬಹುದು.


Click it and Unblock the Notifications
