ಹಳೇ ಪಿಂಚಣಿ ಯೋಜನೆ ಬಗ್ಗೆ ಸರ್ಕಾರಿ ನೌಕರರ ಪತ್ರ
ಹಳೇ ಪಿಂಚಣಿ ಯೋಜನೆ ಜಾರಿಗೊಳಿಸುವ ಸಂಬಂಧ ಕರ್ನಾಟಕ ರಾಜ್ಯ ಸರ್ಕಾರಿ ನೌಕರರು ಸರ್ಕಾರಕ್ಕೆ ಪತ್ರವೊಂದನ್ನು ಬರೆದಿದ್ದಾರೆ.
ಕಲಬುರಗಿ, ಮಾರ್ಚ್ 06; ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್) ರದ್ದುಗೊಳಿಸಿ ಹಳೇ ಪಿಂಚಣಿ ಯೋಜನೆ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕದ ಸರ್ಕಾರಿ ನೌಕರರು ಸರ್ಕಾರದ ಮುಂದೆ ಬೇಡಿಕೆ ಮುಂದಿಟ್ಟಿದ್ದಾರೆ. ಮಾರ್ಚ್ 1ರಂದು ನೌಕರರು ಮುಷ್ಕರ ಆರಂಭಿಸಿದಾಗ ಇದು ಸಹ ಅವರ ಪ್ರಮುಖ ಬೇಡಿಕೆಯಾಗಿತ್ತು.
ಹಣಕಾಸು ಸಚಿವರೂ ಆದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಕುರಿತು ಮಾತನಾಡಿ, "ಎನ್‌ಪಿಎಸ್ ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂದು ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ವರದಿ ತರಿಸಿಕೊಳ್ಳುತ್ತೇವೆ. ಎರಡು ತಿಂಗಳಿನಲ್ಲಿ ಈ ವರದಿ ಕೈ ಸೇರಲಿದೆ" ಎಂದು ಭರವಸೆ ನೀಡಿದ್ದರು. ಬಳಿಕ ಸರ್ಕಾರ ಸಮಿತಿ ರಚನೆ ಮಾಡಿತ್ತು.

ಈಗ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿಗಳಿಗೆ ಪತ್ರವೊಂದನ್ನು ಬರೆದಿದೆ. ಕೇಂದ್ರ ಸರ್ಕಾರದ ಮಾದರಿಯಲ್ಲಿ ದಿನಾಂಕ 01/04/2006ಕ್ಕಿಂತ ಪೂರ್ವದಲ್ಲಿ ರಾಜ್ಯ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಹೊಂದಿರುವ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸುವ ಬಗ್ಗೆ ವಿಷಯವನ್ನು ಪ್ರಸ್ತಾಪಿಸಲಾಗಿದೆ.
ಕೇಂದ್ರ ಸರ್ಕಾರವು ಉಲ್ಲೇಖಿತ ಅಧಿಸೂಚನೆಯನ್ವಯ ದಿನಾಂಕ 22/12/2003ಕ್ಕಿಂತ ಪೂರ್ವದಲ್ಲಿ ಹೊರಡಿಸಲಾದ ಅಧಿಸೂಚನೆಗಳನ್ವಯ ಕೇಂದ್ರ ಸರ್ಕಾರಿ ಸೇವೆಗೆ ಸೇರಿದ ನೌಕರರಿಗೆ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಿ ಆದೇಶಿಸಿರುತ್ತದೆ. ಕರ್ನಾಟಕ ರಾಜ್ಯದಲ್ಲಿ ದಿನಾಂಕ 01/04/2006ರಿಂದ ನೂತನ ಪಿಂಚಣಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ತಿಳಿಸಲಾಗಿದೆ.
ಈ ಯೋಜನೆ ಜಾರಿಗೊಳಿಸುವ ಪೂರ್ವದಲ್ಲಿ ಹೊರಡಿಸಲಾದ ಸರ್ಕಾರದ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳು, ನ್ಯಾಯಾಲಯದ ಮೊಕದ್ದಮೆಗಳೂ ಸೇರಿದಂತೆ ಹಲವು ಪ್ರಕರಣಗಳ ಹಿನ್ನೆಲೆಯಲ್ಲಿ ವಿಳಂಬವಾಗಿ ಅಂದರೆ ದಿನಾಂಕ 01/04/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿ ಮಾಡಿಕೊಂಡಿರುವ ನೌಕರರನ್ನು ನೂತನ ಪಿಂಚಣಿ ಯೋಜನೆ ವ್ಯಾಪ್ತಿಗೆ ಒಳಪಡಿಸಿರುವುದು ಸ್ವಾಭಾವಿಕ ನ್ಯಾಯತತ್ವಕ್ಕೆ ವಿರುದ್ಧವಾಗಿರುತ್ತದೆ.

ಮೇಲಿನ ಅಂಶಗಳ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರವು ಉಲ್ಲೇಖಿತ ಅದಿಸೂಚನೆಯನ್ವಯ ಕಲ್ಪಿಸಿರುವ ಅವಕಾಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಸಹ ದಿನಾಂಕ 01/04/2006ರ ಪೂರ್ವದಲ್ಲಿ ಹೊರಡಿಸಿದ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆಗಳಲ್ಲಿ ಪಾಲ್ಗೊಂಡು ತಡವಾಗಿ 1/4/2006ರ ನಂತರ ನೇಮಕಾತಿ ಆದೇಶ ಪಡೆದು ಕರ್ತವ್ಯಕ್ಕೆ ವರದಿಮಾಡಿಕೊಂಡಿರುವ ನೌಕರರನ್ನು ಹಳೇ ಪಿಂಚಣಿ ಯೋಜನೆ ವ್ಯಾಪ್ತಿಯಲ್ಲಿ ಪರಿಗಣಿಸಿ ಪಿಂಚಣಿ ಸೌಲಭ್ಯಗಳನ್ನು ಮಂಜೂರು ಮಾಡಿ ಆದೇಶ ಹೊರಡಿಸಲು ಕೋರಿದೆ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.
ಎನ್‌ಪಿಎಸ್ ಜಾರಿ; ಕರ್ನಾಟಕದಲ್ಲಿ ದಿನಾಂಕ 1/4/2006ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ದಿನಾಂಕ 21/02/2023 ಪತ್ರದಲ್ಲಿ ದೇಶದ ಹಲವು ರಾಜ್ಯಗಳು ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ ಎಂದು ಸರ್ಕಾರಕ್ಕೆ ಮಾಹಿತಿ ನೀಡಿದ್ದರು.
ಇದೇ ಮಾದರಿಯಲ್ಲಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಮನವಿ ಮಾಡಿದ್ದರು. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಿದೆ.
ಈ ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ನಿರ್ಧಾರಗಳನ್ನು ಕೈಗೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಸೂಕ್ತ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸತಕ್ಕದ್ದು ಎಂದು ಸರ್ಕಾರ ಆದೇಶದಲ್ಲಿ ತಿಳಿಸಿದೆ.












Click it and Unblock the Notifications