ಪ್ರತಿ ಕುಟುಂಬಕ್ಕೆ ಒಂದು ಉದ್ಯೋಗ: ಸಚಿವ ಕೆ.ಹೆಚ್ ಮುನಿಯಪ್ಪ ಮಹತ್ವದ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳವನ್ನು ಆಯೋಜಿಸುವ ಮೂಲಕ 2025 ರ ಅಕ್ಟೋಬರ್02 ರೊಳಗೆ ಜಿಲ್ಲೆಯ ಪ್ರತಿಯೊಂದು ಕುಟುಂಬದ ಒಬ್ಬರಿಗೆ ಉದ್ಯೋಗ ಸಿಗುವಂತೆ ಮಾಡುವುದು ನನ್ನ ಗುರಿ ಎಂದು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಚ್ ಮುನಿಯಪ್ಪ ಅವರು ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೌಶಲ್ಯ ಮಿಷನ್, ಜಿಲ್ಲಾ ಕೈಗಾರಿಕೆ ಕೇಂದ್ರ ಸಹಯೋಗದಲ್ಲಿ ದೇವನಹಳ್ಳಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಉದ್ದೇಶಿಸಿ ಮಾತನಾಡಿ, ಜಿಲ್ಲೆಯಲ್ಲಿ 101 ಗ್ರಾಮ ಪಂಚಾಯಿತಿಗಳಿದ್ದು, ಸುಮಾರು 2 ಲಕ್ಷ ಕುಟುಂಬಗಳಿವೆ. ಪ್ರತಿ ಕುಟುಂಬದ ಒಬ್ಬರಿಗೆ ಉದ್ಯೋಗ ಕಲ್ಪಿಸಿಕೊಡುವ ಗುರಿ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಉದ್ಯೋಗ ಮೇಳ ಅಯೋಜಿಸಲಾಗಿದ್ದು, ಇಂದು ಆರಂಭ, ಮುಂದಿನ ದಿನಗಳಲ್ಲಿ ಕಾಲಕಾಲಕ್ಕೆ ಉದ್ಯೋಗ ಮೇಳ ಆಯೋಜಿಸಿ ಮನೆ ಮನೆಗೆ ಉದ್ಯೋಗ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

One Job Per Family By October 02 2025 Says Minister KH Muniyappa

ಕಂಪನಿಗಳು ಕೂಡ ಉದ್ಯೋಗ ನೀಡುವ ನಿಟ್ಟಿನಲ್ಲಿ ಜಿಲ್ಲಾಡಳಿತದ ಜೊತೆ ಕೈ ಜೋಡಿಸಬೇಕು. ಕೌಶಲ್ಯ ಆಧಾರಿತ ಅಭ್ಯರ್ಥಿಗಳ ಅವಶ್ಯಕತೆ ಇದ್ದಲ್ಲಿ ಕಂಪನಿಗಳು ಮಾಹಿತಿಯನ್ನು ಸಂಬಂಧಪಟ್ಟ ಜಿಲ್ಲಾಡಳಿತಕ್ಕೆ ನೀಡಿದರೆ ಕಂಪನಿಗಳ ಬೇಡಿಕೆಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ಸಂಬಂಧಪಟ್ಟ ಇಲಾಖೆಯಿಂದ ಕೌಶಲ್ಯ ತರಬೇತಿ ಕಲ್ಪಿಸಿಕೊಡಲಾಗುವುದು ಎಂದು ಹೇಳಿದರು.

ಕೈಗಾರಿಕಾ ವಲಯದ ಅಭಿವೃದ್ಧಿಯಿಂದ ದೇಶದ ಪ್ರಗತಿ ಸಾಧ್ಯ. ಈಗಾಗಲೇ ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಮನೆ ಮನೆಯ ಉದ್ಯೋಗಿಗಳ ಸರ್ವೆ ನಡೆಸಲಾಗುತ್ತಿದ್ದು, ಉದ್ಯೋಗ ಇಲ್ಲದ ಮನೆಗೆ ಒಂದು ಉದ್ಯೋಗ ಕೊಡಿಸುವ ಕೆಲಸ ಆರಂಭಗೊಂಡಿದೆ ಎಂದು ಕೆ.ಎಚ್ ಮುನಿಯಪ್ಪ ಹೇಳಿದರು.

ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ. ಕೆ.ಸುಧಾಕರ್ ಅವರು ಮಾತನಾಡಿ, ಪ್ರಧಾನಮಂತ್ರಿಯವರು 10 ವರ್ಷಗಳಲ್ಲಿ 50 ಲಕ್ಷ ಕೋಟಿ ರೂ. ಮೂಲಸೌಕರ್ಯಕ್ಕೆ ಅನುದಾನ ನೀಡಿ, ಉದ್ಯಮ ಕ್ಷೇತ್ರದಲ್ಲಿ ಅಭಿವೃದ್ಧಿ ತಂದಿದ್ದಾರೆ. ಯುವಕರು ಕೇವಲ ಡಿಗ್ರಿ ಪಡೆದರೆ ಪ್ರಯೋಜನೆವಿಲ್ಲ, ಕೌಶಲ್ಯ ಭರಿತ ಶಿಕ್ಷಣ ಪಡೆದ್ರೆ ತಕ್ಷಣವೇ ಸಾಕಷ್ಟು ಉದ್ಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸ್ಟೀಲ್ ಇಂಡಿಯಾ, ಪಿ.ಎಮ್ ವಿಶ್ವಕರ್ಮ ಸೇರಿದಂತೆ ಅನೇಕ ಜನಪರ ಯೋಜನೆ ಜಾರಿಗೆ ತಂದು ಕೌಶಲ್ಯ ತರಬೇತಿ ನೀಡಿ, ಉದ್ಯೋಗ ಕಲ್ಪಿಸಿಕೊಡುತ್ತಿದೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜಂಟಿಯಾಗಿ ತಯಾರಿಕಾ ಕೈಗಾರಿಕೆಗಳು ಹೆಚ್ಚು ಸ್ಥಾಪನೆಯಾಗುವಂತೆ ಕ್ರಮ ವಹಿಸಿ, ಯುವಕರಿಗೆ ಉದ್ಯೋಗ ಕೊಡಿಸುವ ಗ್ಯಾರಂಟಿಗೆ ಒತ್ತು ನೀಡುವ ಕೆಲಸ ಆಗಬೇಕಿದೆ ಎಂದು ಹೇಳಿದರು‌‌.

ಕಿಯೋನಿಕ್ಸ್ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನಸಭಾ ಕ್ಷೇತ್ರ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರು ಮಾತನಾಡಿ, ಯುವಕರಿಗೆ ವಿದ್ಯಾಭ್ಯಾಸವಷ್ಟೇ ನೀಡಿದರೇ ಸಾಕಾಗದು, ಅವರ ಶಿಕ್ಷಣಕ್ಕೆ ತಕ್ಕ ಉದ್ಯೋಗ ಕೊಡಿಸಿ, ಕುಟುಂಬದ ಆರ್ಥಿಕ ಸ್ಥಿತಿಗತಿ ಸುಧಾರಿಸುವ ಮೂಲಕ ಸಬಲರಾಗಿಸಬೇಕೆನ್ನುವ ಸದುದ್ದೇಶದಿಂದ ಜಿಲ್ಲೆಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಿದೆ. ಸುಮಾರು 26 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ನೀಡಲು 200 ಕ್ಕೂ ಅಧಿಕ ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿವೆ.

ಜಿಲ್ಲೆ ವ್ಯಾಪ್ತಿಯಲ್ಲಿ ಅಂತರಾಷ್ಟ್ರೀಯ ಉದ್ಯಮಿಗಳಿದ್ದು, ನಿರುದ್ಯೋಗಿಗಳಿಗೆ ಸಾಕಷ್ಟು ಉದ್ಯೋಗವನ್ನು ನೀಡುತ್ತಾ ಸಾವಿರಾರು ಕುಟುಂಬಗಳಿಗೆ ನೆರವಾಗಲಿದ್ದಾರೆ. ರಾಜ್ಯ ಸರ್ಕಾರ ಯುವಕರ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಮೀಸಲು ಇಟ್ಟಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರ ಜಂಟಿಯಾಗಿ ಕೆಲಸ ಮಾಡಿದ್ರೇ ಎಲೆಕ್ಟ್ರಾನಿಕ್ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಸಾಧಿಸಬಹುದಾಗಿದೆ ಎಂದು ಹೇಳಿದರು.

1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಣೆ

ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಮಾತನಾಡಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳ ದಲ್ಲಿ 163 ಕಂಪನಿಗಳು ಹಾಗೂ 12 ಸಾವಿರ ಉದ್ಯೋಗಾಕಾಂಕ್ಷಿಗಳು ಭಾಗವಹಿಸಿದ್ದವು. 1097 ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ವಿತರಿಸಲಾಗಿದೆ. 3500 ಅಭ್ಯರ್ಥಿಗಳನ್ನು ಮುಂದಿನ ಸಂದರ್ಶನಕ್ಕಾಗಿ ಆಯ್ಕೆ ಮಾಡಲಾಗಿದೆ ಎಂದು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+