ಪರಿಶಿಷ್ಟ ಜಾತಿ ಒಳ ಮೀಸಲಾತಿ: ಏಕ ಸದಸ್ಯ ಆಯೋಗ ರಚಿಸಿದ ಸರ್ಕಾರ
ಬೆಂಗಳೂರು, ನವೆಂಬರ್ 14: ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ್ದ ಭರವಸೆಯಂತೆ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ವರದಿ ನೀಡಲು ಆಯೋಗ ರಚನೆ ಮಾಡಲಾಗಿದೆ. ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗ ರಚನೆ ಮಾಡಲಾಗಿದ್ದು, ಸಮಿತಿ ವರದಿ ಸಲ್ಲಿಕೆ ಮಾಡಲು ಎರಡು ತಿಂಗಳ ಅವಕಾಶವನ್ನು ನೀಡಲಾಗಿದೆ.
ಈ ಕುರಿತು ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಕಲಾವತಿ ಎಸ್. ವಿ. ಸರ್ಕಾರದ ಜಂಟಿ ಕಾರ್ಯದರ್ಶಿ, ಸಮಾಜ ಕಲ್ಯಾಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು Commission of Inquiry Act 1952ರ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸುವ ಕುರಿತು ಎಂಬ ವಿಷಯ ಒಳಗೊಂಡಿದೆ.

ಪ್ರಸ್ತಾವನೆ ಮತ್ತು ಆದೇಶ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು ಅನುಮೋದನೆ ನೀಡಲಾಗಿತ್ತು. ಈ ಕುರಿತು ವರದಿ ನೀಡಲು ಆಯೋಗವನ್ನು ಉಪ ಚುನಾವಣೆ ಮುಗಿದ ಬಳಿಕ ರಚನೆ ಮಾಡಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದರು.
ಪ್ರಸ್ತಾವನೆಯಲ್ಲಿ ಮಾನ್ಯ ಭಾರತ ಸರ್ವೋಚ್ಛ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ ದಿನಾಂಕ 01-08-2024 ರಂದು 6:1ರ ಅನುಪಾತದಲ್ಲಿ ಬಹುಮತದ ನಿರ್ಧಾರದೊಂದಿಗೆ ತೀರ್ಪು ನೀಡಿರುತ್ತದೆ ಎಂದು ಹೇಳಿದೆ.
ಮೇಲ್ಕಂಡ ತೀರ್ಪಿನಂತೆ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಮಂಡಿಸಲಾಗಿದ್ದು, ಸಚಿವ ಸಂಪುಟವು ದಿನಾಂಕ 28-10-2024 ರಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ದಿನಾಂಕ 01.08.2024 ರಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸಿ ನೊಂದಿಗೆ ವರದಿ ಸಲ್ಲಿಸಲು ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಲು ಅನುಮೋದಿಸಿರುತ್ತದೆ.
ಮುಂದುವರೆದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೂ ಹೊರಡಿಸಬಾರದೆಂದು ಸಚಿವ ಸಂಪುಟವು ನಿರ್ಧರಿಸಿರುತ್ತದೆ. ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಈ ಸರ್ಕಾರ ಈ ಆದೇಶವನ್ನು ಹೊರಡಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952ರ (Commission of Inquiry Act 1952) (ಕೇಂದ್ರ ಕಾಯ್ದೆ ಸಂ.60) ಸೆಕ್ಷನ್ (3)ರಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಹೆಚ್. ಎನ್. ನಾಗಮೋಹನ್ ದಾಸ್ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ.
ಸದರಿ ವಿಚಾರಣಾ ಆಯೋಗದ ಕಛೇರಿ, ವಾಹನ ವ್ಯವಸ್ಥೆ ಅಗತ್ಯ ಸಿಬ್ಬಂದಿ, ಗೌರವಧನ ಮತ್ತು ಇತರ ಸವಲತ್ತುಗಳನ್ನು ಕಲ್ಪಿಸುವ ಸಂಬಂಧ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು. ಈ ಆದೇಶವನ್ನು ಸಚಿವ ಸಂಪುಟ ಟಿಪ್ಪಣಿ ದಿನಾಂಕ 28-10-2024ರ ನಿರ್ಣಯದನ್ವಯ ಹೊರಡಿಸಲಾಗಿದೆ ಎಂದು ಹೇಳಿದೆ.












Click it and Unblock the Notifications