ಸಚಿವ ಸ್ಥಾನ ಇಷ್ಟು ಮಂದಿಗೆ ಮಾತ್ರ ಸಿಗುತ್ತೆ: ಸಿಎಂ ಸಿದ್ದರಾಮಯ್ಯ ಗುಡ್‌ನ್ಯೂಸ್
ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹಲವು ತಿಂಗಳಿನಿಂದ ಚರ್ಚೆ ನಡೆಯುತ್ತಿತ್ತು. ಕಾಂಗ್ರೆಸ್‌ನಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳ ಪಟ್ಟಿ ಕೂಡ ದೊಡ್ಡದೇ ಇದೆ. ಕೆಲವರು ಈ ಬಗ್ಗೆ ಬಹಿರಂಗವಾಗಿ ಹೇಳಿಕೆಯೂ ನೀಡಿದ್ದರು. ಘಟಾನುಘಟಿಗಳಿಗೆ ಸಚಿವ ಸ್ಥಾನ ಸಿಗಲಿದೆ ಎಂದೂ ಹೇಳಲಾಗಿತ್ತು. ಕೊನೆಗೆ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಹಿಸುದ್ದಿಯೊಂದು ಹೊರಬಿದ್ದಿದೆ. ನಂದಿ ಗಿರಿಧಾಮದಲ್ಲಿ ಸಚಿವ ಸಂಪುಟ ಸಭೆಯ ಬಳಿಕ ಸಿಎಂ ಸಿದ್ದರಾಮಯ್ಯ ಅವರೇ ಈ ವಿಚಾರದ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಪ್ರಜಾಪ್ರಭುತ್ವದಲ್ಲಿ ಎಲ್ಲರಿಗೂ ಸಚಿವರಾಗುವ ಅಧಿಕಾರವಿದೆ. ಸಚಿವ ಸ್ಥಾನದ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷದ ವರಿಷ್ಠರು ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ. 142 ಜನ ಶಾಸಕರು ನಮ್ಮ ಪಕ್ಷದವರಿದ್ದಾರೆ. ಹಾಗಾಗಿ 34 ಜನರನ್ನು ಮಾತ್ರವೇ ಸಚಿವರನ್ನಾಗಿ ಮಾಡಬಹುದು. ಎಲ್ಲರಿಗೂ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ. ಒಟ್ಟಾರೆ ಶೇ 15ರಷ್ಟು ಶಾಸಕರಿಗೆ ಮಾತ್ರವೇ ಸಚಿವ ಸ್ಥಾನ ನೀಡಲು ಸಾಧ್ಯ ಎಂದು ಸಿದ್ದರಾಮಯ್ಯ ಅವರು ಸುಳಿವು ನೀಡಿದ್ದಾರೆ.

ನಾನೇ ಐದು ವರ್ಷ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದೇನೆ. ಈ ಬಗ್ಗೆ ಅನುಮಾನ ಬರುವಂತದ್ದು ಏನಿದೆ? ಬಿಜೆಪಿ ನಮ್ಮ ಹೈಕಮಾಂಡ್ ಅಲ್ಲ, ಅವರು ಹೇಳಿದಂಗೆಲ್ಲ ನಮ್ಮಲ್ಲಿ ನಡೆಯಲ್ಲ ಎಂದೂ ಅವರು ತಿರುಗೇಟು ನೀಡಿದ್ದಾರೆ. ನಮ್ಮ ಸರ್ಕಾರದಲ್ಲಿ ಅಧಿಕಾರ ಬದಲಾವಣೆ ಬಗ್ಗೆ ಬಿಜೆಪಿ ಹಗಲುಗನಸು ಕಾಣುತ್ತಿದೆ. ಬಿಜೆಪಿಯವರು ಸುಳ್ಳನ್ನ ಮಾತ್ರ ನಂಬುತ್ತಾರೆ, ಸತ್ಯವನ್ನಲ್ಲ. ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿರುವ ಅವರಿಗೆ ಸತ್ಯ ಹೇಳಿ ಗೊತ್ತೇ ಇಲ್ಲ. ಅವರು ನಂಬುತ್ತಾರೋ, ಬಿಡುತ್ತಾರೆ ನಾವೆಲ್ಲಾ ಒಟ್ಟಾಗಿದ್ದೇವೆ. ನಮ್ಮ ಸರ್ಕಾರ ಬಂಡೆಯಂತೆ ಐದು ವರ್ಷ ಆಡಳಿತ ನಡೆಸುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿಯವರು ಅಧಿಕಾರದಲ್ಲಿದ್ದಾಗ ಏನು ಸಾಕ್ಷಿಗುಡ್ಡೆಯನ್ನು ಬಿಟ್ಟುಹೋಗಿದ್ದಾರೆ? ಅವರು ನೀರಾವರಿ, ಗ್ರಾಮೀಣಾಭಿವೃದ್ಧಿ, ಲೋಕೋಪಯೋಗಿ, ಶಿಕ್ಷಣ, ಆರೋಗ್ಯ ಕ್ಷೇತ್ರಗಳಲ್ಲಿ ಏನು ಮಾಡಿದ್ದಾರೆ? ಬಿಜೆಪಿ ನಾಲ್ಕು ವರ್ಷ ಅಧಿಕಾರದಲ್ಲಿತ್ತು. ಹೆಚ್.ಡಿ. ಕುಮಾರಸ್ವಾಮಿ ಒಂದು ವರ್ಷ ಎರಡು ತಿಂಗಳು ಸಮ್ಮಿಶ್ರ ಸರ್ಕಾರದಲ್ಲಿ ಅಧಿಕಾರದಲ್ಲಿದ್ದರು. ಅವರು ಏನು ಮಾಡಿದ್ದಾರೆ? ಏನೂ ಮಾಡದೇ ಸುಳ್ಳು ಹೇಳಿಕೊಂಡು ಜನರನ್ನು ತಪ್ಪುದಾರಿಗೆ ಎಳೆಯುವ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ 2 ವರ್ಷದ ಸರ್ಕಾರದ ಸಾಧನಾ ಸಮಾವೇಶದಲ್ಲಿ ಮಳೆಯಿದ್ದರೂ ಸುಮಾರು ಮೂರು ಲಕ್ಷಕ್ಕಿಂತ ಹೆಚ್ಚು ಜನ ಸೇರಿದ್ದರು. ಜನರು ಸರ್ಕಾರದ ಪರವಾಗಿ ಸುಮ್ಮನೆ ಬರುತ್ತಾರೆಯೇ? ಎಂದು ವಾಗ್ದಾಳಿ ನಡೆಸಿದ್ದಾರೆ.
ಜಾತಿ ಹೇಳಲು ಕೀಳರಿಮೆ
ಮನೆ ಮನೆ ಜಾತಿ ಸಮೀಕ್ಷೆಯಲ್ಲಿ ತೊಂದರೆಗಳಾಗಿದ್ದರೆ, ಆನ್‌ಲೈನ್‌ನಲ್ಲಿ ದಾಖಲು ಮಾಡಲು ತೊಂದರೆಯಿಲ್ಲ. ಯಾವುದಾದರೂ ಒಂದು ದಾರಿಯಲ್ಲಿ ಜಾತಿ ಹೇಳಿಕೊಳ್ಳಬೇಕು. ಸಮೀಕ್ಷೆ ಮಾಡುವವರು ಮನೆಗೆ ಬಂದಾಗ ಅಥವಾ ಶಿಬಿರದಲ್ಲಿ, ಆನ್‌ಲೈನ್ ಹೀಗೆ ಯಾವುದಾದರೂ ಒಂದು ವಿಧಾನದಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಜಾತಿಯ ಬಗ್ಗೆ ಮಾಹಿತಿ ನೀಡಬೇಕಾಗಿದೆ. ಸಮೀಕ್ಷೆ ಮಾಡುವವರು ಮನೆ ಮನೆಗೆ ತೆರಳುತ್ತಿದ್ದಾರೆ. ಬೆಂಗಳೂರು ನಗರದಲ್ಲಿ ಕೆಲವರು ಜಾತಿ ಬಗ್ಗೆ ಬಹಿರಂಗವಾಗಿ ಹೇಳಿಕೊಳ್ಳಲು ಕೀಳರಿಮೆ ಇದ್ದರೆ, ಅಂಥವರು ಆನ್‌ಲೈನ್‌ನಲ್ಲಿ ಜಾತಿಯ ಹೆಸರನ್ನು ದಾಖಲಿಸಬಹುದು ಎಂದು ಸಲಹೆ ನೀಡಿದ್ದಾರೆ.












Click it and Unblock the Notifications