ಡಿಸಿಎಂ ಬಿಗ್ ಆಪರೇಷನ್ ನಿಂದ ಬಿಜೆಪಿಗೆ ಮತ್ತೊಂದು ಶಾಕ್; ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆಗೆ ದಿನಾಂಕ ಫಿಕ್ಸ್ !
ಬೆಂಗಳೂರು,ಅಕ್ಟೋಬರ್ 09: 2024 ರ ಲೋಕಸಭಾ ಚುನಾವಣೆಗೆ ಭರ್ಜರಿ ತಯಾರಿ ನಡೆಸಿರುವ ಕಾಂಗ್ರೆಸ್ ನ ಆಪರೇಷನ್ ಹಸ್ತ ಭರ್ಜುರಿಯಾಗಿ ನಡೆಯುತ್ತಿದ್ದು, ಲೋಕಸಮರಕ್ಕೆ ಕೆಲ ತಿಂಗಳು ಮಾತ್ರ ಬಾಕಿ ಉಳಿದಿದ್ದು, ಬಿಜೆಪಿ ಹಾಗೂ ಜೆಡಿಎಸ್ ನ ಹಲವು ನಾಯಕರಿಗೆ ಗಾಳ ಹಾಕಿರುವ ಡಿಸಿಎಂ ಡಿ ಕೆ ಶಿವಕುಮಾರ್ ಮತ್ತೊಮ್ಮೆ ಬಿಜೆಪಿಗೆ ಶಾಕ್ ನೀಡಿದ್ದಾರೆ.
ಹೌದು, ಲೋಕಸಮರಕ್ಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಈಗಾಗಲೇ ಹಲವು ತಂತ್ರಗಾರಿಕೆಯನ್ನ ನಡೆಸಿದ್ದು, ಕಾಂಗ್ರೆಸ್ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದ್ದು, ಇತ್ತ ರಾಜ್ಯ ಕಾಂಗ್ರೆಸ್ ಹೈಕಮಾಂಡ್ ಕೊಟ್ಟ ಟಾರ್ಗೆಟ್ ನಂತೆ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಪ್ಲಾನ್ ಮಾಡಿದ್ದು ಆಪರೇಷನ್ ಹಸ್ತಕ್ಕೆ ಭರ್ಜರಿ ಪ್ಲಾನ್ ಮಾಡಿದ್ದಾರೆ.

ಹೌದು, ಈ ಹಿಂದೆ ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿಯ ಅಚರಣೆ ನೆಪದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿಯಾದ ಡಿ ಕೆ ಶಿವಕುಮಾರ್ ಅಲವರನ್ನ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ತಮ್ಮ ಮನೆಗೆ ಕರೆಸಿ ಆತಿಥ್ಯ ನೀಡಿ ಕುತೂಹಲಕ್ಕೆ ಕಾರಣರಾಗಿದ್ದರು. ಇದೀಗ ಲೋಕಸಭಾ ಚುನಾವಣೆ ಹತ್ತಿರ ಬರುತ್ತಿದ್ದಂತೆ ಹಲವು ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರುವುದು ಖಚಿತವಾಗುತ್ತಿದೆ. ಸದ್ಯ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಕ್ಷೇತ್ರದ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಶೀಘ್ರದಲ್ಲೇ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.
ಈಗಾಗಲೇ ಭಾನುವಾರ ಸಂಜೆ ಮುಖ್ಯಮಂತ್ರಿಗಳ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಇನ್ನೂ ವಿಧಾನಸಭಾ ಚುನಾವಣೆಯಲ್ಲಿ 135 ಸ್ಥಾನಗಳಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್ ಗೆ ಹೈಕಮಾಂಡ್ ನಾಯಕರು ಲೋಕಸಭಾ ಚುನಾವಣೆಯಲ್ಲಿ 20 ಕ್ಕೂ ಹೆಚ್ಚು ಸ್ಥಾನಗಳನ್ನ ಗೆಲ್ಲುವಂತೆ ಟಾರ್ಗೆಟ್ ನೀಡಿದ್ದಾರೆ ಎನ್ನಲಾಗಿದೆ. ಈ ಟಾರ್ಗೆಟ್ ನಿಂದಾಗಿ ಶತಾಯಗತಾಯ ಹೆಚ್ಚು ಸ್ಥಾನಗಳನ್ನ ಗೆಲ್ಲುವ ನಿಟ್ಟಿನಲ್ಲಿ ಕಾಂಗ್ರೆಸ್ ನಾಯಕರು ಬಿಜೆಪಿ ಹಾಗೂ ಜೆಡಿಎಸ್ ನ ಹಲವು ಅಸಮಾಧಾನಿತ ನಾಯಕರನ್ನ ಗಾಳ ಹಾಕುತ್ತಿದ್ದಾರೆ. ಹೀಗಾಗಿ ಬಿಜೆಪಿಯ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ರವರ ಭಾನುವಾರದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿ ಕೆ ಶಿವಕುಮಾರ್ ಭೇಟಿಗೆ ಮಹತ್ವ ಮಾಡಿರುವುದು ಸಾಕಷ್ಟು ಮಹತ್ವ ಪಡೆದುಕೊಂಡಿದೆ.
ಈ ಹಿಂದೆ ಹಿರಿಯೂರು ಕ್ಷೇತ್ರದ ಹಿಡಿತ ಹೊಂದಿದ್ದ ಪೂರ್ಣಿಮಾ ಶ್ರೀನಿವಾಸ್ ಅವರು ಬಿಜೆಪಿ ಸೇರ್ಪಡೆಯಾಗಿ 2018 ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ರು. 2023 ರ ವಿಧಾನಸಭಾ ಚುನಾವಣೆಯಲ್ಲಿ 30 ಸಾವಿರ ಮತಗಳಿಂದ ಹೀನಾಯ ಸೋಲು ಕಂಡಿದ್ದಾರೆ. ಇನ್ನೂ 2023 ಚುನಾವಣಾ ಸಂದರ್ಭದಲ್ಲಿಯೇ ಕಾಂಗ್ರೆಸ್ ಸೇರ್ಪಡೆಯಾಗುತ್ತಾರೆಂಬ ವದಂತಿ ಜೋರಾಗಿತ್ತು. ಇದೀಗ ಬಿಜೆಪಿಯಲ್ಲಿ ಅಸಮಾಧಾನ ಹೆಚ್ಚಾಗಿದ್ದು, ಅಕ್ಟೋಬರ್ 20 ರಂದು ಅಧಿಕೃತವಾಗಿ ಪೂರ್ಣಿಮಾ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ.












Click it and Unblock the Notifications