ಕಲ್ಯಾಣ ಕರ್ನಾಟಕಕ್ಕೆ 'ಕೈ' ಚಾಚಿದ ಆಪರೇಷನ್ ಹಸ್ತ: ಮಿನಿಸ್ಟರ್ ಬೋಸರಾಜು ಮೂಲಕ ಬಿಜೆಪಿ ನಾಯಕರನ್ನು ಸೆಳೆಯಲು ತಂತ್ರ
ಬೆಂಗಳೂರು, ಆಗಸ್ಟ್ 29: ರಾಜ್ಯದಲ್ಲಿ ಆಪರೇಷನ್ ಹಸ್ತದ ವದಂತಿ ಜೋರಾಗಿದೆ. ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಬಹಿರಂಗ ಹೇಳಿಕೆ ನೀಡುತ್ತಿದ್ದಾರೆ. ಆದರೆ, ಇದು ಆಪರೇಷನ್ ಹಸ್ತವಲ್ಲ. ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ. ಬರೀ ಹಳೇ ಮೈಸೂರು ಹಾಗೂ ಕಿತ್ತೂರು ಕರ್ನಾಟಕದ ಭಾಗದಲ್ಲಿ ಈ ಧ್ರುವೀಕರಣ ನಡೆಯುತ್ತಿಲ್ಲ. ಇದು ಕಲ್ಯಾಣ ಕರ್ನಾಟಕಕ್ಕೂ 'ಕೈ' ಚಾಚಿರುವುದು ಕಂಡುಬಂದಿದೆ.
ಕಾಂಗ್ರೆಸ್ ನಾಯಕರು ಏನೇ ಹೇಳಿದರೂ, ರಾಜ್ಯದಲ್ಲಿ ಆಪರೇಷನ್ ಹಸ್ತ ನಡೆಯುತ್ತಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. ಈಗ ಕಲ್ಯಾಣ ಕರ್ನಾಟಕದಲ್ಲಿ ಸಚಿವ ಬೋಸರಾಜು ಮೂಲಕ ಆಪರೇಷನ್ ಹಸ್ತಕ್ಕೆ ಕಾಂಗ್ರೆಸ್ ಮುಂದಾಗಿದೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿಬಂದಿವೆ.

ಈ ಕುರಿತು ಬೋಸರಾಜು ಹೇಳಿದ್ದೇನು?
ಕಲ್ಯಾಣ ಕರ್ನಾಟಕದ ಹಲವಾರು ಪ್ರಮುಖ ನಾಯಕರು ಕಾಂಗ್ರೆಸ್ ಸೇರುವ ಒಲವು ತೋರಿದ್ದಾರೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಸಣ್ಣ ನೀರಾವರಿ ಸಚಿವ ಎನ್ ಎಸ್ ಬೋಸರಾಜು ಹೇಳಿದ್ದಾರೆ.
ಹಲವರು ನನ್ನ ಸಂಪರ್ಕದಲ್ಲಿದ್ದಾರೆ. ಕಾಂಗ್ರೆಸ್ ಸೇರುವ ನಾಯಕರ ಸಂಖ್ಯೆ ನಿಖರವಾಗಿ ಹೇಳಲು ಸಾಧ್ಯವಿಲ್ಲ. ಬಿಜೆಪಿಯ ಪ್ರಮುಖ ನಾಯಕರು ಪಕ್ಷಕ್ಕೆ ಸೇರ್ಪಡೆಗೊಂಡರೆ ಅಚ್ಚರಿಪಡಬೇಕಾಗಿಲ್ಲ ಎಂದು ಮಡಿಕೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ. ಈ ನಾಯಕರು ಪಕ್ಷಕ್ಕೆ ಸೇರ್ಪಡೆಗೊಳ್ಳುವ ಸಾಧಕ-ಬಾಧಕಗಳ ಕುರಿತು ರಾಜ್ಯ ನಾಯಕರಿಗೆ ಮಾಹಿತಿ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೇಳಿಬಂದ ಹಲವು ಶಾಸಕರ ಹೆಸರುಗಳು
2019 ರಲ್ಲಿ ಕಾಂಗ್ರೆಸ್‌ನಿಂದ ಬಿಜೆಪಿಗೆ ಸೇರ್ಪಡೆಗೊಂಡ ಹಲವು ಶಾಸಕರು ಮತ್ತೆ ಮಾತೃ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಇಂಗಿತ ವ್ಯಕ್ತಪಡಿಸಿದ್ದಾರೆಂದು ತಿಳಿದುಬಂದಿದೆ. ಪಕ್ಷಕ್ಕೆ ಸೇರಿಕೊಳ್ಳಲು ಬಯಸುವವರಿಗೆ ಸಿಎಂ ಸಿದ್ದರಾಮಯ್ಯ ಸಹ ಬಹಿರಂಗ ಆಹ್ವಾನ ನೀಡಿದ್ದಾರೆ.
ಯಶವಂತಪುರ ಶಾಸಕ ಎಸ್‌ಟಿ ಸೋಮಶೇಖರ್, ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್ ಹಾಗೂ ಕೆಆರ್ ಪುರ ಶಾಸಕ ಬೈರತಿ ಬಸವರಾಜ ಅವರು ಬಿಜೆಪಿ ಸೇರ್ಪಡೆಗೊಳ್ಳಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ.
ಎಸ್ ಟಿ ಸೋಮಶೇಖರ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇನ್ನು ಕೆಲ ದಿನಗಳಲ್ಲಿ ಅವರು ಕಾಂಗ್ರೆಸ್ ಸೇರುವುದು ಬಹುತೇಕ ಪಕ್ಕಾ ಆಗಿದೆ ಎಂಬ ಅಭಿಪ್ರಾಯಗಳು ರಾಜಕೀಯ ವಲಯದಲ್ಲಿ ಹರಿದಾಡುತ್ತಿವೆ.
ಇನ್ನು ಯಲ್ಲಾಪುರ ಬಿಜೆಪಿ ಶಾಸಕ ಶಿವರಾಮ ಹೆಬ್ಬಾರ್ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗಲಿದ್ದಾರೆ ಎಂದು ವರದಿಯಾಗಿದೆ. ಅವರು ಸಹ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾತುಕತೆ ನಡೆಸಿದ್ದಾರೆ. ಇನ್ನು ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ ಅವರು ಬಹಿರಂಗವಾಗಿ ಕಾಣಿಸಿಕೊಳ್ಳುತ್ತಲೇ ಇಲ್ಲ. ಅವರು ಯಡಿಯೂರಪ್ಪ ಕರೆದಿದ್ದ ಸಭೆಗೂ ಗೈರಾಗಿದ್ದರು. ಈ ಬೆಳವಣಿಗೆಗಳು ಆಪರೇಷನ್ ಹಸ್ತದ ವದಂತಿಗಳಿಗೆ ಪುಷ್ಠಿ ನೀಡಿವೆ.












Click it and Unblock the Notifications