ಹೆಚ್ ಡಿ ಕುಮಾರಸ್ವಾಮಿಗೆ ಶಾಕ್ ಮೇಲೆ ಶಾಕ್: ಇಬ್ಬರು ಮಾಜಿ ಶಾಸಕರು ಕಾಂಗ್ರೆಸ್ ಸೇರ್ಪಡೆ
ಬೆಂಗಳೂರು, ನವೆಂಬರ್ 15: 2024 ರ ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿರುವ ಕಾಂಗ್ರೆಸ್ ಆಪರೇಷನ್ ಹಸ್ತದ ಮೂಲಕ ಬಿಜೆಪಿ ಹಾಗೂ ಜೆಡಿಎಸ್ ನ ಅಸಮಾಧಾನಿತ ನಾಯಕರಿಗೆ ಗಾಳ ಹಾಕುತ್ತಿದ್ದು,ದಳಪತಿಗಳಿಗೆ ಕಾಂಗ್ರೆಸ್ ಶಾಕ್ ಮೇಲೆ ಶಾಕ್ ನೀಡಿದ್ದು, ಇಬ್ಬರು ಜೆಡಿಎಸ್ ನ ಮಾಜಿ ಶಾಸಕರು ಬುಧವಾರ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ.
ಹೌದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಠಕ್ಕರ್ ಕೊಡಲು ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಯಾಗಿದೆ. ಆದರೆ, ಜೆಡಿಎಸ್ ನಲ್ಲಿನ ಮಾಜಿ ಹಾಗೂ ಹಾಲಿ ಶಾಸರಿಗೆ ಕಾಂಗ್ರೆಸ್ ಗಾಳ ಹಾಕುವ ಮೂಲಕ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಶಾಕ್ ನೀಡಿದಂತಾಗಿದೆ.

ತುಮಕೂರು ಗ್ರಾಮಾಂತರ ಕ್ಷೇತ್ರದ ಗೌರಿಶಂಕರ್ ಮತ್ತು ದಾಸರಹಳ್ಳಿ ಮಂಜುನಾಥ್ ಅವರು ಬುಧವಾರ ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇನ್ನೂ ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, ಜೆಡಿಎಸ್ ತೊರೆದು ಕಾಂಗ್ರೆಸ್ ಸೇರುವ ಮೂಲಕ ಜಾತ್ಯತೀತ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ನಾವಿದ್ದಾಗ ಜನತಾದಳ ಸೆಕ್ಯುಲರ್ ಆಗಿತ್ತು. ಈಗ "ಎಸ್" ಕಿತ್ತೋಗಿ ಕೇವಲ ಜನತಾದಳ ಆಗಿ ಉಳಿದಿದೆ. ಹಿಂದೆಯೂ ಬಿಜೆಪಿ ಜತೆ ಕೈ ಜೋಡಿಸಿದ್ದ ಕಾರಣಕ್ಕೆ ಜನತಾ ಪರಿವಾರದಲ್ಕಿ ಸೆಕ್ಯುಲರ್ ಸಿದ್ದಾಂತದವರೆಲ್ಲಾ ಪ್ರತ್ಯೇಕವಾಗಿ ಉಳಿದೆವು. ಈಗ ಜೆಡಿಎಸ್ ಮತ್ತೆ ಬಿಜೆಪಿ ಜತೆ ಬೆರೆಯುತ್ತಿದೆ. ನಾನು ಈ ಜೆಡಿಎಸ್ ಅನ್ನು ಬಿಜೆಪಿಯ "ಬಿ" ಟೀಮ್ ಅಂದಿದ್ದಕ್ಕೆ ಸಿಟ್ಟಾಗಿದ್ದರು. ಅಂದು ನಾನು ಹೇಳಿದ್ದನ್ನು ಇಂದು ಅವರೇ ಸಾಬೀತುಪಡಿಸಿದ್ದಾರೆ.

ಜೆಡಿಎಸ್ ಈಗ ತನ್ನ ಸ್ವರೂಪದಲ್ಲಿ ಜನಸಮುದಾಯದ ರಾಜಕೀಯ ಪಕ್ಷ ಆಗಿ ಉಳಿದಿಲ್ಲ. ಕೇವಲ ಕುಟುಂಬದ ಪಕ್ಷ ಆಗಿಯಷ್ಟೆ ಸೀಮಿತವಾಗಿದೆ. ಜೆಡಿಎಸ್ ನ ಡಬ್ಬಲ್ ಗೇಮ್ ಅನ್ನು ಸರಿಯಾಗಿ ಅರ್ಥ ಮಾಡಿಕೊಂಡಿರುವ ಗೌರಿಶಂಕರ್ ಮತ್ತು ಮಂಜುನಾಥ್ ಜತೆಗೆ ಇನ್ನೂ ಬಹಳ ಮಂದಿ ಕಾಂಗ್ರೆಸ್ ಸೇರುತ್ತಿದ್ದಾರೆ. ಆ ಮೂಲಕ ತಮ್ಮ ರಾಜಕೀಯ ಜೀವನವನ್ನು ಭದ್ರ ಮಾಡಿಕೊಳ್ಳುತ್ತಿದ್ದಾರೆ ಎಂದು ಮೆಚ್ಚುಗೆ ಸೂಚಿಸಿದರು.
ನಿಮಗೆ ನಾಚಿಕೆ ಆಗತ್ತೋ ಇಲ್ವೋ ಪ್ರಧಾನಿ ಮೋದಿಯವರೇ?
ನಾವು ಗ್ಯಾರಂಟಿ ಕಾರ್ಯಕ್ರಮಗಳನ್ನು ಕೊಟ್ಟಾಗ ಅವನ್ನು ಟೀಕಿಸಿದ್ದ ಪ್ರಧಾನಿಗಳು ಈಗ "ಮೋದಿ ಗ್ಯಾರಂಟಿ" ಹೆಸರಿನಲ್ಲಿ ಪ್ರಚಾರ ಮಾಡುತ್ತಿದ್ದಾರೆ ಎಂದು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಪ್ರಧಾನಿ ಮೋದಿಯವರೇ , ನಿಮಗೆ ನಾಚಿಕೆ ಆಗತ್ತೋ ಇಲ್ವೋ ಎಂದು ಪ್ರಶ್ನಿಸಿದರು.
ರಾಜ್ಯದ, ಕನ್ನಡ ನಾಡಿನ ಜನತೆಯ ಹಣ ಇರುವ ಸರ್ಕಾರದ ಕಾರ್ಯಕ್ರಮಗಳನ್ನು ಪ್ರಧಾನಿ ಮೋದಿಯವರು ತಮ್ಮ ಕಾರ್ಯಕ್ರಮ ಎಂದು ಬಿಂಬಿಸಿ ಪ್ರಚಾರ ಪಡೆಯುತ್ತಿರುವುದು ನಾಚಿಕೆಗೇಡಿನ ಸಂಗತಿ. ಇದಕ್ಕೆ ರಾಜ್ಯದ ಜನತೆಯ ಮತ್ತು ನಮ್ಮಗಳ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿದರು.












Click it and Unblock the Notifications