Operation Hasta: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರಲು ಸಿದ್ದರಾದ ಪ್ರಮುಖ ಬಿಜೆಪಿ ನಾಯಕರು- ಯಾರು ತಿಳಿಯಿರಿ
ಬೆಂಗಳೂರು, ಅಕ್ಟೋಬರ್ 16: 2024 ರ ಲೋಕಸಭೆ ಚುನಾವಣೆಗೂ ಮುನ್ನ ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಸೆಳೆಯಲು ಕಾಂಗ್ರೆಸ್ ಮುಂದಾಗಿದೆ. ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಅಭೂತಪೂರ್ವ ಯಶಸ್ಸು ಕಂಡಿರುವ ಕಾಂಗ್ರೆಸ್ ಮತ್ತೆ ಆಪರೇಷನ್ ಹಸ್ತದಲ್ಲಿ ನಿರತವಾಗಿದೆ ಎಂದು ಹೇಳಲಾಗುತ್ತಿದೆ.
ಜೆಡಿಎಸ್ ಹಾಗೂ ಬಿಜೆಪಿ ಮೈತ್ರಿಯಿಂದ ಕೆರಳಿರುವ ಕೆಲ ನಾಯಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಘಟಕದ ಅಧ್ಯಕ್ಷ ಸ್ಥಾನವನ್ನು ಬಿಜೆಪಿ ಇನ್ನೂ ಘೋಷಿಸಿಲ್ಲ. ವಿರೋಧ ಪಕ್ಷದ ನಾಯಕನ ಆಯ್ಕೆಯೂ ಆಗಿಲ್ಲ. ಇದು ಬಿಜೆಪಿಯಲ್ಲಿನ ಬಂಡಾಯವನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಹೇಳಲಾಗುತ್ತಿದೆ.
ರಾಜ್ಯ ಬಿಜೆಪಿ ನಾಯಕತ್ವವು ಜಿಲ್ಲಾ ಮತ್ತು ಸ್ಥಳೀಯ ಮಟ್ಟದಲ್ಲಿ ತನ್ನ ನಾಯಕರ ಮೇಲೆ ಹಿಡಿತ ಕಳೆದುಕೊಳ್ಳುತ್ತಿದೆ ಎಂಬ ಅಭಿಪ್ರಾಯಗಳು ಹೆಚ್ಚುತ್ತಿವೆ.
ಬಿಜೆಪಿಯ ಭದ್ರಕೋಟೆ ಎಂದೇ ಹೇಳಲಾಗುತ್ತಿದ್ದ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇದು ಸ್ಪಷ್ಟವಾಗಿ ಎದ್ದು ಕಾಣುತ್ತಿದೆ. ಬಿಜೆಪಿ ಮಾಜಿ ಶಾಸಕ ಸಿಟಿ ರವಿ ಅವರು ತಮ್ಮ ಬೆಂಬಲಿಗ ವರಸಿದ್ಧಿ ವೇಣುಗೋಪಾಲ್ ಸೇರಿದಂತೆ ಸ್ಥಳೀಯ ಮುಖಂಡರ ಮೇಲೆ ಹಿಡಿತವನ್ನು ಕಳೆದುಕೊಂಡಿದ್ದಾರೆ. ಸಿಟಿ ರವಿ ಸೂಚನೆಯ ಹೊರತಾಗಿಯೂ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ಸೇರಲು ಮಂದಾಗಿದ್ದಾರೆ ಎಂದು ವರದಿಯಾಗಿದೆ.

ವಿಧಾನಸಭಾ ಚುನಾವಣೆಗೂ ಮುನ್ನ ಸಿಟಿ ರವಿ ಆಪ್ತರಾಗಿದ್ದ ಎಚ್‌ಡಿ ತಮ್ಮಯ್ಯ ಕಾಂಗ್ರೆಸ್ ಸೇರಿದರು. ಸಿಟಿ ರವಿ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸಿದರು. ಚಿಕ್ಕಮಂಗಳೂರು ಕ್ಷೇತ್ರದಿಂದ ನಾಲ್ಕು ಬಾರಿ ಗೆದ್ದಿದ್ದ ರವಿ ಅವರನ್ನು ತಮ್ಮಯ್ಯ ಸೋಲಿಸಿದರು. ಈಗ ತಮ್ಮಯ್ಯ ಅವರನ್ನು ಬೆಂಬಲಿಸಿ ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ಪಡೆಗೊಳ್ಳಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರು ವಿಧಾನಸಭೆಗೆ ಚುನಾವಣೆಗೂ ಮುನ್ನ ಕಾಂಗ್ರೆಸ್ ಸೇರ್ಪಡೆಗೊಂಡರು. ಈಗ ಈ ಇಬ್ಬರು ಪ್ರಮುಖ ನಾಯಕರ ಬೆಂಬಲಿಗರು ಕಾಂಗ್ರೆಸ್ ಸೇರುವ ಕುರಿತು ಮಾತುಕತೆಗಳು ನಡೆಯುತ್ತಿವೆ.
ಶಿರಹಟ್ಟಿಯ ಮಾಜಿ ಶಾಸಕ ರುದ್ರಪ್ಪ ಲಮಾಣಿ ಅವರನ್ನು ಕಾಂಗ್ರೆಸ್‌ಗೆ ಸೇರುವಂತೆ ಜಗದೀಶ್ ಶೆಟ್ಟರ್ ಮನವೊಲಿಸಿದರು ಎಂದು ಮೂಲಗಳು ಹೇಳಿವೆ.
ಇತ್ತೀಚೆಗಷ್ಟೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದ ಹಿರಿಯೂರು ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಸೇರಿದಂತೆ ಹಲವು ಮುಖಂಡರು ಬಿಜೆಪಿ ತೊರೆಯಲು ಸಿದ್ದರಾಗಿದ್ದಾರೆ.
ಜುಲೈ 2024 ರಲ್ಲಿ ನಡೆಯು ಆಗ್ನೇಯ ಶಿಕ್ಷಕರ ಕ್ಷೇತ್ರದ ಎಂಎಲ್‌ಸಿ ಚುನಾವಣೆಯಲ್ಲಿ ಪೂರ್ಣಿಮಾ ಅವರನ್ನು ಕಣಕ್ಕಿಳಿಸುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ ಎಂದು ಅವರ ಪತಿ ಶ್ರೀನಿವಾಸ್ ಹೇಳಿದ್ದಾರೆ. ಗೊಲ್ಲ ಸಮುದಾಯಕ್ಕೆ ಸೇರಿರುವ ಪೂರ್ಣಿಮಾ ಅವರಿಗೆ ದಾವಣಗೆರೆ, ಚಿತ್ರದುರ್ಗ, ತುಮಕೂರು, ಬೆಂಗಳೂರು ಗ್ರಾಮಾಂತರ ಮತ್ತು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಗಳಲ್ಲಿ ಬೆಂಬಲಿಗರಿದ್ದಾರೆ. ಇದು ಲೋಕಸಭೆಯಲ್ಲಿ ಕಾಂಗ್ರೆಸ್‌ಗೆ ಸಹಾಯ ಮಾಡಲಿದೆ ಎಂದು ಹೇಳಲಾಗುತ್ತಿದೆ.












Click it and Unblock the Notifications