ಎಚ್.ಡಿ.ಕುಮಾರಸ್ವಾಮಿ ಸಂಪುಟದ ನಾಲ್ವರು ಸಚಿವರ ರಾಜೀನಾಮೆ?
ಬೆಂಗಳೂರು, ಜನವರಿ 15 : ಕರ್ನಾಟಕದಲ್ಲಿ ಆಪರೇಷನ್ ಕಮಲದ ಸುದ್ದಿ ಸದ್ದು ಮಾಡುತ್ತಿದೆ. ಇದರ ನಡುವೆಯೇ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸರ್ಕಾರದ ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಹೌದು, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರವನ್ನು ಉಳಿಸಲು ನಾಲ್ವರು ಸಚಿವರು ರಾಜೀನಾಮೆಗೆ ಮುಂದಾಗಿದ್ದಾರೆ. ಅತೃಪ್ತಗೊಂಡಿರುವ ಶಾಸಕರಿಗೆ ಸಚಿವ ಸ್ಥಾನ ನೀಡಿ. ನಾವು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳುತ್ತೇವೆ ಎಂದು ಸಚಿವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷದ ನಾಲ್ವರು ಸಚಿವರು ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರ ಸಮ್ಮುಖದಲ್ಲಿಯೇ ಈ ಮಾತು ಹೇಳಿರುವುದು ಕುತೂಹಲಕ್ಕೆ ಕಾರಣವಾಗಿದೆ. ಆದರೆ, ಸಿದ್ದರಾಮಯ್ಯ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.
ಸದ್ಯದ ಸುದ್ದಿಗಳ ಪ್ರಕಾರ ಕಾಂಗ್ರೆಸ್‌ನ 5 ಶಾಸಕರು ಬಿಜೆಪಿಯ ಜೊತೆ ಸಂಪರ್ಕದಲ್ಲಿದ್ದಾರೆ. ಮುಂಬೈನಲ್ಲಿ ಶಾಸಕರು ಇರಬಹುದು ಎಂದು ಶಂಕಿಸಲಾಗಿದೆ. ಶಾಸಕರು ಕಾಂಗ್ರೆಸ್ ನಾಯಕರ ಸಂಪರ್ಕಕ್ಕೆ ಸಿಗುತ್ತಿಲ್ಲ ಎಂಬುದು ಮಾತ್ರ ಗುಟ್ಟಾಗಿ ಉಳಿದಿಲ್ಲ.

ಯಾವ-ಯಾವ ಸಚಿವರು
ಬೆಂಗಳೂರಿನಲ್ಲಿ ಕಾಂಗ್ರೆಸ್‌ನ ಸಚಿವರು ಸಿದ್ದರಾಮಯ್ಯ, ದಿನೇಶ್ ಗುಂಡೂರಾವ್, ಡಾ.ಜಿ.ಪರಮೇಶ್ವರ ನೇತೃತ್ವದಲ್ಲಿ ಸೋಮವಾರ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಡಿ.ಕೆ.ಶಿವಕುಮಾರ್, ಕೆ.ಜೆ.ಜಾರ್ಜ್, ಕೃಷ್ಣ ಬೈರೇಗೌಡ ಮತ್ತು ಪ್ರಿಯಾಂಕ್ ಖರ್ಗೆ ಅವರು ರಾಜೀನಾಮೆ ನೀಡುವ ಮಾತುಗಳನ್ನು ಆಡಿದ್ದಾರೆ.

ಶಾಸಕರಿಗೆ ಸಚಿವ ಸ್ಥಾನ ಕೊಡಿ
ಕರ್ನಾಟಕದ ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಉಳಿಸುವ ಜವಾಬ್ದಾರಿ ಎಲ್ಲರ ಮೇಲಿದೆ. ನಾವು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇವೆ. ಅತೃಪ್ತ ಶಾಸಕರನ್ನು ಸಂಪುಟಕ್ಕೆ ಸೇರಿಸಿಕೊಂಡು ಸರ್ಕಾರವನ್ನು ಉಳಿಸಿಕೊಳ್ಳಿ, ಸಚಿವ ಸ್ಥಾನವನ್ನು ಬಿಟ್ಟುಕೊಟ್ಟು ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಲು ನಾವು ಸಿದ್ಧ ಎಂಬ ಸಂದೇಶವನ್ನು ಸಚಿವರು ಕೊಟ್ಟಿದ್ದಾರೆ.

ಸಭೆಯಲ್ಲಿ ಸಚಿವರ ಅಭಿಪ್ರಾಯ
ಸಚಿವ ಸ್ಥಾನ ಸಿಗಲಿಲ್ಲ, ನಿಗಮ-ಮಂಡಳಿಯಲ್ಲಿ ಸ್ಥಾನ ಸಿಕ್ಕಿಲ್ಲ ಎಂದು ಶಾಸಕರು ಅಸಮಾಧಾನಗೊಂಡಿದ್ದಾರೆ. ಆದ್ದರಿಂದ, ಸರ್ಕಾರದ ಸ್ಥಿರತೆ ಬಗ್ಗೆ ಪ್ರಶ್ನೆ ಎದ್ದಿದೆ. ಶಾಸಕರಿಗೆ ಸಚಿವ ಸ್ಥಾನ ನೀಡಿ ಅವರನ್ನು ಸಮಾಧಾನಪಡಿಸಿ ಸರ್ಕಾರವನ್ನು ಉಳಿಸಿಕೊಳ್ಳೋಣ ಎಂದು ಸಚಿವರ ಸಭೆಯಲ್ಲಿ ಅಭಿಪ್ರಾಯಗಳು ವ್ಯಕ್ತವಾಗಿವೆ.

ಕುಮಾರಸ್ವಾಮಿ ಸರಣಿ ಸಭೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರವನ್ನು ಉಳಿಸಿಕೊಳ್ಳಲು ಪ್ರಯತ್ನ ಆರಂಭಿಸಿದ್ದಾರೆ. ಆಪ್ತರೊಂದಿಗೆ ಅವರು ಸರಣಿ ಸಭೆಗಳನ್ನು ನಡೆಸುತ್ತಿದ್ದಾರೆ. ಸೋಮವಾರ ರಾತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಎಚ್.ಡಿ.ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.












Click it and Unblock the Notifications