ಹಳೆಯ ಪಿಂಚಣಿ ಯೋಜನೆ ಜಾರಿ; ಸರ್ಕಾರದಿಂದ ಸಮಿತಿ ರಚನೆ
ಕರ್ನಾಟಕ ಸರ್ಕಾರ ಸರ್ಕಾರಿ ನೌಕರರ ಬೇಡಿಕೆಯಾದ ಹಳೇ ಪಿಂಚಣಿ ವ್ಯವಸ್ಥೆ (ಒಪಿಎಸ್) ಕುರಿತು ವರದಿ ನೀಡಲು ಸಮಿತಿ ರಚನೆ ಮಾಡಿ ಆದೇಶ ಹೊರಡಿಸಿದೆ
ಬೆಂಗಳೂರು, ಮಾರ್ಚ್ 01; 7ನೇ ವೇತನ ಆಯೋಗದ ಶಿಫಾರಸು ಜಾರಿ ಮತ್ತು ಹಳೆಯ ಪಿಂಚಣಿ ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕದ ಸರ್ಕಾರಿ ನೌಕರರು ಕರೆ ನೀಡಿದ್ದ ಬಂದ್ ವಾಪಸ್ ಪಡೆಯಲಾಗಿದೆ. ಸರ್ಕಾರಿ ನೌಕರರ ವೇತನವನ್ನು ಶೇ 17ರಷ್ಟು ಏರಿಕೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಆದರೆ ಹಳೆಯ ಪಿಂಚಣಿ ಯೋಜನೆ ಜಾರಿ ವಿಚಾರ ಏನಾಯಿತು? ಎಂಬುದು ಸದ್ಯದ ಪ್ರಶ್ನೆ.
ಬುಧವಾರ ಬೆಳಗ್ಗೆ ಹಣಕಾಸು ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಹಣಕಾಸು ಸಚಿವ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಎನ್‌ಪಿಎಸ್ ಬೇರೆ ರಾಜ್ಯಗಳಲ್ಲಿ ಏನು ಆಗಿದೆ ಎಂದು ಎಸಿಎಸ್ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿ ವರದಿ ತರಿಸಿಕೊಳ್ಳುತ್ತೇವೆ. ಎರಡು ತಿಂಗಳಿನಲ್ಲಿ ಈ ವರದಿ ಕೈ ಸೇರಲಿದೆ" ಎಂದು ಭರವಸೆ ನೀಡಿದ್ದರು. ಈಗ ಸರ್ಕಾರ ಸಮಿತಿ ರಚನೆ ಮಾಡಿದೆ.

ಬುಧವಾರ ಕರ್ನಾಟಕ ರಾಜ್ಯಪಾಲರ ಆಜ್ಞಾನುಸಾರ ಮತ್ತು ಅವರ ಹೆಸರಿನಲ್ಲಿ ಸರ್ಕಾರದ ಉಪ ಕಾರ್ಯದರ್ಶಿ ಆರ್ಥಿಕ ಇಲಾಖೆ (ಆಡಳಿತ ಮತ್ತು ಸಮನ್ವಯ) ಅರುಳ್ ಕುಮಾರ ಈ ಕುರಿತು ಆದೇಶ ಹೊರಸಿದ್ದಾರೆ. ಸರ್ಕಾರ ರಚನೆ ಮಾಡಿರುವ ಸಮಿತಿ ರಾಜ್ಯದಲ್ಲಿ ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯ (ಎನ್‌ಪಿಎಸ್) ಬದಲಾಗಿ ಹಳೆಯ ಪಿಂಚಣಿ ಯೋಜನೆ (ಒಪಿಎಸ್) ಅನ್ನು ಜಾರಿಮಾಡುವ ಸಾಧ್ಯತೆಗಳ ಕುರಿತು ಅಧ್ಯಯನ ನಡೆಸಿ, ವರದಿ ನೀಡಲಿದೆ.
ಆದೇಶದ ವಿವರಗಳು; ಕರ್ನಾಟಕ ರಾಜ್ಯದಲ್ಲಿ ದಿನಾಂಕ 1/4/2006ರ ನಂತರ ಸರ್ಕಾರಿ ಸೇವೆಗೆ ಸೇರಿರುವ ನೌಕರರಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ಜಾರಿಗೆ ತರಲಾಗಿರುತ್ತದೆ. ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರ ದಿನಾಂಕ 21/02/2023 ಮನವಿಯಲ್ಲಿ ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲಿರುವ ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ದೇಶದ ಹಲವು ರಾಜ್ಯಗಳು ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಈ ಹಿಂದೆ ಜಾರಿಯಲ್ಲಿದ್ದ ಹಳೆಯ ಪಿಂಚಣಿ ಯೋಜನೆಯನ್ನು ಅನುಷ್ಠಾನಗೊಳಿಸಿರುತ್ತವೆ.

ಅದೇ ರೀತಿ ಕರ್ನಾಟಕ ರಾಜ್ಯದಲ್ಲೂ ಸಹ ರಾಷ್ಟ್ರೀಯ ಪಿಂಚಣಿ ಯೋಜನೆಯ ಬದಲಾಗಿ ಹಳೆಯ ಪಿಂಚಣಿ ಯೋಜನೆಯನ್ನು ಜಾರಿಗೆ ತರುವಂತೆ ಸರ್ಕಾರವನ್ನು ಕೋರಿರುತ್ತಾರೆ. ರಾಜ್ಯ ಸರ್ಕಾರಿ ನೌಕರರ ಸಂಘದ ಮನವಿಯನ್ನು ಪರಿಶೀಲಿಸಿದ ಸರ್ಕಾರವು ಈಗಾಗಲೇ ಹಳೆಯ ಪಿಂಚಣಿ ಯೋಜನೆ (Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲು ತೀರ್ಮಾನಿಸಿ ಆದೇಶ ಹೊರಡಿಸಿದೆ.
ಪ್ರಸ್ತಾವನೆಯನ್ನು ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ನೌಕರರ ರಾಷ್ಟ್ರೀಯ ಪಿಂಚಣಿ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಹಳೆಯ ಪಿಂಚಣಿ ಯೋಜನೆ(Defined Pension Scheme)ಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕೈಗೊಂಡಿರುವ ಕ್ರಮದ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ.
ಈ ಸಮಿತಿಯು ರಾಷ್ಟ್ರೀಯ ಪಿಂಚಣಿ ಯೋಜನೆಯ ಸೌಲಭ್ಯವನ್ನು ಸ್ಥಗಿತಗೊಳಿಸಿ ಹಳೆಯ ಪಿಂಚಣಿ ಯೋಜನೆಯನ್ನು ಪುನರ್ ಸ್ಥಾಪಿಸುವ ನಿರ್ಧಾರಗಳನ್ನು ಕೈಗೊಂಡಿರುವ ರಾಜ್ಯಗಳಿಗೆ ಭೇಟಿ ನೀಡಿ ಸೂಕ್ತ ಅಧ್ಯಯನ ನಡೆಸಿ ಎರಡು ತಿಂಗಳೊಳಗೆ ವರದಿಯನ್ನು ಸಲ್ಲಿಸತಕ್ಕದ್ದು ಎಂದು ಬುಧವಾರ ಕರ್ನಾಟಕ ಸರ್ಕಾರ ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
ನೌಕರರ ಒತ್ತಾಯ; ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಿ ನೌಕರರ ಸಂಘದ ವಿರೋಧದ ನಡುವೆಯೂ ರಾಜ್ಯ ಸರ್ಕಾರವು ಎನ್‌ಪಿಎಸ್ ಯೋಜನೆಯನ್ನು 1/4/2006 ರಿಂದ ಜಾರಿಗೆ ತಂದಿದೆ ಎಂದು ಹೇಳಿದೆ. ಈ ಯೋಜನೆಯು ಅನೇಕ ನ್ಯೂನತೆಗಳಿಂದ ಕೂಡಿರುವುದರಿಂದ ಕೆಲವೊಂದು ಉಪಲಬ್ದಗಳನ್ನು ಮಂಜೂರು ಮಾಡಿದ್ದಾಗಿಯೂ ನೌಕರರಿಗೆ ಅನುಕೂಲವಾಗುತ್ತಿಲ್ಲ ಎಂದು ಉಲ್ಲೇಖಿಸಿದೆ. ಎನ್‌ಪಿಎಸ್ ರದ್ದುಪಡಿಸಿ ಹಳೇ ಪಿಂಚಣಿ ಯೋಜನೆಯನ್ನು ಜಾರಿಗೊಳಿಸ ಬೇಕು ಎಂದು ಬೇಡಿಕೆ ಇಟ್ಟಿದೆ.












Click it and Unblock the Notifications