ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಎರಡು ದಿನ ಆರೆಂಜ್ ಅಲರ್ಟ್
ಬೆಂಗಳೂರು, ಸೆಪ್ಟೆಂಬರ್ 13 : ಕರ್ನಾಟಕದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾನುವಾರ ಮತ್ತು ಸೋಮವಾರ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಎರಡು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ.
ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.
ಶನಿವಾರ ಕರಾವಳಿ ಜಿಲ್ಲೆಗಳು, ಕೊಡಗಿನಲ್ಲಿ ಮಳೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಬಳ್ಕೂರಿನಲ್ಲಿ ಗರಿಷ್ಠ 20.9 ಸೆಂ. ಮೀ. ಮಳೆಯಾಗಿದೆ.

ಅಫಜಲಪುರ, ಕೊಪ್ಪಳ ನಗರ, ಹಿಟ್ನಾಳ, ಮುನಿರಾಬಾದ್, ಮಾನ್ವಿ, ಸಿರವಾರದಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಉತ್ತರ ಕನ್ನಡ, ಶಿವಮೊಗ್ಗದಲ್ಲಿ ಸಾಧಾರಣ ಮಳೆ ಸುರಿದಿದೆ.
ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 17ರ ತನಕ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. 50 ಕಿ. ಮೀ. ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೀನುಗಾರರು ಕಡಲಿಗೆ ಇಳಿಯದಂತೆ ಸೂಚನೆ ನೀಡಲಾಗಿದೆ.
ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಯಾದಗಿರಿ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.












Click it and Unblock the Notifications