ಆಸ್ತಿ ತೆರಿಗೆ ಪಾವತಿ ಡೆಡ್ ಲೈನ್: ಡಿ ಕೆ ಶಿವಕುಮಾರ್ ಕೊಟ್ಟ ಮಹತ್ವದ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು, ಜೂನ್ 11: ಆಸ್ತಿ ತೆರಿಗೆ ಪಾವತಿ ಮಾಡದವರಿಗೆ ಬೆಂಗಳೂರು ಮಹಾನಗರ ಪಾಲಿಕೆಯಿಂದ ನೀಡಲಾಗಿರುವ ಒನ್ ಟೈಮ್ ಸೆಟ್ಲಮೆಂಟ್ (ಓಟಿಎಸ್) ಅವಕಾಶ ಜುಲೈ 31ರವರೆಗೆ ಮಾತ್ರ ಇರಲಿದೆ. ಹೀಗಾಗಿ ತೆರಿಗೆ ಬಾಕಿ ಉಳಿಸಿಕೊಂಡಿರುವವರು ಕೊನೆಯ ದಿನಾಂಕದ ಒಳಗಾಗಿ ಈ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಮಂಗಳವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ ಶಿವಕುಮಾರ್, ಚುನಾವಣೆಗಳು ನಡೆಯುತ್ತಿದ್ದ ಕಾರಣ ತೆರಿಗೆ ಪಾವತಿ ವಿಚಾರದಲ್ಲಿ ಪಾಲಿಕೆ ಒತ್ತಡ ಹಾಕಿರಲಿಲ್ಲ. ಆಸ್ತಿ ತೆರಿಗೆ ಕಟ್ಟದವರಿಗೆ ತೆರಿಗೆ ವ್ಯಾಪ್ತಿಯಲ್ಲಿ ಬರಲು ಪಾಲಿಕೆ ವತಿಯಿಂದ ನೀಡಿರುವ ಒನ್ ಟೈಮ್ ಸೆಟ್ಲಮೆಂಟ್ ಅವಕಾಶವನ್ನು ಜುಲೈ 31ಕ್ಕೆ ಅಂತಿಮಗೊಳಿಸಲಾಗುವುದು. ಈ ಅವಕಾಶವನ್ನು ಯಾವುದೇ ಕಾರಣಕ್ಕೂ ವಿಸ್ತರಣೆ ಮಾಡುವುದಿಲ್ಲ. ಈ ಅವಕಾಶದಲ್ಲಿ ದಂಡದ ಮೇಲೆ ಶೇ.50 ರಷ್ಟು ವಿನಾಯಿತಿ ನೀಡಿದ್ದು, 100%ರಷ್ಟು ಬಡ್ಡಿ ಮನ್ನಾ ಕೂಡ ಮಾಡಲಾಗಿದೆ.

20 ಲಕ್ಷ ಕಟ್ಟಡಗಳು ಆಸ್ತಿ ತೆರಿಗೆ ವ್ಯಾಪ್ತಿಯಲ್ಲಿದ್ದು, ಅನೇಕರು ಹೊರಗಿದ್ದಾರೆ. ತೆರಿಗೆ ಪಾವತಿಸಲು ಅವರಿಗೂ ಅವಕಾಶ ಕಲ್ಪಿಸಲಾಗಿದೆ. ಅವರು ತೆರಿಗೆ ಪಾವತಿಸಿ 90 ದಿನದೊಳಗೆ ಸೂಕ್ತ ದಾಖಲೆ ಕೊಟ್ಟರೆ ಅವರಿಗೆ ಸೂಕ್ತ ಖಾತೆ ನೀಡಲಾಗುವುದು. ಇನ್ನು 4 ಲಕ್ಷ ಮಂದಿ ಆಸ್ತಿ ತೆರಿಗೆ ಪಾವತಿ ಮಾಡಿಲ್ಲ. ಈಗಾಗಲೇ 50 ಸಾವಿರ ಮಂದಿ ಈ ಅವಕಾಶ ಬಳಸಿಕೊಂಡು ಆಸ್ತಿ ತೆರಿಗೆ ಪಾವತಿಸಿದ್ದಾರೆ. ಆಗಸ್ಟ್ 1ರಿಂದ ತೆರಿಗೆ ಪಾವತಿಸದಿದ್ದರೆ ಡೀಫಾಲ್ಟರ್ ಪಟ್ಟಿಗೆ ಸೇರುತ್ತಾರೆ. ಹೀಗಾಗಿ ಜುಲೈ 31ರ ಒಳಗೆ ಆಸ್ತಿ ತೆರಿಗೆ ಪಾವತಿ ಮಾಡಿ. ಸದ್ಯದ ಲೆಕ್ಕಾಚಾರದ ಪ್ರಕಾರ 5200 ಕೋಟಿಯಷ್ಟು ತೆರಿಗೆ ಸಂಗ್ರಹವಾಗಬೇಕಿತ್ತು. ಆದರೆ ನಮಗೆ 1300 ಕೋಟಿ ಮಾತ್ರ ಸಂಗ್ರಹವಾಗಿದೆ.
20 ಲಕ್ಷ ಆಸ್ತಿ ದಾಖಲೆಗಳ ಡಿಜಿಟಲೀಕರಣ ಪ್ರಕ್ರಿಯೆ ಮಾಡಲಾಗುತ್ತಿದೆ. ಈ ಆಸ್ತಿ ಮಾಲೀಕರ ಮನೆ ಬಾಗಿಲಿಗೆ ದಾಖಲೆಗಳನ್ನು ತಲುಪಿಸಲಾಗುವುದು. 20 ಲಕ್ಷ ಆಸ್ತಿಗಳ ಪೈಕಿ 8 ಲಕ್ಷ ಆಸ್ತಿಗಳ ದಾಖಲೆಗಳು ಡಿಜಿಟಲೀಕರಣವಾಗಿದ್ದು, ಮುಂದಿನ ಮೂರು ತಿಂಗಳಲ್ಲಿ ಉಳಿದ ಆಸ್ತಿಗಳ ದಾಖಲೆಗಳನ್ನು ಡಿಜಿಟಲೀಕರಣ ಮಾಡಲು ನಿರ್ಧರಿಸಿದ್ದೇವೆ.
ಜೂನ್ 5 ರಂದು ವಿಶ್ವ ಪರಿಸರ ದಿನ ಕಾರ್ಯಕ್ರಮ ಮಾಡಬೇಕಿತ್ತು. ನೀತಿ ಸಂಹಿತೆ ಹಿನ್ನೆಲೆಯಲ್ಲಿ ಮಾಡಲು ಆಗಿರಲಿಲ್ಲ. ಹೀಗಾಗಿ ಜೂನ್ 14 ರಂದು ಬಾಲಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು ಭಾಗವಹಿಸಬಹುದು. ಹವಾಮಾನ ವೈಪರಿತ್ಯ ವಿಚಾರವಾಗಿ ಜಾಗತಿಕ ಮಟ್ಟದಲ್ಲಿ ಬೆಂಗಳೂರು ಸಿ40 ವಿಭಾಗದಲ್ಲಿ ಸ್ಥಾನ ಪಡೆದಿತ್ತು. ಬಿಬಿಎಂಪಿ ಕಳೆದ ವರ್ಷ ನವೆಂಬರ್ 27ರಂದು ಮೊದಲ ಹವಾಮಾನ ವೈಪರಿತ್ಯ ಕಾರ್ಯಯೋಜನೆಯನ್ನು ಅನಾವರಣಗೊಳಿಸಿತ್ತು.
ನಮ್ಮ ನಗರವನ್ನು ಹಸಿರಾಗಿಡಲು ಬ್ಲೂ ಗ್ರೀನ್ ಊರು ಎಂಬ ಅಭಿಯಾನ ಆರಂಭಿಸಿದ್ದು, ಹೆಚ್ಚಿನ ಮರಗಳನ್ನು ನೆಡಲು ಸಿದ್ಧತೆ ಮಾಡಲಾಗಿದೆ. ಇದರ ಜತೆಗೆ ಕ್ಲೈಮೆಟ್ ಆಕ್ಷನ್ ಸೆಲ್ ಕೂಡ ರಚಿಸಲಾಗಿದ್ದು, ಇದರಲ್ಲಿ ಬಿಡಬ್ಲ್ಯೂಎಸ್ಎಸ್ ಬಿ, ಬೆಸ್ಕಾಂ, ಬಿಎಂಟಿಸಿ, ಬಿಟಿಪಿ, ಬಿಎಂಆರ್ ಸಿಎಲ್, ಡೆಲ್ಟ್, ಘನತ್ಯಾಜ್ಯ ನಿರ್ವಹಣೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅರಣ್ಯ, ಕೈಗಾರಿಕೆ, ಗಣಿಗಾರಿಗೆ ಸೇರಿದಂತೆ ಎಲ್ಲಾ ಇಲಾಖೆಗಳನ್ನು ಒಳಗೊಳ್ಳಲಾಗಿದೆ. ಈ ಬಗ್ಗೆ ಸಂಪೂರ್ಣ ಮಾಹಿತಿ ಬಿಬಿಎಂಪಿ ಜಾಲತಾಣದಲ್ಲಿ ಲಭ್ಯವಿದೆ.












Click it and Unblock the Notifications