ಕನ್ನಡಿಗರನ್ನ ತಾಯ್ನಾಡಿಗೆ ಕರೆತರಲು ಕಾಶ್ಮೀರಕ್ಕೆ ವಿಶೇಷ ವಿಮಾನದ ವ್ಯವಸ್ಥೆ
ಕಾಶ್ಮೀರ ಪ್ರವಾಸಕ್ಕೆ ತೆರಳಿದ್ದ ಹಲವರ ಮೇಲೆ ನಡೆದ ಉಗ್ರರ ದಾಳಿಯಲ್ಲಿ ಕನ್ನಡಿಗರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ. ಇನ್ನೂ ಹಲವು ಕನ್ನಡಿಗರು ಕಾಶ್ಮೀರದಲ್ಲಿ ಸಿಲುಕಿಕೊಂಡಿದ್ದು, ಸರ್ಕಾರ ಅವರ ನೆರವಿಗೆ ಧಾವಿಸಿದೆ. ಕಾಶ್ಮೀರ ಪ್ರವಾಸಕ್ಕೆಂದು ತೆರಳಿರುವ 40ಕ್ಕೂ ಅಧಿಕ ಕನ್ನಡಿಗರು ಭಯೋತ್ಪಾದಕ ದಾಳಿಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದು, ಅವರೆಲ್ಲರನ್ನೂ ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ವಿಶೇಷ ವಿಮಾನದ ವ್ಯವಸ್ಥೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಪ್ರತಿಯೊಬ್ಬ ಕನ್ನಡಿಗನನ್ನು ಮರಳಿ ರಾಜ್ಯಕ್ಕೆ ಕ್ಷೇಮವಾಗಿ ಕರೆತರುವ ಸಂಕಲ್ಪದೊಂದಿಗೆ ನಮ್ಮ ಸರ್ಕಾರವು ಕಾರ್ಯಾಚರಣೆಗೆ ಇಳಿದಿದೆ. ಯಾರೊಬ್ಬರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಅಭಯ ನೀಡಿದ್ದಾರೆ. ಉಗ್ರ ಕೃತ್ಯದಿಂದಾಗಿ ಕಾಶ್ಮೀರದಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ರಾಜ್ಯ ಸರ್ಕಾರ ಧಾವಿಸಿದ್ದು, ಪ್ರವಾಸಿಗರ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಿದೆ. ಪ್ರವಾಸಿಗರ ಸಂಬಂಧಿಕರು, ಪರಿಚಯಸ್ಥರು ಅಥವಾ ಟೂರ್ ಏಜೆನ್ಸಿಯವರು ಪ್ರವಾಸಕ್ಕೆ ತೆರಳಿರುವವರ ವಿವರಗಳನ್ನು ನೀಡಲು ತಕ್ಷಣವೇ ಈ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ಮನವಿ ಮಾಡಿದ್ದಾರೆ.

ಭಯೋತ್ಪಾದಕ ದಾಳಿಯಲ್ಲಿ ಹಲವು ಅಮಾಯಕರು ಬಲಿಯಾದ ಈ ದುಃಖದ ಗಳಿಗೆಯಲ್ಲಿ ನೊಂದ ಜನರ ಜೊತೆ ನಾವು ನಿಂತಿದ್ದೇವೆ. ತಮ್ಮವರನ್ನು ಕಳೆದುಕೊಂಡು ಪರಿತಪಿಸುತ್ತಿರುವ ಜೀವಗಳನ್ನು ಸಾಂತ್ವನಿಸುವ ಜೊತೆಗೆ ಮೃತರ ಶವಗಳನ್ನು ಅವರ ಮನೆಗೆ ತಲುಪಿಸುವ ಕಾರ್ಯವನ್ನು ಕೂಡ ಸಚಿವರಾದ ಸಂತೋಷ್ ಲಾಡ್ ಅವರು ಅತ್ಯಂತ ಶ್ರದ್ಧಾಪೂರ್ವಕವಾಗಿ ಮಾಡುತ್ತಿದ್ದಾರೆ. ಕಾಶ್ಮೀರದಲ್ಲಿ ನೆರವಿನ ನಿರೀಕ್ಷೆಯಲ್ಲಿರುವ ಎಲ್ಲ ಕನ್ನಡಿಗರನ್ನು ನಮ್ಮ ಸರ್ಕಾರ ತಲುಪಲಿದೆ ಎಂದು ಧೈರ್ಯ ನೀಡಿದ್ದಾರೆ.
ಡಿಕೆ ಶಿವಕುಮಾರ್ ಸಂತಾಪ!
ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕರು ಮನಬಂದಂತೆ ಗುಂಡಿನ ದಾಳಿ ನಡೆಸಿರುವ ವಿಚಾರ ತಿಳಿದು ಆಘಾತವಾಯಿತು ಎಂದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಸಿಗರ ಪೈಕಿ ಶಿವಮೊಗ್ಗ ಮೂಲದ ಓರ್ವ ಕನ್ನಡಿಗ ಮೃತಪಟ್ಟಿದ್ದು, ಅವರ ಮೃತದೇಹವನ್ನು ತರಲು ಸರ್ಕಾರದಿಂದ ವ್ಯವಸ್ಥೆ ಮಾಡಲಾಗುತ್ತಿದೆ. ಕಾಶ್ಮೀರದಲ್ಲಿ ಸಿಲುಕಿರುವ ಪ್ರವಾಸಿ ಕನ್ನಡಿಗರನ್ನು ಸಂಪರ್ಕಿಸಿ, ಸುರಕ್ಷಿತವಾಗಿ ತಾಯ್ನಾಡಿಗೆ ಕರೆತರಲು ಈಗಾಗಲೇ ಪೊಲೀಸ್ ಅಧಿಕಾರಿಗಳ ತಂಡವೊಂದನ್ನು ಕಳುಹಿಸಲಾಗಿದೆ. ಮೃತರ ಕುಟುಂಬಕ್ಕೆ ತೀವ್ರ ಸಂತಾಪಗಳು ಎಂದು ಹೇಳಿದ್ದಾರೆ.

ಪಹಲ್ಗಾಮ್‌ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಯು ಹೇಡಿತನದ ಹೇಯ ಕೃತ್ಯವನ್ನು ಪ್ರತಿನಿಧಿಸುತ್ತದೆ. ಈ ಘೋರ ಅಪರಾಧಕ್ಕೆ ಕಾರಣರಾದವರು ತಮ್ಮ ಕೃತ್ಯಗಳಿಗೆ ತೀವ್ರ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಖಂಡಿಸಿದ್ದಾರೆ. ಬಲಿಪಶುಗಳ ಕ್ರೂರ ಹತ್ಯೆಗೆ ಮುನ್ನ ಅವರ ಧಾರ್ಮಿಕ ಸಂಬಂಧಗಳನ್ನು ಗುರುತಿಸುವುದು ಕೆಲವು ಬಣಗಳು ಪ್ರದರ್ಶಿಸಿದ ಅಸಹಿಷ್ಣುತೆಯನ್ನು ಎತ್ತಿ ತೋರಿಸುತ್ತದೆ. ಈ ಭಯೋತ್ಪಾದಕ ದಾಳಿಯಲ್ಲಿ ಜೀವ ಕಳೆದುಕೊಂಡವರ ಕುಟುಂಬಗಳಿಗೆ ನಾನು ನನ್ನ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ಈ ದೌರ್ಜನ್ಯಕ್ಕೆ ಕಾರಣರಾದ ಮೂರ್ಖರ ವಿರುದ್ಧ ನಮ್ಮ ಪಡೆಗಳು ಪ್ರತೀಕಾರ ತೀರಿಸಿಕೊಳ್ಳುತ್ತವೆ ಎಂಬ ವಿಶ್ವಾಸ ನನಗಿದೆ ಎಂದಿದ್ದಾರೆ.












Click it and Unblock the Notifications