ಸಾಮಾನ್ಯ ಕನಿಷ್ಠ ಕಾರ್ಯಕ್ರಮ ಸಮನ್ವಯ ಸಮಿತಿಯಲ್ಲಿ ನಿರ್ಧಾರ
ಬೆಂಗಳೂರು, ಜೂನ್ 29: ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡು ಪ್ರತಿ ಬಗ್ಗೆ ವಿಸ್ಕೃತವಾಗಿ ಚರ್ಚೆ ಮಾಡಲಾಗಿದ್ದು, ಸಮನ್ವಯ ಸಮಿತಿ ಮುಂದೆ ಮಂಡಿಸಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದರು.
ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಮನ್ವಯ ಸಮಿತಿಯ ಮೊದಲ ಸಭೆಯಲ್ಲಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ ರಚಿಸಲು ಸಮಿತಿ ರಚಿಸಲಾಗಿತ್ತು.
ವೀರಪ್ಪ ಮೊಯಿಲಿ ಅವರು ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಕರಡು ಪ್ರತಿ ನೀಡಿದ್ದು ಈ ಬಗ್ಗೆ ಸಭೆಯಲ್ಲಿ ಚರ್ಚಿಸಿದ್ದೇವೆ. ಈ ಪ್ರತಿಯಲ್ಲಿರುವ ಅನೇಕ ವಿಷಯಗಳ ಬಗ್ಗೆ ಪರಿಶೀಲನೆ ಮಾಡಿದ್ದು, ಹಲವು ಸಲಹೆಗಳು ಸಭೆಯಲ್ಲಿ ವ್ಯಕ್ತವಾಗಿವೆ.

ಈ ಎಲ್ಲ ಸಲಹೆ ಹಾಗೂ ಅಭಿಪ್ರಾಯಗಳನ್ನು ಇಂದು ಸಂಜೆ ನಡೆಯಲಿರುವ ಸಭೆಯಲ್ಲಿ ಚರ್ಚೆ ಮಾಡಲಿದ್ದೇವೆ. ಬಳಿಕ ಇಲ್ಲಿ ವ್ಯಕ್ತವಾದ ಸಲಹೆಗಳನ್ನು ಸಮನ್ವಯ ಸಮಿತಿ ಮುಂದಿಟ್ಟು ಚರ್ಚಿಸಿ ನಂತರ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು. ಇಲ್ಲಿ ನಿರ್ಧಾರವಾದ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಬಜೆಟೆನಲ್ಲಿ ಅನುದಾನ ಮೀಸಲಿಡಲಾಗುತ್ತದೆ ಎಂದರು.
ಹಿಂದಿನ ಸರಕಾರದ ಎಲ್ಲ ಕಾರ್ಯಕ್ರಮಗಳನ್ನು ಮುಂದುವರೆಸುವುದಾಗಿ ಹಿಂದಿನ ಸಮನ್ವಯ ಸಮಿತಿಯಲ್ಲೇ ಹೇಳಲಾಗಿತ್ತು. ಅಂತೆಯೇ ಮುಂದುವರೆಸಲಿದ್ದೇವೆ ಎಂದರು. ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯ, ಸಾಮಾನ್ಯ ಕನಿಷ್ಠ ಕಾರ್ಯಕ್ರಮದ ಸದಸ್ಯರಾದ ಆರ್.ವಿ.ದೇಶಪಾಂಡೆ, ಡಿ.ಕೆ. ಶಿವಕುಮಾರ್ ಸಭೆಯಲ್ಲಿ ಪಾಲ್ಗೊಂಡಿದ್ದರು.












Click it and Unblock the Notifications