ಪರಮೇಶ್ವರ್‌ಗೆ ಡಿಸಿಎಂ ಪಟ್ಟ, ಸಿದ್ದರಾಮಯ್ಯ ಘೋಷಣೆ!
ಬೆಂಗಳೂರು, ಏ.1 : ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಮತ್ತು ವಿಧಾನಪರಿಷತ್ ಸದಸ್ಯ ಡಾ.ಜಿ.ಪರಮೇಶ್ವರ ಅವರು ಉಪಮುಖ್ಯಮಂತ್ರಿಯಾಗಲಿದ್ದು, ಗುರುವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಬುಧವಾರ ಬೆಳಗ್ಗೆ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿದ್ದರಾಮಯ್ಯ ಅವರು, ಡಾ.ಜಿ.ಪರಮೇಶ್ವರ ಅವರನ್ನು ಉಪಮುಖ್ಯಮಂತ್ರಿ ಮಾಡುತ್ತೇನೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರ ಈ ದಿಢೀರ್ ನಿರ್ಧಾರ ರಾಜ್ಯ ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಉಂಟು ಮಾಡಿದೆ.

2013ರ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚನೆ ಮಾಡಿತು. ಆದರೆ, ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಿದ್ದ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಜೆಡಿಎಸ್ ಅಭ್ಯರ್ಥಿ ಸುಧಾಕರ ಲಾಲ್ ವಿರುದ್ಧ ಸೋಲು ಅನುಭವಿಸಿದ್ದರು. [ಪರಮೇಶ್ವರ ಆಸೆ ಈಡೇರ್ಸಿ ಬಿಡ್ರಪ್ಪಾ ಅತ್ಲಾಗೆ]
ಉಪ ಮುಖ್ಯಮಂತ್ರಿ ಹುದ್ದೆ ಬೇಡಿಕೆ : ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ರಾಜ್ಯದಲ್ಲಿ ಪಕ್ಷವನ್ನು ಅಧಿಕಾರಕ್ಕೆ ತಂದ ಪರಮೇಶ್ವರ ಅವರಿಗೆ ಸೂಕ್ತ ಸ್ಥಾನಮಾನ ನೀಡಬೇಕು ಎಂಬ ಕೂಗು ಕೇಳಿಬಂದಿತ್ತು. ಅವರನ್ನು ಡಿಸಿಎಂ ಮಾಡಿ ಎಂಬ ಬೇಡಿಕೆ ಹುಟ್ಟಿಕೊಂಡಿತು.
ಡಾ.ಜಿ.ಪರಮೇಶ್ವರ ಅವರು ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿದರೆ ಡಿಸಿಎಂ ಆಗಲು ಸಿದ್ಧ ಎಂದು ಹೇಳಿದ್ದರು. ಆದರೆ, ರಾಜ್ಯದಲ್ಲಿ ಡಿಸಿಎಂ ಹುದ್ದೆ ಸೃಷ್ಟಿ ಮಾಡುವುದಿಲ್ಲ ಎಂದು ಹಲವು ಬಾರಿ ಹೇಳಿದ್ದ ಸಿದ್ದರಾಮಯ್ಯ ಅವರು ಬುಧವಾರ ಈ ಅಚ್ಚರಿಯ ನಿರ್ಧಾರ ಕೈಗೊಂಡಿದ್ದಾರೆ.

ಕಳೆದ ಒಂದು ವಾರದಿಂದ ಕಾಂಗ್ರೆಸ್ ಪಕ್ಷದಲ್ಲಿ ಹಲವು ಬೆಳವಣಿಗೆಗಳು ನಡೆಯುತ್ತಿದ್ದವು. ಮಂಗಳವಾರದ ವಿಧಾನಸಭೆ ಕಲಾಪ ಮುಗಿದ ಬಳಿಕ ಕೆಲವು ಶಾಸಕರು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಮಾಡುವಂತೆ ಮನವಿ ಮಾಡಿದ್ದರು.
ಅಧಿವೇಶನದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುತ್ತದೆ ಎಂದು ಭರವಸೆ ನೀಡಿ ಕಳಿಸಿದ್ದ ಸಿದ್ದರಾಮಯ್ಯ ಅವರು ಪರಮೇಶ್ವರ ಅವರನ್ನು ಡಿಸಿಎಂ ಮಾಡುವ ನಿರ್ಧಾರವನ್ನು ಕೈಗೊಂಡಿದ್ದಾರೆ. ಪರಮೇಶ್ವರ ಅವರನ್ನು ಡಿಸಿಎಂ ಮಾಡಿ ತಮ್ಮ ಬಳಿ ಇರುವ ಖಾತೆಗಳಲ್ಲಿ ಕೆಲವನ್ನು ಅವರಿಗೆ ನೀಡಲು ಸಿದ್ದರಾಮಯ್ಯ ನಿರ್ಧರಿಸಿದ್ದು, ಈ ಕುರಿತು ಹೈಕಮಾಂಡ್ ನಾಯಕರೊಂದಿಗೂ ಮಾತುಕತೆ ನಡೆಸಿ, ಒಪ್ಪಿಗೆ ಪಡೆದಿದ್ದಾರೆ.
ಪರಮೇಶ್ವರ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಕುರಿತು ರಾಜ್ಯಪಾಲರಿಗೂ ಮಾಹಿತಿ ರವಾನಿಸಿದ್ದು, ಗುರುವಾರ ಸಂಜೆ ರಾಜಭವನದಲ್ಲಿ ಪ್ರಮಾಣ ವಚನ ಸಮಾರಂಭ ನಡೆಯಲಿದೆ. ಕಾಂಗ್ರೆಸ್ ರಾಜ್ಯ ಉಸ್ತುವಾರಿ ದಿಗ್ವಿಜಯ್ ಸಿಂಗ್ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ.
ಪರಮೇಶ್ವರ ಪ್ರತಿಕ್ರಿಯೆ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರದ ಬಗ್ಗೆ ವಿಧಾನಸೌಧದಲ್ಲಿ ಪ್ರತಿಕ್ರಿಯೆ ನೀಡಿರುವ ಪರಮೇಶ್ವರ ಅವರು ಪಕ್ಷದ ನಾಯಕರು ತೀರ್ಮಾನ ಕೈಗೊಂಡು ಯಾವುದೇ ಹುದ್ದೆ ನೀಡಿದರೂ ನಿಭಾಯಿಸಲು ಸಿದ್ಧವಾಗಿದ್ದೇನೆ ಎಂದು ತಿಳಿಸಿದ್ದಾರೆ.
[ಏ.1ರ ಪ್ರಯುಕ್ತ ಕಾಲ್ಪನಿಕ ಲೇಖನ]












Click it and Unblock the Notifications