ನಾಡಗೀತೆ ಕಡ್ಡಾಯ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು, ಏಪ್ರಿಲ್ 25: ದಿವಂಗತ ಮೈಸೂರು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ ನಾಡಗೀತೆ ಹಾಡುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್‌ ವಜಾಗೊಳಿಸಿದೆ. ಅಲ್ಲದೆ, ರಾಜ್ಯ ಸರ್ಕಾರಕ್ಕೆ ನಾಡಗೀತೆಯನ್ನು ಇಂತಹುದೇ ಧಾಟಿಯಲ್ಲಿ ಹಾಡುವಂತೆ ಕಡ್ಡಾಯಗೊಳಿಸುವ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಿದೆ.

ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರೈಸಿ ಕಾಯ್ದಿರಿಸಿದ್ದ ಮಹತ್ವದ ತೀರ್ಪನ್ನು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ಪ್ರಕಟಿಸಿತು.

Petition Challenging Nadageete Compulsory Dismissed By HC

ಶಿಕ್ಷಣ ಕಾಯಿದೆಯಡಿ ಅವಕಾಶ: ನಾಡಗೀತೆಗೆ ಮೈಸೂರು ಅನಂತಸ್ವಾಮಿ ಅವರ ಧಾಟಿಯನ್ನು ಅಳವಡಿಸಿಕೊಂಡು ಅದರ ಪೂ‌ರ್ಣಪಾಠ ಬಳಸಬೇಕು ಹಾಗೂ ಆಲಾಪವಿಲ್ಲದೇ, ಪುನರಾವರ್ತನೆ ಇಲ್ಲದೆ 2 ನಿಮಿಷ 30 ಸೆಕೆಂಡುಗಳಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ ತಡೆ ನೀಡಬೇಕು ಎಂದು ಕೋರಿದ್ದರು.

'ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಕಲಂ 3ರ ಪ್ರಕಾರ ಎಲ್ಲಾ ಶಾಲೆಗಳಲ್ಲಿ ಅಂದರೆ ಸರ್ಕಾರಿ, ಅನುದಾನಿತ, ಅನುದಾನ ರಹಿತ ಮತ್ತು ಖಾಸಗಿ ಶಾಲೆಗಳಲ್ಲಿ ನಾಡಗೀತೆಯನ್ನು ದೈನಂದಿನ ಚಟುವಟಿಕೆಗಳು ಆರಂಭವಾಗುವ ಮುನ್ನ ಹಾಗೂ ಸರ್ಕಾರದ ಇಲಾಖೆಗಳು, ನಿಗಮ, ಮಂಡಳಿ, ಪ್ರಾಧಿಕಾರ ಮುಂತಾದ ಅರೆ ಸರ್ಕಾರಿ ಸಂಸ್ಥೆಗಳು ತಮ್ಮ ಅಧಿಕೃತ ಕಾರ್ಯಕ್ರಮಗಳನ್ನು ಏರ್ಪಡಿಸುವ ಪ್ರಾರಂಭದಲ್ಲಿ ಹಾಡಬೇಕು' ಎಂಬ ರಾಜ್ಯ ಸರ್ಕಾರದ ಆದೇಶವನ್ನು ನ್ಯಾಯಪೀಠ ಎತ್ತಿ ಹಿಡಿದಿದೆ.

'ಇಂತಹ ಆದೇಶ ಹೊರಡಿಸಲು ಸರ್ಕಾರಕ್ಕೆ ಯಾವುದೇ ಶಾಸನ ರೂಪಿಸುವ ಅವಶ್ಯಕತೆ ಇಲ್ಲ. ಸರ್ಕಾರಕ್ಕೆ ತನ್ನದೇ ಕಾರ್ಯಪಾಲನಾ ಆದೇಶ ಹೊರಡಿಸುವ ನಿಹಿತ ಅಧಿಕಾರವಿದೆ. ರಾಷ್ಟ್ರಗೀತೆಯನ್ನು ಹೀಗೆಯೇ ಇಂತಿಷ್ಟೇ ಅವಧಿಯಲ್ಲಿ ಹಾಗೂ ಇಂತಹುದೇ ಧಾಟಿಯಲ್ಲಿ ಹಾಡಬೇಕು ಎಂಬಂತಹ ನಿಯಮಾವಳಿಗಳು ನಾಡಗೀತೆಯ ವಿಷಯದಲ್ಲೂ ಅನ್ವಯವಾಗುತ್ತವೆ' ಎಂದು ನ್ಯಾಯಪೀಠ ಹೇಳಿದೆ.

'ನಿರ್ದಿಷ್ಟ ರಾಗದಲ್ಲಿ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಿರುವುದರಿಂದ ಜನರ ವಾಕ್ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗುತ್ತದೆ ಎಂಬ ಅರ್ಜಿದಾರರ ವಾದದಲ್ಲಿ ಹುರುಳಿಲ್ಲ. ಸರ್ಕಾರದ ಆದೇಶ ಪ್ರಶ್ನಿಸುವ ಯಾವುದೇ ಅಧಿಕಾರವನ್ನು ಅರ್ಜಿದಾರರು ಹೊಂದಿಲ್ಲ. ಅವರೇನೂ ಸರ್ಕಾರಿ ನೌಕರರಲ್ಲ ಅಥವಾ ಅವರ ಮಕ್ಕಳು ಶಾಲೆಯಲ್ಲಿ ಕಲಿಯುತ್ತಿದ್ದಾರೆ ಎಂದಾಗಲೀ ಇಲ್ಲ. ಹೀಗಾಗಿ, ಅವರ ಮೂಲಭೂತ ಹಕ್ಕು ಉಲ್ಲಂಘನೆ ಆಗಿದೆ ಎಂಬ ಪ್ರಶ್ನೆಯೇ ಇಲ್ಲಿ ಉದ್ಭವಿಸುವುದಿಲ್ಲ. ನಿಮ್ಮ ಯಾವ ಹಕ್ಕುಗಳೂ ಉಲ್ಲಂಘನೆಯಾಗಿಲ್ಲ ಎಂಬುದನ್ನು ನೆನಪಿಡಿ. ಹೀಗಾಗಿ, ನಿಮ್ಮ ಅರ್ಜಿ ವಜಾ ಮಾಡಲಾಗುತ್ತಿದೆ' ಎಂದು ನ್ಯಾಯಪೀಠ ತೀರ್ಪಿನಲ್ಲಿ ತಿಳಿಸಿದೆ.

ಅರ್ಜಿಯ ಅಂಶಗಳೇನು?: 'ಜಯ ಭಾರತ ಜನನಿಯ ತನುಜಾತೆ, ನಾಡಗೀತೆಯನ್ನು ಅನಂತಸ್ವಾಮಿ ಸಂಯೋಜಿಸಿದ ಧಾಟಿಯಲ್ಲಿ 2 ನಿಮಿಷ 30 ಸೆಕೆಂಡ್‌ಗಳಲ್ಲಿ ಹಾಡಬೇಕು' ಎಂಬುದನ್ನು ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್‌ 25ರಂದು ಹೊರಡಿಸಿದ ಆದೇಶವನ್ನು ಅರ್ಜಿದಾರರು ಪ್ರಶ್ನಿಸಿದ್ದರು.

'ಅನಂತಸ್ವಾಮಿ ಅವರು ನಾಡಗೀತೆಯ ಕೇವಲ ಒಂದು ಪಲ್ಲವಿ ಮತ್ತು ಎರಡು ಚರಣಗಳಿಗೆ ಮಾತ್ರ ರಾಗ ಸಂಯೋಜಿಸಿದ್ದಾರೆ. ಗಾಯಕ ಮತ್ತು ಸಂಗೀತ ಸಂಯೋಜಕ ಸಿ. ಅಶ್ವತ್ಥ್‌ ಅವರು ನಾಡಗೀತೆಯ ಎಲ್ಲಾ ಚರಣಗಳಿಗೆ ರಾಗ ಸಂಯೋಜಿಸಿದ್ದಾರೆ. ಹಾಗಾಗಿ, ಸರ್ಕಾರದ ಆದೇಶ ರದ್ದುಪಡಿಸಬೇಕು ಮತ್ತು ಸಿ. ಅಶ್ವತ್ಥ್‌ ಅವರ ರಾಗ ಸಂಯೋಜಿಸಿದ ಧಾಟಿಯಲ್ಲೇ ನಾಡಗೀತೆ ಹಾಡುವುದನ್ನು ಕಡ್ಡಾಯಗೊಳಿಸಲು ಸರ್ಕಾರಕ್ಕೆ ನಿರ್ದೇಶಿಸಬೇಕು' ಎಂದು ಕೋರಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+