ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಮೊಬೈಲ್ ನಿಷೇಧ: ಸಿದ್ದರಾಮಯ್ಯ ಘೋಷಣೆ
ಮೈಸೂರು, ಸೆಪ್ಟೆಂಬರ್ 03: ಚಾಮುಂಡಿ ಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ದರ್ಶನ ಸಮಯದಲ್ಲಿ ಮೊಬೈಲ್ ನಿಷೇಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮ್ಯಯ ಅವರು ಇಂದು (ಸೆಪ್ಟೆಂಬರ್ 03) ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆ ನಡೆಸಿದರು. ಈ ಸಭೆಯಲ್ಲಿ ಬೆಟ್ಟದ ಅಭಿವೃದ್ಧಿಯ ಬಗ್ಗೆ ಮಹತ್ವದ ಚರ್ಚೆಗಳು ನಡೆಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ ಎಂದು ಘೋಷಿಸಿದರು.

ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ. ಚಾಮುಂಡಿಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆ, ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧಿಸಲಾಗಿದೆ. ಅಲ್ಲದೇ ಚಾಮುಂಡಿ ದರ್ಶನ ವೇಳೆ ಮೊಬೈಲ್ ನಿಷೇಧ ಮಾಡಲಾಗಿದೆ . ಚಾಮುಂಡಿಬೆಟ್ಟವಷ್ಟೇ ಅಲ್ಲ ಎಲ್ಲಾ ದೇಗುಲಗಳಲ್ಲೂ ಸ್ವಚ್ಛತೆಗೆ ಆದ್ಯತೆ ನೀಡಲಾಗುತ್ತದೆ. ಚಾಮುಂಡಿಬೆಟ್ಟದಲ್ಲಿ ಸುರಕ್ಷತೆ ಇರಬೇಕೆಂದು ಸಿಸಿಟಿವಿ ಅಳವಡಿಕೆ ಮಾಡಲಾಗುವುದು. ಚಾಮುಂಡಿಬೆಟ್ಟದಲ್ಲಿ ಪ್ರಸಾದ ವಿತರಣೆಗೆ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
ಚಾಮುಂಡಿ ಬೆಟ್ಟ ಅಭಿವೃದ್ಧಿ ದೃಷ್ಟಿಯಿಂದ ಪ್ರಾಧಿಕಾರ ಮಾಡಿದ್ದೇವೆ. ಹಾಗಿಯೇ ಭಕ್ತಾದಿಗಳಿಗೆ ಸೌಲಭ್ಯ ಒದಗಿಸಲು ಪ್ರಾಧಿಕಾರ ರಚನೆ ಮಾಡಲಾಗಿದ್ದು, ಅಪರಾಧ ತಡೆಗಟ್ಟಲು ಟಾಸ್ಕ್ಫೋರ್ಸ್ ರಚನೆ ಮಾಡುತ್ತೇವೆ. ದಸರಾ ಸಂದರ್ಭದಲ್ಲಿ ವಿವಿಧ ಭಾಗದಿಂದ ಜನರು ಬರುತ್ತಾರೆ. ಚಾಮುಂಡಿಬೆಟ್ಟಕ್ಕೆ ಬರುವ ಭಕ್ತರಿಗೆ ಸೌಲಭ್ಯ ಒದಗಿಸಬೇಕಿದೆ. ಚಾಮುಂಡಿಬೆಟ್ಟದಲ್ಲಿ ಸ್ವಚ್ಛತೆ ಬಗ್ಗೆ ಗಮನಹರಿಸಬೇಕೆಂದು ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದೆಯೂ ಸಮಿತಿ ಇತ್ತು. ಆದರೆ ಈಗ ಪ್ರಾಧಿಕಾರದ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು.
ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಸುತ್ತಮುತ್ತಲಿನ ಪ್ರದೇಶದ ಶುಚಿತ್ವಕ್ಕೆ ಹೆಚ್ಚು ಶ್ರಮ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.
ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಹೇಳಿದರು.












Click it and Unblock the Notifications