ಮುಂದಿನ ತಿಂಗಳೇ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಸಂಚಾರ ಆರಂಭ: ವಿ. ಸೋಮಣ್ಣ

ಕರಾವಳಿ ಮತ್ತು ರಾಜಧಾನಿ ಬೆಂಗಳೂರು ನಡುವೆ ಪ್ರಯಾಣಿಸುವ ಜನತೆಗೆ ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಭರ್ಜರಿ ಸಿಹಿಸುದ್ದಿ ನೀಡಿದ್ದಾರೆ. ಮಂಗಳೂರು-ಬೆಂಗಳೂರು ನಡುವೆ ಹೊಸ 'ವಂದೇ ಭಾರತ್ ಎಕ್ಸ್‌ಪ್ರೆಸ್' ರೈಲು ಸೇವೆ ಮುಂದಿನ ತಿಂಗಳು ಆರಂಭವಾಗಲಿದೆ ಎಂದು ಅವರು ಘೋಷಿಸಿದ್ದಾರೆ. ಶನಿವಾರ ಮಂಗಳೂರು ಜಂಕ್ಷನ್ ರೈಲು ನಿಲ್ದಾಣದ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.

ಮಂಗಳೂರು ಮತ್ತು ಬೆಂಗಳೂರು ಮಾರ್ಗದಲ್ಲಿ ಈಗಾಗಲೇ ವಿದ್ಯುದ್ದೀಕರಣ ಕಾಮಗಾರಿ ಸಂಪೂರ್ಣವಾಗಿ ಮುಕ್ತಾಯಗೊಂಡಿದೆ. ಮುಂದಿನ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ದೇಶಾದ್ಯಂತ ಕೆಲವು ಹೊಸ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆ ಪಟ್ಟಿಯಲ್ಲಿ ಬಹುನಿರೀಕ್ಷಿತ ಮಂಗಳೂರು-ಬೆಂಗಳೂರು ವಂದೇ ಭಾರತ್ ರೈಲು ಕೂಡ ಸೇರಿದೆ. ಈ ರೈಲು ಸಂಚಾರದಿಂದ ಕರಾವಳಿ ಭಾಗದ ಪ್ರಯಾಣಿಕರಿಗೆ, ಐಟಿ ಉದ್ಯೋಗಿಗಳಿಗೆ, ವಿದ್ಯಾರ್ಥಿಗಳಿಗೆ ಹಾಗೂ ವ್ಯಾಪಾರಿಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅವರು ವಿವರಿಸಿದರು.

PM Modi

ವಿಮಾನ ನಿಲ್ದಾಣದ ಬಳಿ ರೈಲು ನಿಲ್ದಾಣ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಹೊಸ ರೈಲು ನಿಲ್ದಾಣವನ್ನು ಅಭಿವೃದ್ಧಿಪಡಿಸುವ ಬಗ್ಗೆ ಕಾರ್ಯಸಾಧ್ಯತಾ ಅಧ್ಯಯನ ನಡೆಯುತ್ತಿದೆ ಎಂದು ಸೋಮಣ್ಣ ತಿಳಿಸಿದರು. ಮಂಗಳೂರು-ಸುಬ್ರಹ್ಮಣ್ಯ ರಸ್ತೆ ಪ್ಯಾಸೆಂಜರ್ ರೈಲು ಪ್ರಯಾಣಿಕರಿಗೆ ಅತ್ಯಂತ ಅನುಕೂಲಕರವಾಗಿದ್ದು, ಸಾರ್ವಜನಿಕರ ಬೇಡಿಕೆಯ ಮೇರೆಗೆ ಇದನ್ನು 'ಮೆಮು' (MEMU) ಸೇವೆಯಾಗಿ ಪರಿವರ್ತಿಸುವ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ.

ಮಂಗಳೂರು ಜಂಕ್ಷನ್ ನವೀಕರಣ

ಮಂಗಳೂರು ಜಂಕ್ಷನ್ ರೈಲು ನಿಲ್ದಾಣವನ್ನು 38 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುತ್ತಿದ್ದು, ಈ ನವೀಕೃತ ನಿಲ್ದಾಣವನ್ನು ಮುಂಬರುವ ಅಕ್ಟೋಬರ್ ತಿಂಗಳಲ್ಲಿ ಅಧಿಕೃತವಾಗಿ ಉದ್ಘಾಟಿಸಲಾಗುವುದು. 40 ಕೋಟಿ ರೂ. ವೆಚ್ಚದಲ್ಲಿ ಮಂಗಳೂರು ಜಂಕ್ಷನ್ ಯಾರ್ಡ್ ಅನ್ನು ಹೆಚ್ಚುವರಿ ಸರಕು ಸಾಗಣೆ ಟ್ರ್ಯಾಕ್‌ನೊಂದಿಗೆ ಅಭಿವೃದ್ಧಿಪಡಿಸಲಾಗುವುದು. ಈ ಯೋಜನೆಗೆ ಈಗಾಗಲೇ ಭೂಮಿ ವಶಪಡಿಸಿಕೊಳ್ಳಲಾಗಿದ್ದು, ಮಾರ್ಚ್ 2027ರ ವೇಳೆಗೆ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಇದರ ಜೊತೆಗೆ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದ ಅಭಿವೃದ್ಧಿಗಾಗಿ ಮಾಸ್ಟರ್ ಪ್ಲಾನ್ ಸಿದ್ಧಪಡಿಸಲಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು ಎಂದರು.

ಹೊಸ ರೈಲು ಮಾರ್ಗಗಳ ಅಭಿವೃದ್ಧಿ

3.300 ಕೋಟಿ ರೂ. ವೆಚ್ಚದಲ್ಲಿ ಶಿವಮೊಗ್ಗ-ಶೃಂಗೇರಿ-ಮಂಗಳೂರು ಮಾರ್ಗದಲ್ಲಿ ಹೊಸ ರೈಲು ಮಾರ್ಗ ನಿರ್ಮಾಣಕ್ಕೆ ಸಚಿವಾಲಯ ಅನುಮೋದನೆ ನೀಡಿದೆ. ಉದ್ದೇಶಿತ 332 ಕಿ.ಮೀ. ಟ್ರ್ಯಾಕ್‌ನ ಅಂತಿಮ ಸ್ಥಳ ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು. ಹಾಗೆಯೇ 8,300 ಕೋಟಿ ರೂ. ವೆಚ್ಚದಲ್ಲಿ 247ಕಿ.ಮೀ. ಉದ್ದದ ಹಾಸನ-ಮಂಗಳೂರು ಮಾರ್ಗದ ಜೋಡಿ ಮಾರ್ಗದ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಪ್ರಸ್ತುತ ಘಾಟ್ ವಿಭಾಗದಲ್ಲಿ ಸಮೀಕ್ಷೆ ನಡೆಯುತ್ತಿದ್ದು, ಡಿಪಿಆರ್ ಪರಿಶೀಲನೆಯಲ್ಲಿದೆ.

ಇದಲ್ಲದೆ, ಶೋರ್ನೂರ್ ಮತ್ತು ಮಂಗಳೂರು ನಡುವಿನ 306ಕಿ.ಮೀ. ಮಾರ್ಗದಲ್ಲಿ ರೈಲುಗಳ ವೇಗವನ್ನು ಗಂಟೆಗೆ 160ಕಿ.ಮೀ.ಗೆ ಹೆಚ್ಚಿಸಲು ಸಮೀಕ್ಷೆ ಪೂರ್ಣಗೊಂಡಿದ್ದು, ಶೀಘ್ರದಲ್ಲೇ ವಿಸ್ತೃತ ಯೋಜನಾ ವರದಿ (DPR) ಸಿದ್ಧಪಡಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+