ಕೋವಿಡ್ 19 ಕುರಿತು ಪ್ರಧಾನಿ ವಿಡಿಯೋ ಸಂವಾದ: ಮಂಗಳೂರಿನಿಂದ ಸಿಎಂ ಭಾಗಿ
ಬೆಂಗಳೂರು, ಏ.26: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಇರಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಡೆಯುವ ಕೋವಿಡ್ ಸಂಬಂಧಿತ ವಿಡಿಯೋ ಸಂವಾದದಲ್ಲಿ ಮಂಗಳೂರಿನಿಂದಲೇ ಭಾಗಿಯಾಗಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 27 ರಂದು ರಾಷ್ಟ್ರದ ಕೋವಿಡ್ ಪರಿಸ್ಥಿತಿ ಹಾಗೂ ತೆಗೆದುಕೊಳ್ಳಬೇಕಿರುವ ಕ್ರಮಗಳ ಬಗ್ಗೆ ಎಲ್ಲಾ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವೀಡಿಯೊ ಕಾನ್ಫರೆನ್ಸ್ ಕರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದಕ್ಷಿಣ ಕನ್ನಡದಿಂದ ವಿಡಿಯೋ ಕಾನ್ಫರೆನ್ಸ್‌ನಲ್ಲಿ ಭಾಗಿಯಾಗಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕಚೇರಿಯಲ್ಲಿ ವಿಡಿಯೋ ಕಾನ್ಫರೆನ್ಸಿಗೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಕೋವಿಡ್ ಬಗ್ಗೆ ಜಾಗೃತರಾಗಿರುವಂತೆ ಕೇಂದ್ರ ಸರ್ಕಾರ ಈಗಾಗಲೇ ಸೂಚನೆಯನ್ನು ಕೊಟ್ಟಿದೆ. ಕಳೆದ 8-10 ದಿನಗಳಿಂದ ಅಲ್ಪಮಟ್ಟದ ಪ್ರಕರಣಗಳು ಕೇರಳ ಮತ್ತು ಮಹಾರಾಷ್ಟ್ರದಲ್ಲಿ ಕಂಡುಬಂದಿದೆ. ಮೂರು ಅಲೆಗಳನ್ನು ನಿಭಾಯಿಸಿರುವ ಅನುಭವದಿಂದ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳುವುದು ಸೂಕ್ತ ಎನ್ನುವ ಮಾತನ್ನು ಪರಿಣಿತರು ಹೇಳಿದ್ದಾರೆ. ಈಗಾಗಲೇ ಆರೋಗ್ಯ ಸಚಿವರೂ ಹಲವಾರು ಸೂಚನೆಗಳನ್ನು ನೀಡಿದ್ದಾರೆ. ಎಪ್ರಿಲ್ 27 ರಂದು ಪ್ರಧಾನ ಮಂತ್ರಿಗಳ ವೀಡಿಯೋ ಸಂವಾದದ ನಂತರ ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಬಗ್ಗೆ ಸ್ಪಷ್ಟ ಸೂಚನೆಗಳನ್ನು ನೀಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಈ ಹಿಂದೆ ಹೇಳಿಕೆ ನೀಡಿದ್ದರು.

ಈ ಮಧ್ಯೆ ಏ.25ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ಕೋವಿಡ್ ಸಾಂಕ್ರಾಮಿಕಕ್ಕೆ ಸಂಬಂಧಿಸಿದಂತೆ ನಡೆದ ಪರಿಶೀಲನಾ ಸಭೆ ನಡೆಸಲಾಯಿತು. ರಾಜ್ಯದಲ್ಲಿ ಹೊಸ ಮಾರ್ಗಸೂಚಿಗಳನ್ನು ಹೊದಡಿಸಲಾಗಿದೆ. ಮಾಸ್ಕ್ ಹಾಕಿಕೊಳ್ಳುವುದು ಕಡ್ಡಾಯ ಮಾಡಲಾಗಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಕೋವಿಡ್ ಪ್ರಕರಣಗಳ ಸಂಖ್ಯೆಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡುವುದು, ಸಾರ್ವಜನಿಕರು ಲಸಿಕೆ ಹಾಕಿಸಿಕೊಳ್ಳುವುದನ್ನು ಹೆಚ್ವಿಸಲು ಪ್ರಚಾರ, ಮಾಹಿತಿ, ಶಿಕ್ಷಣ ಕಾರ್ಯಕ್ರಮವನ್ನು ತೀವ್ರಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸದಲ್ಲಿ ಸಿಎಂ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಏ.27ರಂದು ಬೆಳಗ್ಗೆ ಬೆಂಗಳೂರಿನಿಂದ ವಿಮಾನ ಮೂಲಕ ಮಂಗಳೂರು ತಲುಪಲಿದ್ದಾರೆ. ಮಧ್ಯಾಹ್ನ 12ಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ವೀಡಿಯೊ ಸಂವಾದ ನಡೆಯಲಿದೆ. ಬಳಿಕ ಜಿಲ್ಲೆಯ ವಿವಿಧ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಲಿದ್ದಾರೆ.












Click it and Unblock the Notifications