ಕ್ರಿಮಿನಲ್ ಕೇಸ್‌ಗಳಲ್ಲಿ ಪೊಲೀಸರೇ ಭಾಗಿ ನಾಚಿಗೇಡಿನ ವಿಷಯ: ಸಿಎಂ ಸಿದ್ದರಾಮಯ್ಯ ತರಾಟೆ
ಅಪರಾಧವನ್ನು ಸಂಪೂರ್ಣವಾಗಿ ನಿಲ್ಲಿಸಲು ಸಾಧ್ಯವಿಲ್ಲದಿದ್ದರೂ, ಅಪರಾಧ ಪ್ರಮಾಣ ಕಡಿಮೆ ಮಾಡಲು ಸಾಧ್ಯವಿದೆ. ಆದರೆ ಕಳೆದ ಸಾಲಿನಲ್ಲಿ 88 ಕ್ರಿಮಿನಲ್ ಪ್ರಕರಣಗಳಲ್ಲಿ ಪೊಲೀಸರೇ ಭಾಗಿಯಾಗಿರುವುದು ನಾಚಿಗೇಡಿನ ವಿಷಯ ಎಂದು ಸಿದ್ದರಾಮಯ್ಯ ಗರಂ ಆಗಿದ್ದಾರೆ. ಬೆಂಗಳೂರಿನ ಮಹಾ ನಿರ್ದೇಶಕರು ಹಾಗೂ ಆರಕ್ಷಕ ಮಹಾನಿರೀಕ್ಷಕರ ಕಚೇರಿಯಲ್ಲಿ ಆಯೋಜಿಸಿದ್ದ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಸಮಾಜದಲ್ಲಿ ಶಾಂತಿ ನೆಮ್ಮದಿ ಕಾಪಾಡುವ ಗುರುತರವಾದ ಕಾರ್ಯವನ್ನು ರಾಜ್ಯದ ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಮಾಡುತ್ತಿದೆ. ಪ್ರತಿಯೊಬ್ಬರಿಗೂ ರಕ್ಷಣೆ ಒದಗಿಸುವುದು, ನ್ಯಾಯ ಒದಗಿಸುವುದು ನಮ್ಮ ಸರ್ಕಾರದ ಬದ್ಧತೆಯಾಗಿದೆ. ಇದಕ್ಕೆ ಪೊಲೀಸ್ ಇಲಾಖೆ ಪೂರಕವಾಗಿ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದಾರೆ.

ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ ಅವಕಾಶ, ರಕ್ಷಣೆಯನ್ನು ಒದಗಿಸಿದೆ. ಕಾನೂನು ಎಲ್ಲರಿಗೂ ಒಂದೇ. ಯಾರು ತಪ್ಪು ಮಾಡಿದರೂ ಅದು ತಪ್ಪೇ. ಬಲಾಢ್ಯರು, ಸಮಾಜ ಘಾತುಕ ಶಕ್ತಿಗಳಿಗೆ ಯಾವುದೇ ಕಾರಣಕ್ಕೂ ಮಣೆ ಹಾಕಬಾರದು. ದುರ್ಬಲರು, ಪರಿಶಿಷ್ಟ ಜಾತಿ, ವರ್ಗದ ಜನರು, ಧಾರ್ಮಿಕ ಅಲ್ಪಸಂಖ್ಯಾತರ ರಕ್ಷಣೆ ಎಲ್ಲರ ಹೊಣೆ. ದುರ್ಬಲರು ಯಾವುದೇ ಕಾರಣಕ್ಕೂ ಅನ್ಯಾಯಕ್ಕೆ ಒಳಗಾಗಬಾರದು. ಪ್ರತಿಯೊಬ್ಬರಿಗೂ ಸಮಾನ ನ್ಯಾಯ ಒದಗಿಸುವುದು ಪೊಲೀಸರ ಕರ್ತವ್ಯ ಎಂದಿದ್ದಾರೆ.
ಠಾಣೆಗಳಲ್ಲಿ ಅಧಿಕಾರಿಗಳ ಕೆಲಸ ಸರಿ ಇಲ್ಲ
ತಹಶೀಲ್ದಾರ್ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ತಾಲೂಕಿನಲ್ಲಿ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಇದೇ ರೀತಿ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ ಮತ್ತು ಸಿಇಒ ಸರಿಯಾಗಿ ಕರ್ತವ್ಯ ನಿರ್ವಹಿಸಿದರೆ ಆ ಜಿಲ್ಲೆಯ ಜನರು ನೆಮ್ಮದಿಯಿಂದ ಇರಲು ಸಾಧ್ಯ. ಆದರೆ ಕೆಲವು ಪೊಲೀಸ್ ಠಾಣೆಗಳಲ್ಲಿ ಕೆಲವು ಅಧಿಕಾರಿಗಳು ಸರಿಯಾಗಿ ಕರ್ತವ್ಯ ನಿರ್ವಹಿಸದ ಕಾರಣಕ್ಕೆ ಜನರು ತೊಂದರೆ ಅನುಭವಿಸಬೇಕಾಗುತ್ತದೆ. ಕೊಲೆ, ಸುಲಿಗೆ, ಢಕಾಯಿತಿ, ದರೋಡೆ ಪ್ರಕರಣಗಳು ಕಳೆದ ಒಂದು ವರ್ಷದಲ್ಲಿ ಕಡಿಮೆಯಾಗಿದೆ. ಆದರೆ ಸೈಬರ್ ಅಪರಾಧ, ಡ್ರಗ್ಸ್ ಚಟುವಟಿಕೆಗಳು ಹೆಚ್ಚಾಗಿದ್ದು, ಅದನ್ನು ಮಟ್ಟ ಹಾಕಲು ಪೊಲೀಸ್ ಇಲಾಖೆ ಇನ್ನಷ್ಟು ಕಠಿಣ ಕ್ರಮಗಳನ್ನು ಜರುಗಿಸಬೇಕು ಎಂದು ಸೂಚನೆ ನೀಡಿದ್ದಾರೆ.

ನಮ್ಮ ರಾಜ್ಯದಲ್ಲಿ ಕ್ರಿಮಿನಲ್ ಪ್ರಕರಣಗಳಲ್ಲಿ ಕನ್ವಿಕ್ಷನ್ ದರ ಕಡಿಮೆಯಿದೆ. ಅಪರಾಧ ಪ್ರಕರಣಗಳಲ್ಲಿ ಭಾಗಿಯಾದವರಿಗೆ ಶಿಕ್ಷೆಯನ್ನು ಖಾತ್ರಿಪಡಿಸುವಲ್ಲಿ ಪೊಲೀಸರ ಪಾತ್ರ ಮುಖ್ಯವಾಗಿದೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಕನ್ವಿಕ್ಷನ್ ಪ್ರಮಾಣ ಕಳೆದ ವರ್ಷ ಶೇ.3ರಷ್ಟಿತ್ತು ಈಗ ಶೇ.12ಕ್ಕೆ ಸುಧಾರಿಸಿದ್ದು, ಇದನ್ನು ಇನ್ನಷ್ಟು ಉತ್ತಮಪಡಿಸಬೇಕಿದೆ.
ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಜಾರಿ
ಪೊಲೀಸರು ಜಾಗರೂಕರಾಗಿದ್ದರೆ ಅನೇಕ ಅಪರಾಧ ಪ್ರಕರಣಗಳನ್ನು ತಡೆಗಟ್ಟಲು ಸಾಧ್ಯವಿದೆ. ಎಟಿಎಂ ದರೋಡೆ ಪ್ರಕರಣಗಳು, ಬಳ್ಳಾರಿಯಲ್ಲಿ ನಡೆದ ಬ್ಯಾನರ್ ಗಲಾಟೆ ಪ್ರಕರಣಗಳನ್ನು ಪೊಲೀಸರು ಮುಂಜಾಗರೂಕತೆ ಮೂಲಕ ತಪ್ಪಿಸಬಹುದಾಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸರಿಯಾದ ಮುಂಜಾಗರೂಕತೆ ಕೈಗೊಂಡಿದ್ದರೆ, ಅಮಾಯಕರು ಕಾಲ್ತುಳಿತಕ್ಕೆ ಬಲಿಯಾಗುವುದನ್ನು ತಪ್ಪಿಸಲು ಸಾಧ್ಯವಿತ್ತು. ಜೈಲುಗಳ ಅವ್ಯವಸ್ಥೆ ಪ್ರಕರಣಗಳು, ಮಾದಕ ವಸ್ತು ಜಾಲ ನಿಯಂತ್ರಣದಲ್ಲಿ ಯಾವುದೇ ಲೋಪವನ್ನು ಸಹಿಸಲು ಸಾಧ್ಯವಿಲ್ಲ. ಮಾದಕ ವಸ್ತು ಪ್ರಕರಣಗಳಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಜರುಗಿಸಲು ಮುಂದಿನ ಅಧಿವೇಶನದಲ್ಲಿ ಹೊಸ ಕಾನೂನು ಜಾರಿಗೊಳಿಸಲು ಸರ್ಕಾರ ಸಿದ್ಧವಿದೆ ಎಂದಿದ್ದಾರೆ.
ಇದೇ ರೀತಿ ಸೈಬರ್ ಅಪರಾಧಗಳು ರಾಜ್ಯದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದ್ದು, ಇದನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಆಧುನಿಕ ತಂತ್ರಜ್ಞಾನದ ಸಮರ್ಪಕ ಬಳಕೆ ಮಾಡಬೇಕಿದೆ. ಕಾನೂನು ಸುವ್ಯವಸ್ಥೆ ಮತ್ತು ರಾಜ್ಯದ ಅಭಿವೃದ್ಧಿ ಪರಸ್ಪರ ಪೂರಕವಾಗಿವೆ. ಕಾನೂನು ಸುವ್ಯವಸ್ಥೆ ಚೆನ್ನಾಗಿದ್ದರೆ ಮಾತ್ರ ಬಂಡವಾಳ ಹೂಡಿಕೆ ಹೆಚ್ಚಾಗಿ ಅಭಿವೃದ್ಧಿ ಸಾಧಿಸಲು ಸಾಧ್ಯವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications