ರಾಯಚೂರಿನಲ್ಲಿ ಅನ್ನದಾತರಿಗೆ ಬಿತ್ತು ಲಾಠಿ ಏಟು

ಕಳೆದ ಕೆಲವು ದಿನಗಳಿಂದ ಕರ್ನಾಟಕ ರೈತ ಸಂಘದ ಕಾರ್ಯಕರ್ತರು ರಾಯಚೂರಿನ ಜಿಲ್ಲಾಧಿಕಾರಿ ಕಛೇರಿ ಎದುರು ಹಲವು ಬೇಡಿಕೆಗಳ ಇಡೇರಿಕೆಗಾಗಿ ಪ್ರತಿಭಟನೆ ನಡೆಸುತ್ತಿದ್ದರು. ಆದರೆ, ಜಿಲ್ಲಾಧಿಕಾರಿ ನಾಗರಾಜು ಸ್ಪಂದಿಸಿರಲಿಲ್ಲ. ಇದರಿಂದ ರೊಚ್ಚಿಗೆದ್ದ ರೈತರು ಸೋಮವಾರ ಏಕಾಏಕಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದರು.
ಇದರಿಂದಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪೊಲೀಸರು ಹಾಗೂ ರೈತರ ನಡುವೆ ವಾಗ್ವಾದ, ಗದ್ದಲ ಏರ್ಪಟ್ಟಿತು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಿದರು. ಲಾಠಿ ಚಾರ್ಚ್ ನಿಂದಾಗಿ ಓರ್ವ ಮಹಿಳಾ ಪೇದೆ ಸೇರಿದಂತೆ ಹಲವು ರೈತರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೇಡಿಕೆಗಳೇನು : ಜಿಲ್ಲೆಯ ಮಾನ್ವಿ ತಾಲೂಕಿನಲ್ಲಿ ನಡೆಸುತ್ತಿರುವ ಅಕ್ರಮ ಕಲ್ಲುಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಹಾಸ್ಟೆಲ್ ನಿರ್ಮಾಣಕ್ಕೆಂದು ವಶಪಡಿಸಿಕೊಂಡಿರುವ ರೈತರ ಭೂಮಿಯನ್ನು ವಾಪಸ್ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನಾಕಾರರು ಹಲವು ದಿನಗಳಿಂದ ಹೋರಾಟ ನಡೆಸುತ್ತಿದ್ದರು. (ಗಣಿ ಗಲಾಟೆ, ಸಿಎಂ ಕಚೇರಿಯಿಂದ ಡಿಸಿಗೆ ಫೋನ್)
ಜಿಲ್ಲಾಧಿಕಾರಿ ಪ್ರತಿಕ್ರಿಯೆ : ರೈತರ ಪ್ರತಿಭಟನೆ ಬಗ್ಗೆ ಮಾಧ್ಯಮಗಳಿಗೆ ಹೇಳಿಕೆ ನೀಡಿರುವ ಜಿಲ್ಲಾಧಿಕಾರಿ ನಾಗರಾಜು, ರಾಯಚೂರಿನಲ್ಲಿ ಅಕ್ರಮ ಗಣಿಗಾರಿಕೆಯನ್ನು ಬಂದ್ ಮಾಡಿಸಲಾಗಿದೆ. ಇಲ್ಲಿನ ಕೆಲವು ಸಂಘಟನೆಗಳು ಹಣ ವಸೂಲಿಗಾಗಿ ಅಮಾಯಕರನ್ನು ಕರೆತಂದು ಈ ರೀತಿಯ ಪ್ರತಿಭಟನೆ ನಡೆಸುತ್ತಿವೆ. ಇವರು ಅಕ್ರಮ ಗಣಿಗಾರಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರಲ್ಲ ಎಂದು ಹೇಳಿದ್ದಾರೆ.












Click it and Unblock the Notifications