ಚಿರು ಉಜ್ವಲ ಭವಿಷ್ಯ ಹೊಂದಿದ್ದ ಕಲಾವಿದ: ಬಿಎಸ್‌ವೈ ಸಂತಾಪ
ಬೆಂಗಳೂರು, ಜೂ. 07: ಯುವ, ಪ್ರತಿಭಾವಂತ ನಟ ಚಿರಂಜೀವಿ ಸರ್ಜಾ ಅವರ ಅಕಾಲಿಕ ನಿಧನಕ್ಕೆ ರಾಜಕೀಯ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಹಲವು ರಾಜಕೀಯ ನಾಯಕರು ಸಂತಾಪ ವ್ಯಕ್ತಪಡಿಸಿದ್ದಾರೆ.
ಚಿರಂಜಿವಿ ಸರ್ಜಾ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತೀವ್ರ ಸಂತಾಪ ಸೂಚಿಸಿದ್ದು, ಹಲವಾರು ಜನಪ್ರಿಯ ಹಾಗೂ ಯಶಸ್ವಿ ಚಲನಚಿತ್ರಗಳಲ್ಲಿ ನಟಿಸಿರುವ ಅವರು, ಇನ್ನೂ ಪ್ರವರ್ಧಮಾನಕ್ಕೆ ಬರಬೇಕಿದ್ದ, ಉಜ್ವಲ ಭವಿಷ್ಯವನ್ನು ಹೊಂದಿದ್ದ ಕಲಾವಿದ. ಅವರ ನಿಧನದಿಂದ ಕನ್ನಡ ಚಲನಚಿತ್ರ ರಂಗ ಓರ್ವ ಉತ್ತಮ ನಟನನ್ನು ಕಳೆದುಕೊಂಡಂತಾಗಿದೆ. ಭಗವಂತ ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
Breaking: ನಟ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ನಿಧನ
ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಿರಂಜೀವಿ ಸರ್ಜಾ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಅವರ ಸಾವಿನ ಸುದ್ದಿ ನೋವುಂಟುಮಾಡಿದೆ. ಇನ್ನಷ್ಟು ಕಾಲ ನಟಿಸುತ್ತಾ, ಎಲ್ಲರನ್ನು ರಂಜಿಸುತ್ತಾ ನಮ್ಮ ನಡುವೆ ಈ ಹುಡುಗ ಇರಬೇಕಿತ್ತು. ಅವರ ದುಃಖತಪ್ತ ಕುಟುಂಬ ವರ್ಗದವರಿಗೆ ಹಾಗೂ ಅಭಿಮಾನಿಗಳಿಗೆ ನನ್ನ ಸಂತಾಪಗಳು ಎಂದು ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ನಟ ಚಿರಂಜೀವಿ ಸರ್ಜಾ ಅವರು ಹೃದಯಾಘಾತದಿಂದ ನಿಧನರಾದ ಸುದ್ದಿ ಕೇಳಿ ತೀವ್ರ ದುಃಖವಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಭಿಮಾನಿಗಳಿಗೆ ಹಾಗೂ ಬಂಧು ಮಿತ್ರರಿಗೆ ಈ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.