ಶಿಗ್ಗಾಂವಿಯಲ್ಲಿ ರಾಜಕೀಯ ಹೈಡ್ರಾಮಾ: ಜಮೀರ್ ಕಾರ್ ಗ್ಲಾಸ್ ಪೀಸ್.. ಪೀಸ್!
ಸಚಿವ ಜಮೀರ್ ಅಹ್ಮದ್‌ಖಾನ್‌ಗೆ ಶಿಗ್ಗಾಂವಿಯಲ್ಲಿ ಬಂಡಾಯದ ಬಿಸಿ ಮುಟ್ಟಿದೆ. ಕರ್ನಾಟಕದ ಮೂರು ಪ್ರಮುಖ ವಿಧಾನಸಭೆ ಉಪ ಚುನಾವಣೆಗಳಲ್ಲಿ ಶಿಗ್ಗಾಂವಿ ವಿಧಾನಸಭೆ ಚುನಾವಣೆಯೂ ಒಂದಾಗಿದೆ. ರಾಜ್ಯ ಕಾಂಗ್ರೆಸ್ ಸರ್ಕಾರವು ಮೂರು ವಿಧಾನಸಭೆ ಉಪ ಚುನಾವಣೆಗಳಲ್ಲಿ ಹೇಗಾದರೂ ಗೆಲ್ಲಬೇಕು ಎನ್ನುವ ತಂತ್ರ ಅನುಸರಿಸುತ್ತಿದೆ. ಆದರೆ, ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಬಂಡಾಯದ ಬಿಸಿ ಮುಟ್ಟಿದ್ದು, ಅದು ಸಚಿವ ಜಮೀರ್‌ಗೆ ತಟ್ಟಿದೆ.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಈ ಬಾರಿ ಅಜ್ಜಂಪೀರ್ ಖಾದ್ರಿ ಅವರಿಗೆ ಟಿಕೆಟ್ ಸಿಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ, ಕಾಂಗ್ರೆಸ್ ಹೈಕಮಾಂಡ್ ಈ ಬಾರಿಯೂ ಯಾಸಿರ್ ಅಹ್ಮದ್ ಖಾನ್‌ಗೆ ಮಣೆ ಹಾಕಿದೆ. ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ನಾಯಕರೇ ಈ ನಿರ್ಣಯದ ಬಗ್ಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಕಳೆದ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ಯಾಸಿರ್‌ಗೆ ಟಿಕೆಟ್ ನೀಡಿತ್ತು. ಆದರೆ, ಅವರು ಹೀನಾಯವಾಗಿ ಸೋತಿದ್ದರು. ಈ ಬಾರಿಯೂ ಅವರಿಗೆ ಟಿಕೆಟ್ ನೀಡಿರುವುದು ಅಜ್ಜಂಪೀರ್ ಖಾದ್ರಿ ಬೆಂಬಲಿಗರ ಆಕ್ರೋಶಕ್ಕೆ ಕಾರಣವಾಗಿದೆ. ಬಂಡಾಯವೆದ್ದಿರುವ ಅಜ್ಜಂಪೀರ್ ಖಾದ್ರಿ ಅವರ, ಬಂಡಾಯ ಅಭ್ಯರ್ಥಿಯಾಗಿ ಕೊನೆ ಕ್ಷಣದಲ್ಲಿ ನಾಮಪತ್ರ ಸಲ್ಲಿಸಿದ್ದಾರೆ.
ಶಿಗ್ಗಾಂವಿ ಕಾಂಗ್ರೆಸ್ ಅಭ್ಯರ್ಥಿ ಯಾಸಿರ್ ಅಹ್ಮದ್ ಖಾನ್ ಶುಕ್ರವಾರ ಮೊದಲು ನಾಮಪತ್ರ ಸಲ್ಲಿಸಿದ್ದಾರೆ. ಕೊನೆ ಕ್ಷಣದಲ್ಲಿ ಬಂದ ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ಸಲ್ಲಿಸಿ ಕಾಂಗ್ರೆಸ್‌ಗೆ ಸೆಡ್ಡು ಹೊಡೆದಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಅಜ್ಜಂಪೀರ್ ಖಾದ್ರಿ ಅವರು ನಾಮಪತ್ರ ಸಲ್ಲಿಸದಂತೆ ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದರೂ, ಯಾವುದೇ ಪ್ರಯೋಜನ ಆಗಿಲ್ಲ. ಈ ನಡುವೆ ಅಜ್ಜಂಪೀರ್ ಖಾದ್ರಿ ಬೆಂಬಲಿಗರು ಸಚಿ ಜಮೀರ್ ಕಾರಿನ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಜಮೀರ್ ಕಾರಿನ ಗ್ಲಾಸ್ ಫೂಲ್ ಪೀಸ್ ಪೀಸ್ ಆಗಿದೆ.
ಶಿಗ್ಗಾಂವಿಯಲ್ಲಿ ರಾಜಕೀಯ ಹೈಡ್ರಾಮಾ: ಶಿಗ್ಗಾಂವಿ ವಿಧಾನಸಭೆ ಉಪ ಚುನಾವಣೆಯಲ್ಲಿ ಭಾರೀ ಹೈಡ್ರಾಮಾವೇ ನಡೆದಿದೆ.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ ಉಪಚುನಾವಣೆಗೆ ನಾಮಪತ್ರ ಸಲ್ಲಿಸುವುದಕ್ಕೆ ಶುಕ್ರವಾರ ಕೊನೆಯ ದಿನವಾಗಿತ್ತು. ಇನ್ನು ನಾಮಪತ್ರ ಸಲ್ಲಿಕೆಗೆ ಕೇವಲ 13 ನಿಮಿಷಗಳು ಬಾಕಿ ಉಳಿದಿರುವಾಗ ಅಜ್ಜಂಪೀರ್ ಖಾದ್ರಿ ಅವರು ಬೈಕ್‌ನಲ್ಲಿ ವೇಗವಾಗಿ ಬಂದು ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್‌ನಿಂದ ಒಳಒಪ್ಪಂದ: ಇನ್ನು ಶಿಗ್ಗಾಂವಿಯಲ್ಲಿ ಕಾಂಗ್ರೆಸ್ ಒಳಒಪ್ಪಂದ ಮಾಡಿಕೊಂಡಿದೆ ಎನ್ನುವ ಆರೋಪ ಇದೆ. ಕಾಂಗ್ರೆಸ್‌ನ ನಾಯಕರೇ ಈ ಆರೋಪವನ್ನು ಮಾಡಿದ್ದಾರೆ. ಈ ಬಾರಿ ಬಿಜೆಪಿಯಿಂದ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅವರ ಮಗ ಭರತ್ ಬೊಮ್ಮಾಯಿಗೆ ಟಿಕೆಟ್ ನೀಡಿದೆ. ಆದರೆ, ಕಾಂಗ್ರೆಸ್ ಈ ಭಾಗದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.
ಹೈಕಮಾಂಡ್‌ಗೆ ಜಮೀರ್ ಮನವಿ: ಇನ್ನು ಕಾಂಗ್ರೆಸ್ ಹೈಕಮಾಂಡ್‌ಗೆ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಿಂದ ಮುಸ್ಲಿಂ ಸಮುದಾಯದವರಿಗೆ ಟಿಕೆಟ್ ಕೊಡಬೇಕು ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಮನವಿ ಮಾಡಿದ್ದರು.












Click it and Unblock the Notifications