Hijab Verdict; ಕರ್ನಾಟಕ ಹೈಕೋರ್ಟ್ ತೀರ್ಪಿನ ಕುರಿತು ಪ್ರತಿಕ್ರಿಯೆಗಳು
ಬೆಂಗಳೂರು, ಮಾರ್ಚ್ 15: ಕರ್ನಾಟಕದಲ್ಲಿ ಕಳೆದ ಎರಡು ತಿಂಗಳಿನಿಂದ ಭಾರೀ ಚರ್ಚೆಗೆ ಕಾರಣವಾಗಿದ್ದ ಹಿಜಾಬ್ ವಿವಾದದ ಕುರಿತು ಕರ್ನಾಟಕ ಹೈಕೋರ್ಟ್‌ನ ತ್ರಿ-ಸದಸ್ಯ ಪೀಠ ಮಂಗಳವಾರ ತೀರ್ಪು ನೀಡಿದೆ.
ಮಂಗಳವಾರ ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ, ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಮತ್ತು ನ್ಯಾಯಮೂರ್ತಿ ಖಾಜಿ ಜೈಬುನ್ನಿಸಾ ಮೊಹಿದ್ದೀನ್ ಅವರಿದ್ದ ಪೀಠ ತೀರ್ಪು ಪ್ರಕಟಿಸಿತು. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದು ಹೇಳಿತು.
ಕರ್ನಾಟಕ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಹಿಜಾಬ್ ನಿರ್ಬಂಧ ವಿಚಾರದಲ್ಲಿ ಕರ್ನಾಟಕ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದೆ. ಕಾಲೇಜಿನಲ್ಲಿ ತರಗತಿಯೊಳಗೆ ಹಿಜಾಬ್ ಧರಿಸಲು ಅನುಮತಿ ಕೋರಿದ್ದ ಉಡುಪಿಯ ವಿದ್ಯಾರ್ಥಿಗಳ ಅರ್ಜಿ ಮತ್ತು ಇದೇ ವಿಚಾರದಲ್ಲಿ ಸಲ್ಲಿಕೆಯಾಗಿರುವ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟವಾದ ಬಳಿಕ ವಿವಿಧ ನಾಯಕರು ತೀರ್ಪಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಶಾಂತಿ, ಸುವ್ಯವಸ್ಥೆ ಕಾಪಾಡಲು ಸಹಕಾರ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಆರಗ ಜ್ಞಾನೇಂದ್ರ ಪ್ರತಿಕ್ರಿಯೆ
ಕರ್ನಾಟಕ ಹೈಕೋರ್ಟ್ ತೀರ್ಪಿನ ಬಳಿಕ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಆರಗ ಜ್ಞಾನೇಂದ್ರ ಸಮವಸ್ತ್ರ ಕಡ್ಡಾಯಗೊಳಿಸಿ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶ ಎತ್ತಿಹಿಡಿದ ಹೈಕೋರ್ಟ್ ತೀರ್ಪು ಸ್ವಾಗತಿಸಿದರು. "ಇದೊಂದು ಐತಿಹಾಸಿಕ ತೀರ್ಪು ಆಗಿದ್ದು, ಹೆಣ್ಣುಮಕ್ಕಳ ಶಿಕ್ಷಣ ಪಡೆಯುವ ಹಕ್ಕನ್ನು ಎತ್ತಿ ಹಿಡಿಯಲಾಗಿದೆ. ಉಚ್ಚ ನ್ಯಾಯಲಯದ ಅದೇಶವನ್ನು ಎಲ್ಲರೂ ಪಾಲಿಸಬೇಕು, ಶಾಂತಿ ಸುವ್ಯವಸ್ಥೆ ಕಾಪಾಡಲು ಎಲ್ಲರೂ ಸಹಕರಿಸಬೇಕು" ಎಂದು ಮನವಿ ಮಾಡಿದರು.
|
ಶಿಕ್ಷಣ ಸಚಿವರ ಟ್ವೀಟ್
ಹೈಕೋರ್ಟ್ ತೀರ್ಪಿನ ಬಳಿಕ ಟ್ವೀಟ್ ಮಾಡಿರುವ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್, "ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ಕರ್ನಾಟಕ ಹೈ ಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇನೆ. ಈ ನೆಲ, ನೆಲದ ಕಾನೂನು ಅಂತಿಮ" ಎಂದು ಹೇಳಿದ್ದಾರೆ.

ಸಚಿವ ಡಾ. ಸಿ. ಎನ್. ಅಶ್ವತ್ಥನಾರಾಯಣ ಹೇಳಿಕೆ
ಹೈಕೋರ್ಟ್ ತೀರ್ಪಿನ ಬಗ್ಗೆ ಪ್ರತಿಕ್ರಿಯೆ ನೀಡಿದ ಉನ್ನತ ಶಿಕ್ಷಣ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ, "ವಿದ್ಯಾರ್ಥಿಗಳು ಆಯಾ ಶಾಲಾಕಾಲೇಜುಗಳು ಸೂಚಿಸುವ ಸಮವಸ್ತ್ರ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಹೈಕೋರ್ಟ್ ನೀಡಿರುವ ತೀರ್ಪು ಸ್ವಾಗತಾರ್ಹವಾಗಿದೆ" ಎಂದರು.
"ಹೈಕೋರ್ಟ್ ಸಮವಸ್ತ್ರದ ವಿಚಾರದಲ್ಲಿ ಸರಕಾರದ ಆದೇಶವನ್ನು ಎತ್ತಿ ಹಿಡಿದಿದೆ. ಇದನ್ನು ಎಲ್ಲ ವಿದ್ಯಾರ್ಥಿಗಳೂ ಗೌರವಿಸಿ, ಪಾಲಿಸಬೇಕು. ಯಾವುದೇ ಧರ್ಮದ ಮಕ್ಕಳಾದರೂ ಶಿಕ್ಷಣಕ್ಕೆ ಆದ್ಯ ಗಮನ ಕೊಟ್ಟು, ಉಜ್ವಲ ಭವಿಷ್ಯವನ್ನು ರೂಪಿಸಿಕೊಳ್ಳುವುದರ ಕಡೆಗೆ ಗಮನ ಕೊಡಬೇಕು. ಯಾವುದೇ ಧಾರ್ಮಿಕ ವಸ್ತ್ರಗಳತ್ತ ಅನಗತ್ಯ ಆದ್ಯತೆ ನೀಡುವ ಮೂಲಕ ಬದುಕಿನ ಸದವಕಾಶಗಳನ್ನು ವ್ಯರ್ಥ ಮಾಡಿಕೊಳ್ಳಬಾರದು. ಈ ಮೂಲಕ ಎಲ್ಲರೂ ಸೌಹಾರ್ದದಿಂದ ಮತ್ತು ಪರಸ್ಪರ ಗೌರವದಿಂದ ಬದುಕಬೇಕು" ಎಂದು ಹೇಳಿದರು.
"ಹಿಂದೆಂದೂ ಶಾಲಾಕಾಲೇಜುಗಳಲ್ಲಿ ಇಂತಹ ವಿವಾದ ಕಂಡುಬಂದಿರಲಿಲ್ಲ. ಕೆಲವು ವಿಚ್ಛಿದ್ರಕಾರಿ ಶಕ್ತಿಗಳು ಬೇಕೆಂದೇ ಈ ವಿವಾದವನ್ನು ಸೃಷ್ಟಿಸಿದ್ದವು. ನ್ಯಾಯಾಲಯವು ಈ ವಿಚಾರವನ್ನು ಆಳವಾಗಿ ಅಧ್ಯಯನ ಮಾಡಿ, ಸರಿಯಾದ ತೀರ್ಪು ನೀಡಿದೆ. ಈ ಮೂಲಕ ವಿದ್ಯಾರ್ಥಿಗಳ ಭವಿಷ್ಯ ನಿರ್ಮಾಣಕ್ಕೆ ಅದು ಇಂದು ನೀಡಿದೆ" ಎಂದು ತಿಳಿಸಿದರು.

ವಿದ್ಯಾರ್ಥಿಗಳು ಕೂಡಲೇ ಶಾಲೆಗೆ ಬನ್ನಿ
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ಮಾತನಾಡಿ, "ಕರ್ನಾಟಕ ಉಚ್ಚ ನ್ಯಾಯಲಯ ಹಿಜಾಬ್ ಕುರಿತು ನೀಡಿರುವ ತೀರ್ಪು ಸ್ವಾಗತಾರ್ಹ. ಹಿಜಾಬ್ ಸಮವಸ್ತ್ರದ ಭಾಗವಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಈ ತೀರ್ಪು ಎಲ್ಲಾ ಗೊಂದಲಗಳಿಗೂ ತೆರೆ ಎಳೆದಿದೆ. ನ್ಯಾಯಾಲಯದ ತೀರ್ಪಿಗೆ ಎಲ್ಲರೂ ತಲೆಬಾಗಬೇಕು. ಹಿಜಾಬ್ ಧರಿಸಬೇಕು ಎಂದು ಶಾಲೆಯಿಂದ ದೂರವುಳಿದಿರುವ ವಿದ್ಯಾರ್ಥಿನಿಯರು ಕೂಡಲೆ ಶಾಲೆಗೆ ತೆರಳಬೇಕು ಎಂದು ಕೋರುತ್ತೇನೆ" ಎಂದು ಪ್ರತಿಕ್ರಿಯೆ ನೀಡಿದರು.
|
ಎಲ್ಲರೂ ಶಾಂತಿ ಕಾಪಾಡಿ
ಕೇಂದ್ರ ಸಚಿವ, ಧಾರವಾಡ ಸಂಸದ ಪ್ರಹ್ಲಾದ್ ಜೋಶಿ ಪ್ರತಿಕ್ರಿಯೆ ನೀಡಿದ್ದು, "ವಿದ್ಯಾರ್ಥಿಗಳ ಮೂಲ ಕೆಲಸ ಓದುವುದು. ಬೇರೆ ಎಲ್ಲವನ್ನು ಬದಿಗೊತ್ತಿ ಒಟ್ಟಾಗಿ ವ್ಯಾಸಂಗ ಮಾಡಿ" ಎಂದು ಹೇಳಿದ್ದಾರೆ.
ಕಾರ್ಯಕರ್ತರಿಗೆ ಬಿಜೆಪಿ ಮನವಿ
ಹಿಜಾಬ್ ವಿವಾದ ಕುರಿತು ಕರ್ನಾಟಕ ಹೈಕೋರ್ಟ್ ತೀರ್ಪು ಪ್ರಕಟಿಸಿದ್ದು, ಈ ವಿಚಾರವಾಗಿ ರಾಜ್ಯದ ಜನತೆ ಹಾಗು ತನ್ನ ಕಾರ್ಯಕರ್ತರಲ್ಲಿ ಬಿಜೆಪಿ ಪಕ್ಷ ಕೆಲವು ಮನವಿಯನ್ನು ಮಾಡಿದೆ. ಹಿಜಾಬ್ ತೀರ್ಪು ಕುರಿತು ಯಾವುದೇ ಪ್ರತಿಭಟನೆಯನ್ನು ಮಾಡಬಾರದು ಜೊತೆಗೆ ಪ್ರತಿಕ್ರಿಯಾತ್ಮಕ ಪತ್ರಿಕಾ ಹೇಳಿಕೆಗಳನ್ನು ನೀಡಬೇಡಿ ಎಂದು ಬಿಜೆಪಿ ಟ್ವೀಟ್ ಮೂಲಕ ಮನವಿ ಮಾಡಿದೆ.












Click it and Unblock the Notifications