ಸಚಿವ ಸಂಪುಟ ಸಭೆ, ಮುಂದುವರಿದ ಕಾಂಗ್ರೆಸ್ ಪ್ರತಿಭಟನೆ: ದಿನದ ರಾಜಕೀಯ ಬೆಳವಣಿಗೆ ಹೀಗಿವೆ
ಬೆಂಗಳೂರು, ಏ.18: ಹೊಸಪೇಟೆಯಲ್ಲಿ ನಡೆದ ಎರಡು ದಿನಗಳ ಬಿಜೆಪಿ ಕಾರ್ಯಕಾರಿಣಿ ಸಭೆ ಮುಗಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಬೆಳಗ್ಗೆ ವಾಪಸ್ಸಾಗಲಿದ್ದಾರೆ, ಸಂಜೆ ಸಚಿವ ಸಂಪುಟ ಸಭೆ ನಡೆಸಲಾಗುತ್ತಿದೆ. ಮತ್ತೊಂದೆಡೆ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಆಗಿರುವ ಕೆ.ಎಸ್. ಈಶ್ವರಪ್ಪ ಬಂಧನಕ್ಕೆ ಆಗ್ರಹಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ಸೋಮವಾರವೂ ಮುಂದುವರಿಯಲಿದೆ. ರಾಜ್ಯದ ಇಂದಿನ ಪ್ರಮುಖ ರಾಜಕೀಯ ಬೆಳವಣಿಗೆಗಳನ್ನು ಇಲ್ಲಿ ನೀಡಲಾಗಿದೆ.
ಬಸವರಾಜ ಬೊಮ್ಮಾಯಿ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಳ್ಳಾರಿ ಜಿಲ್ಲೆಯ ಜಿಂದಾಲ್ ವಿಮಾನ ನಿಲ್ದಾಣದಿಂದ ಬೆಳಗ್ಗೆ 10 ಹೊರಟು ಬೆಳಗ್ಗೆ 11ಕ್ಕೆ ಬೆಂಗಳೂರು ತಲುಪುತ್ತಾರೆ. ಮಧ್ಯಾಹ್ನ 12ಕ್ಕೆ ಜ್ಞಾನಭಾರತಿ ಬಡಾವಣೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಡಾ. ಮಾಸ್ತಿ ವೆಂಕಟೇಶ ಅಯ್ಯಂಗಾರ್ ಟ್ರಸ್ಟ್ ವತಿಯಿಂದ ಹಮ್ಮಿಕೊಳ್ಳಲಾಗಿರುವ 'ಮಾಸ್ತಿ ಭವನ' ಶಿಲಾನ್ಯಾಸ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಧ್ಯಾಹ್ನ 3 ಗಂಟೆಗೆ ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ರಾಜ್ಯ ಉನ್ನತ ಮಟ್ಟದ ಒಪ್ಪಿಗೆ ನೀಡಿಕೆ ಸಮಿತಿ (SHLCC) ಸಭೆ ನಡೆಯಲಿದೆ. ಸಂಜೆ 4ಕ್ಕೆ ಸಚಿವ ಸಂಪುಟ ಉಪಸಮಿತಿ ಸಭೆ ಮತ್ತು ಸಂಜೆ 5.30ಕ್ಕೆ ಸಚಿವ ಸಂಪುಟ ಸಭೆ ಕರೆಯಲಾಗಿದೆ.
ಕಾಂಗ್ರೆಸ್ ಪ್ರತಿಭಟನೆ:
ಸಚಿವ ಕೆ.ಎಸ್. ಈಶ್ವರಪ್ಪ ಅವರ ಬಂಧನಕ್ಕೆ ಆಗ್ರಹಿಸಿ ಮತ್ತು ರಾಜ್ಯ ಸರ್ಕಾರದ 40% ಕಮಿಷನ್ ಹಗರಣದ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಜನಜಾಗೃತಿ ಪ್ರತಿಭಟನಾ ಕಾರ್ಯಕ್ರಮ ಮುಂದುವರಿದಿದೆ.

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಂಡ್ಯದಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ. ಪಾಟೀಲ್ ಚಿಕ್ಕೋಡಿಯಲ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ ಚಿಕ್ಕಬಳ್ಳಾಪುರದಲ್ಲಿ, ಸಲೀಂ ಅಹಮದ್ ಚಿತ್ರದುರ್ಗ ಜಿಲ್ಲೆಯಲ್ಲಿ, ಈಶ್ವರ ಖಂಡ್ರೆ ವಿಜಯಪುರ ಜಿಲ್ಲೆಯಲ್ಲಿ ಪ್ರತಿಭಟನೆ ಮುನ್ನಡೆಸಲಿದ್ದಾರೆ.
ಅಮ್ ಆದ್ಮಿ ಪಕ್ಷ (AAP)
Recommended Video
ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಏ.21ರಂದು ಬೆಂಗಳೂರಿಗೆ ಭೇಟಿ ನೀಡಲಿದ್ದು, ನ್ಯಾಷನಲ್ ಕಾಲೇಜು ಮೈದಾನದಲ್ಲಿ ರೈತರ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಈ ಕುರಿತು ಆಪ್ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಮಧ್ಯಾಹ್ನ 12.30ಕ್ಕೆ ಮಾಧ್ಯಮಗೋಷ್ಠಿ ನಡೆಸಿ ಮಾಹಿತಿ ನೀಡಲಿದ್ದಾರೆ.












Click it and Unblock the Notifications