ಆಂಬಿಡೆಂಟ್ ಪ್ರಕರಣ : ಜನಾರ್ದನ ರೆಡ್ಡಿಗೆ ತಾತ್ಕಾಲಿಕ ರಿಲೀಫ್
ಬೆಂಗಳೂರು, ನವೆಂಬರ್ 27 : ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ತಾತ್ಕಾಲಿಕ ನೆಮ್ಮದಿ ಸಿಕ್ಕಿದೆ. ಡಿಸೆಂಬರ್ 4ರ ತನಕ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣವನ್ನು ರದ್ದುಗೊಳಿಸಬೇಕು ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತು ರೆಡ್ಡಿ ಆಪ್ತ ಅಲಿಖಾನ್ ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯನ್ನು ಮಂಗಳವಾರ ನಡೆಸಿದ ಕೋರ್ಟ್ ಆದೇಶ ಕೊಟ್ಟಿದೆ.
ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಆಂಬಿಡೆಂಟ್ ಕಂಪನಿ ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದರು, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ. ಸಿಸಿಬಿ ಪೊಲೀಸರು ಈ ಪ್ರರಕರಣದ ತನಿಖೆಯನ್ನು ನಡೆಸುತ್ತಿದ್ದಾರೆ.

ಜನಾರ್ದನ ರೆಡ್ಡಿ ಆಪ್ತ ಅಲಿಖಾನ್ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಂಡಿತ್ತು. ಅವರು ನ್ಯಾಯಾಲಯದ ಮುಂದೆ ಶರಣಾಗಿದ್ದರು. ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ 8 ದಿನಗಳ ಕಾಲ ತಮ್ಮ ವಶಕ್ಕೆ ಪಡೆದಿದ್ದು, ವಿಚಾರಣೆಯನ್ನು ನಡೆಸುತ್ತಿದ್ದಾರೆ.
ಡಿಸೆಂಬರ್ 4ರ ತನಕ ಈ ಪ್ರಕರಣದಲ್ಲಿ ಯಾವುದೇ ಕ್ರಮವನ್ನು ಕೈಗೊಳ್ಳದಂತೆ ಕರ್ನಾಟಕ ಹೈಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಸಿಸಿಬಿಗೆ ನೋಟಿಸ್ ಜಾರಿ ಮಾಡಿದೆ.
ಜನಾರ್ದನ ರೆಡ್ಡಿ ಅವರ ಪರವಾಗಿ ಹಿರಿಯ ವಕೀಲ ಸಿ.ವಿ.ನಾಗೇಶ್ ವಾದ ಮಂಡನೆ ಮಾಡಿದರು. ಡಿಸೆಂಬರ್ 4ರಂದು ಜನಾರ್ದನ ರೆಡ್ಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಮತ್ತೆ ನಡೆಯಲಿದೆ.












Click it and Unblock the Notifications