Government Employees: ಕೇಂದ್ರ ಸರ್ಕಾರದ ಬೆನ್ನಲ್ಲೇ ರಾಜ್ಯ ಸರ್ಕಾರಿ ನೌಕರರಿಗೆ 3% ತುಟ್ಟಿಭತ್ಯೆ ಹೆಚ್ಚಳ
ಬೆಂಗಳೂರು, ಅಕ್ಟೋಬರ್ 13: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬಕ್ಕೆ ಭರ್ಜರಿ ಗಿಫ್ಟ್ ನೀಡಲಿದೆ. ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆ ಮಂಜೂರು ಮಾಡಿದೆ. ಕೇಂದ್ರ ಸರ್ಕಾರ ಮಾಡಿದ ದಿನದಿಂದಲೇ ರಾಜ್ಯ ಸರ್ಕಾರ ಸಹ ಸರ್ಕಾರಿ ನೌಕರರಿಗೆ ಡಿಎ ಮಂಜೂರು ಮಾಡುವುದು ಪ್ರತೀತಿ ಇದೆ.
ಕೆಲ ದಿನಗಳ ಹಿಂದೆಯಷ್ಟೇ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸರ್ಕಾರ ಕೇಂದ್ರ ಸರ್ಕಾರಿ ನೌಕರರ ತುಟ್ಟಿಭತ್ಯೆಯನ್ನ (ಡಿಎ) 3 ಶೇಕಡಾ ಹೆಚ್ಚಳದ ಘೋಷಣೆಗೆ ಬೆನ್ನಲ್ಲೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ತುಟ್ಟಿಭತ್ಯೆ (ಡಿಎ) ಹೆಚ್ಚಳದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಹೇಳಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ಡಿಎ ಹೆಚ್ಚಳ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇದೀಗ ಅದರಂತೆ ರಾಜ್ಯ ಸರ್ಕಾರದಿಂದ ಬಾಕಿಯಿರುವ ತುಟ್ಟಿಭತ್ಯೆಯನ್ನು ಜುಲೈ 01, 2025ರಿಂದ ಅನ್ವಯವಾಗುವಂತೆ ಬಿಡುಗಡೆ ಮಾಡಲು ರಾಜ್ಯ ಸರ್ಕಾರಿ ನೌಕರರ ಸಂಘ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದೆ.

ತುಟ್ಟಿಭತ್ಯೆ ಬಿಡುಗಡೆಗೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆಗೆ ಪತ್ರ ಪಡೆದಿದ್ದು ಎಲ್ಲಾ ರಾಜ್ಯ ಸರ್ಕಾರಿ ನೌಕರರಿಗೆ 01-07-2025ರಿಂದ ಅನ್ವಯವಾಗುವಂತೆ ಬಾಕಿಯಿರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ಮನವಿ ಮಾಡಿದೆ. ಅಕ್ಟೋಬರ್ 06, 2025ರಂದು ಬಿಡುಗಡೆಯಾಗಿರುವ ಕೇಂದ್ರ ಸರ್ಕಾರದ ಆದೇಶದಂತೆ ರಾಜ್ಯ ಸರ್ಕಾರಿ ನೌಕರರಿಗೂ ಸಹ ಜುಲೈ 01, 2025ರಿಂದ ಅನ್ವಯವಾಗುವಂತೆ ಶೇ.3% ಡಿಎ ಹೆಚ್ಚಳಕ್ಕೆ ಮನವಿ ಸಲ್ಲಿಸಲಾಗಿದೆ.
ಇನ್ನೂ ಅಖಿಲ ಭಾರತ ಬೆಲೆ ಸೂಚ್ಯಂಕವನ್ನು ಆಧರಿಸಿ ರಾಜ್ಯ ಸರ್ಕಾರಿ ನೌಕರರಿಗೂ ಕೂಡ 3% ಡಿಎ ಹೆಚ್ಚಳವನ್ನು ಬಿಡುಗಡೆ ಮಾಡುವಂತೆ ಹಾಗೂ ಇದನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಪತ್ರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸರ್ಕಾರದ ಮುಂದೆ ಬೇಡಿಕೆ ಇಟ್ಟಿದೆ. ಇನ್ನೂ ಶೀಘ್ರದಲ್ಲೇ ತುಟ್ಟಿಭತ್ಯೆ ಹೆಚ್ಚಳ ಕುರಿತು ನಿರ್ಧಾರವನ್ನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದು, ದೀಪಾವಳಿಗೂ ಮುನ್ನವೇ ಈ ಕುರಿತ ನಿರ್ಧಾರ ಹೊರಬೀಳುವ ನಿರೀಕ್ಷೆಯಿದೆ.
ಸರ್ಕಾರಿ ನೌಕರರ ಮನವಿ ಪತ್ರದಲ್ಲೇನಿದೆ?
ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ ದಿ:01-07-2025ರಿಂದ ಅನ್ವಯವಾಗುವಂತೆ ಬಾಕಿ ಇರುವ ತುಟ್ಟಿಭತ್ಯೆಯನ್ನು ನಗದು ರೂಪದಲ್ಲಿ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಿ ನೌಕರರ ಸಂಘವೂ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳಿಗೆ ಮನವಿ ಮಾಡಿದೆ. ಸೂಚಿತ ವಿಷಯದನ್ವಯ ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಕೇಂದ್ರ ಸರ್ಕಾರವು ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಕರ್ನಾಟಕ ರಾಜ್ಯ ಸರ್ಕಾರವು ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡುವುದು ಸಂಪ್ರದಾಯವಾಗಿರುತ್ತದೆ.
ಪ್ರಸ್ತುತ ಕೇಂದ್ರ ಸರ್ಕಾರವು ಅಖಿಲ ಭಾರತ ಬೆಲೆ ಸೂಚ್ಯಾಂಕವನ್ನಾಧರಿಸಿ ಉಲ್ಲೇಖಿತ ಆದೇಶದಲ್ಲಿ ದಿನಾಂಕ: 01-07-2025ರಿಂದ ಅನ್ವಯವಾಗುವಂತೆ ಕೇಂದ್ರ ಸರ್ಕಾರಿ ನೌಕರರಿಗೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ.(ಪ್ರತಿ ಲಗತ್ತಿಸಿದೆ) ಆದ್ದರಿಂದ, ಕರ್ನಾಟಕ ರಾಜ್ಯದ ಸರ್ಕಾರಿ ನೌಕರರಿಗೂ ದಿನಾಂಕ: 01-07-2025 ರಿಂದ ಅನ್ವಯವಾಗುವಂತೆ ಶೇ. 3%ರಷ್ಟು ತುಟ್ಟಿಭತ್ಯೆಯನ್ನು ಸಂಪೂರ್ಣ ನಗದು ರೂಪದಲ್ಲಿ ನೀಡಿ ಆದೇಶ ಹೊರಡಿಸಲು ಕೋರಿದೆ. ಇನ್ನೂ ಹೆಚ್. ಆರ್. ಎಂ. ಎಸ್ - 2 ತಂತ್ರಾಂಶದಲ್ಲಿ ವೇತನ ಸೆಳೆಯುವ ನೌಕರರು ಹಬ್ಬದ ಮುಂಗಡ ಪಡೆಯಲು ಹಾಗೂ ಗಳಿಕೆ ರಜೆಯ ನಗಧೀಕರಣಕ್ಕಾಗಿ ESS ನ ಅಪ್ಲಿಕೇಶನ್ ಮೂಲಕವೇ ಅರ್ಜಿ ಸಲ್ಲಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.












Click it and Unblock the Notifications