ಲೋಕಸಭೆ ಎಲೆಕ್ಷನ್ ವೇಳೆ ಮೈತ್ರಿಗೆ ಮುಳುವಾಯ್ತು ಪೆನ್ ಡ್ರೈವ್ ಕಂಟಕ; ಪರಿಷತ್‌ಗೂ ದೋಸ್ತಿ ನಾ?
ಬೆಂಗಳೂರು, ಮೇ 10: ಹಾಸನ ಸಂಸಂದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್ಡ್ರೈವ್ ಪ್ರಕರಣ ಮೈತ್ರಿ ನಾಯಕರು ಮುಜುಗರವನ್ನುಂಟು ಮಾಡಿದೆ. ಪ್ರಜ್ವಲ್ ರೇವಣ್ಣ ಅವರ ಪ್ರಕರಣದ ಕುರಿತು ಕಾಂಗ್ರೆಸ್ ನಾಯಕರು ಬಿಜೆಪಿ ಮತ್ತು ಜೆಡಿಎಸ್ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಇದೀಗ ಮೈತ್ರಿ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.
ಹೌದು, ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದ ಕಮಲ-ದಳ ನಾಯಕರಿಗೆ ತೀವ್ರ ಸಂಕಷ್ಟ ಎದುರಾಗಿದ್ದು, ಈ ಪ್ರಕರಣ ಲೋಕಸಭಾ ಚುನಾವಣಾ ಫಲಿತಾಂಶದ ಮೇಲೆ ಪ್ರಭಾವ ಬೀರುತ್ತಾ ಎನ್ನುವ ಮಾತುಗಳು ಕೇಳಿ ಬಂದಿವೆ. ಆರಂಭದಲ್ಲಿಯೇ ಮೈತ್ರಿ ಕುರಿತು ಬಿಜೆಪಿಯ ಕೆಲವು ಭಾಗದ ನಾಯಕರು ತೀವ್ರ ವಿರೋಧವನ್ನ ಅನುಭವಿಸಿದ್ರು, ಇದೀಗ ಪ್ರಜ್ವಲ್ ರೇವಣ್ಣ ಅವರ ಪ್ರಕರಣದಿಂದ ಮೈತ್ರಿ ಮುಂದುವರಿಕೆ ಕುರಿತು ಅಪಸ್ವರಗಳು ಕೇಳಿ ಬರುತ್ತಿವೆ.

ಪ್ರಜ್ವಲ್ ರೇವಣ್ಣ ಅವರ ಪೆನ್ಡ್ರೈವ್ ಪ್ರಕರಣ ಮೈತ್ರಿಕೂಟದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ. ಹೀಗಾಗಿ ಬಿಜೆಪಿ ನಾಯಕರು ಮೈತ್ರಿಯನ್ನ ಮುಂದುವರೆಸುವುದು ಬೇಡ ಎಂದು ಕೆಲವರು ಹೇಳಿಕೆ ನೀಡುತ್ತಿದ್ದು, ಮೈತ್ರಿ ಮುಂದುವರೆಯುವುದು ಅನುಮಾನ ಎನ್ನುವ ಮಾತುಗಳು ಕೇಳಿ ಬರುತ್ತಿದೆ. ಆದರೆ, ಮೈತ್ರಿ ಮುಂದುವರೆಸಲು ಉಭಯ ಪಕ್ಷಗಳು ಒಲವು ಹೊಂದಿವೆ. ಮುಂಬರುವ ವಿಧಾನ ಪರಿಷತ್ ಚುನಾವಣೆಯನ್ನೂ ಕೂಡ ಬಿಜೆಪಿ-ಜೆಡಿಎಸ್ ಜಂಟಿಯಾಗಿ ಎದುರಿಸಲಿವೆ ಎಂದು ಮೂಲಗಳು ತಿಳಿಸಿವೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೀನಾಯವಾಗಿ ಸೋಲು ಕಂಡ ಬಿಜೆಪಿ ಹಾಗೂ ಜೆಡಿಎಸ್ ಲೋಕಸಭೆ ಚುನಾವಣೆಗೆ ಮೈತ್ರಿ ಮಾಡಿಕೊಟ್ಟಿತ್ತು. ಪ್ರಜ್ವಲ್ ರೇವಣ್ಣ ಅವರ ಪೆನ್ ಡ್ರೈವ್ ಪ್ರಕರಣದಿಂದಾಗಿ ಮೈತ್ರಿಗೆ ಬ್ರೇಕ್ ಬೀಳುತ್ತೆ ಎನ್ನುವ ಮಾತುಗಳು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿತ್ತು. ಆದರೆ, ಇದೀಗ ಪರಿಷತ್ ಚುನಾವಣೆಯಲ್ಲೂ ಬಿಜೆಪಿ-ಜೆಡಿಎಸ್ ಮೈತ್ರಿ ಮುಂದುವರಿಯುವುದು ಬಹುತೇಕ ಖಚಿತವಾಗಿದೆ. ವಿಧಾನ ಪರಿಷತ್ನ ಆರು ಸ್ಥಾನಗಳ ಪೈಕಿ ನಾಲ್ಕು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧಿಸಲಿದ್ದರೇ, ಎರಡು ಸ್ಥಾನಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯಲಿದ್ದಾರೆ ಎಂದು ತಿಳಿದು ಬಂದಿದೆ.
ವಿಧಾನಪರಿಷತ್ನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಈ ಕುರಿತು ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಪಟ್ಟಿಯನ್ನ ಇಂದು ಪ್ರಕಟಗೊಳಿಸುವ ಸಾಧ್ಯತೆ ಇದೆ. ಬೆಂಗಳೂರು ಪದವೀಧರ, ನೈಋತ್ಯ ಪದವೀಧರ ಹಾಗೂ ಈಶಾನ್ಯ ಪದವೀಧರ ಕ್ಷೇತ್ರ ಮತ್ತು ಆಗ್ನೇಯ ಶಿಕ್ಷಕರ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ದಕ್ಷಿಣ ಶಿಕ್ಷಕರ ಹಾಗೂ ನೈಋತ್ಯ ಶಿಕ್ಷಕರ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕೆ ಇಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ.
ಪ್ರಜ್ವಲ್ ರೇವಣ್ಣ ಪೆನ್ಡ್ರೈವ್ ಪ್ರಕರಣ ಮತ್ತು ವಿಧಾನ ಪರಿಷತ್ ಚುನಾವಣೆಗೆ ಸೀಟು ಹಂಚಿಕೆ ವಿಚಾರವಾಗಿ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ಡಿ ಕುಮಾರಸ್ವಾಮಿ ಅವರು ಶೀಘ್ರದಲ್ಲೇ ಬಿಜೆಪಿ ವರಿಷ್ಠರನ್ನು ಭೇಟಿಯಾಗವ ಸಾಧ್ಯತೆ ಇದೆ. ಅಭ್ಯರ್ಥಿಗಳ ಆಯ್ಕೆ ಹಾಗೂ ಸೀಟು ಹಂಚಿಕೆ ಕುರಿತು ಬಿಜೆಪಿ ಹೈಕಮಾಂಡ್ ನಾಯಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ.












Click it and Unblock the Notifications