DK Shivakumar: ನನ್ನ ವಿರುದ್ಧ ಕಾಂಗ್ರೆಸ್ ಪಿತೂರಿ ಎಂದ ಪ್ರಜ್ವಲ್ ರೇವಣ್ಣ: ಡಿ ಕೆ ಶಿವಕುಮಾರ್ ಹೇಳಿದ್ದೇನು?
ಬೆಂಗಳೂರು, ಮೇ 27: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಸಂಸದ ಪ್ರಜ್ವಲ್ ರೇವಣ್ಣ ಕೊನೆಗೂ ವೀಡಿಯೋ ಹೇಳಿಕೆಯೊಂದನ್ನು ಬಿಡುಗಡೆ ಮಾಡಿ ತಾನು ರಾಜ್ಯಕ್ಕೆ ಬರುವುದಾಗಿ ತಿಳಿಸಿದ್ದಾರೆ. ಅಲ್ಲದೇ ಕಾಂಗ್ರೆಸ್ ನಾಯಕ ಪಿತೂರಿ ಎಂದು ಪ್ರಜ್ವಲ್ ರೇವಣ್ಣ ಆರೋಪಿಸಿದ್ದು, ಈ ಬಗ್ಗೆ ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.
ಈ ಕುರಿತು ಮಾಧ್ಯಮಗಳ ಜೊತೆಗೆ ಡಿ ಕೆ ಶಿವಕುಮಾರ್ ಮಾತನಾಡಿ, ಪ್ರಜ್ವಲ್ ರೇವಣ್ಣ ಏನು ಬೇಕಾದರೂ ಹೇಳಿಕೊಳ್ಳಲಿ. ಯಾರ ಬಾಯಿಗೂ ನಾವು ಬೀಗ ಹಾಕಲು ಆಗುವುದಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಪ್ರಜ್ವಲ್ ರೇವಣ್ಣ ಅವರ ವಿಡಿಯೋ ಸಂದೇಶದ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಮಾಧ್ಯಮ ಪ್ರತಿನಿಧಿಗಳು ಹೇಳಿದ್ದರಿಂದ ಈ ವಿಚಾರ ತಿಳಿಯಿತು. ಪ್ರಜ್ವಲ್ ಅವರು ಮಾತನಾಡುತ್ತಾರೆ ಎಂದು ನಾನು ಮಾತನಾಡಲು ಆಗುವುದಿಲ್ಲ. ಅವರು ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗದೇ ಬೇರೆ ದಾರಿಯಿಲ್ಲ.
ಈ ಪ್ರಕರಣದಲ್ಲಿ ಕಾನೂನು ತನ್ನ ಕ್ರಮ ಕೈಗೊಳ್ಳಲಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಬಂದ ವರದಿ ಆಧರಿಸಿ ರಾಹುಲ್ ಗಾಂಧಿ ಅವರು ಮಾತನಾಡಿದ್ದಾರೆ. ರಾಹುಲ್ ಗಾಂಧಿ ವಿಚಾರ ಪ್ರಸ್ತಾಪ ಮಾಡಿರುವ ಪ್ರಜ್ವಲ್ ಗೆ ಕಾಲವೇ ಉತ್ತರ ಕೊಡಲಿದೆ ಎಂದು ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣಾ ತಯಾರಿ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ನಮ್ಮ ಸರ್ಕಾರ ಪದವೀದರರ, ಶಿಕ್ಷಕರ ಮತ್ತು ರಾಜ್ಯದ ಪ್ರಗತಿಗೆ ಎಲ್ಲಾ ರೀತಿಯ ಕೆಲಸ ಮಾಡುತ್ತಿದೆ. ಎಲ್ಲರೂ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ವಿಧಾನ ಪರಿಷತ್ ಚುನಾವಣೆಯಲ್ಲಿ ಬೆಂಬಲಿಸಬೇಕು ಎಂದು ಮನವಿ ಮಾಡುತ್ತೇನೆ.ಶಾಸಕರು, ಸಚಿವರು ಹಾಗೂ ಮುಖಂಡರು ಪಕ್ಷದ ಅಭ್ಯರ್ಥಿಗಳ ಪರವಾಗಿ ಹೆಚ್ಚಿನ ಕೆಲಸ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದು ತಿಳಿಸಿದರು












Click it and Unblock the Notifications