Prajwal Revanna; ಸ್ವತಂತ್ರ ತನಿಖಾ ಸಂಸ್ಥೆಯಿಂದ ಕೇಸ್ ತನಿಖೆ?
ಬೆಂಗಳೂರು, ಮೇ 15: ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಗರಣದ ತನಿಖೆಯನ್ನು ಸ್ವತಂತ್ರ ತನಿಖಾಸಂಸ್ಥೆಯಿಂದ ನಡೆಸಲು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ.
ಈ ಅರ್ಜಿಯನ್ನು ನ್ಯಾಯಮೂರ್ತಿ ಜ್ಯೋತಿ ಮೂಲಿಮನಿ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಅರ್ಜಿಯನ್ನು ತುರ್ತು ವಿಚಾರಣೆ ನಡೆಸಲು ಕರ್ನಾಟಕ ಹೈಕೋರ್ಟ್ ನಿರಾಕರಿಸಿತು.
ರಾಜ್ಯ ಗೃಹ ಇಲಾಖೆ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರು, ಸಿಐಡಿಯ ಎಸ್‌ಐಟಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರು, ಹಾಸನದ ಹೊಳೆನರಸಿಪುರ ಟೌನ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮತ್ತು ಬಿಜೆಪಿ ಮುಖಂಡ ಹಾಗೂ ವಕೀಲ ದೇವರಾಜೇಗೌಡ ಪ್ರತಿವಾದಿಗಳು.

ಅರ್ಜಿದಾರರ ವಾದವೇನು? ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಜಿ. ಆರ್. ಮೋಹನ್ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಹಲವಾರು ಮಹಿಳೆಯರನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ. ಅಲ್ಲದೆ, ಸಾಕ್ಷ್ಯಾಧಾರಗಳನ್ನು ನಾಶ ಮಾಡಲಾಗುತ್ತಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಯಿಂದ ತನಿಖೆ ನಡೆಸಲು ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಮನವಿ ಮಾಡಿದರು.
ಈ ವೇಳೆ ಪ್ರತಿಕ್ರಿಯಿಸಿದ ನ್ಯಾಯಪೀಠ ಪ್ರಕರಣ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಹಂತದಲ್ಲಿ ಮಧ್ಯಪ್ರವೇಶಿಸುವ ಯಾವುದೇ ಅವಶ್ಯಕತೆ ಇಲ್ಲ ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದೆ.
ಪ್ರಕರಣ ದಾಖಲಾಗಿ ಕೆಲವು ದಿನಗಳು ಕಳೆದಿದೆ. ಆರೋಪಿ ಪ್ರಜ್ವಲ್ ರೇವಣ್ಣನವರು ದೂರು ದಾಖಲಾಗಿ ಇಷ್ಟು ದಿನವಾದರೂ ಎಲ್ಲಿದ್ದಾರೆ? ಎನ್ನುವ ಬಗ್ಗೆ ತಿಳಿದಿಲ್ಲ. ಪೊಲೀಸರು ಹುಡುಕುವ ಪ್ರಯತ್ನದಲ್ಲೂ ಇಲ್ಲ. ನೂರಾರು ಮಹಿಳೆಯರನ್ನು ದುರ್ಬಳಕೆ ಮಾಡಲಾಗಿದೆ. ಇದೊಂದು ಗಂಭೀರ ಪ್ರಕರಣವೆಂದು ಪರಿಗಣಿಸಿ ಪ್ರಕರಣವನ್ನು ಸ್ವತಂತ್ರ ತನಿಖಾ ಸಂಸ್ಥೆಗೆ ಹಸ್ತಾಂತರಿಸಬೇಕು. ಕಾಲಮಿತಿಯೊಳಗೆ ನ್ಯಾಯಸಮ್ಮತವಾಗಿ ಪ್ರಕರಣವನ್ನು ತನಿಖೆ ನಡೆಸಬೇಕು ಆರೋಪಿಗಳನ್ನು ಶಿಕ್ಷೆಗೊಳಪಡಿಸಬೇಕು ಎಂದು ಅರ್ಜಿ ಕೋರಲಾಗಿದೆ.
ಪ್ರಕರಣದ ಹಿನ್ನೆಲೆ: ಲೈಂಗಿಕ ಹಗರಣದಲ್ಲಿ ಭಾಗಿಯಾದ ಆರೋಪದಲ್ಲಿ ದೇಶಾದ್ಯಂತ ಸುದ್ದಿಯ ಕೇಂದ್ರಬಿಂದುವಾಗಿರುವ ಹಾಸನ ಲೋಕಸಭಾ ಸದಸ್ಯ ಪ್ರಜ್ವಲ್ ರೇವಣ್ಣ ವಿರುದ್ಧ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಕರ್ನಾಟಕ ರಾಷ್ಟ್ರ ಸಮಿತಿ ದೂರು ನೀಡಲು ಪೊಲೀಸ್ ಠಾಣೆ ಮೆಟ್ಟಿಲೇರಿತ್ತು.
ಈ ವೇಳೆ ಪೊಲೀಸರು ಪ್ರಕರಣ ಸಂಬಂಧ ಈಗಾಗಲೇ ದೂರು ದಾಖಲಾಗಿದ್ದು ಮತ್ತೊಂದು ದೂರು ದಾಖಲಿಸಿಕೊಳ್ಳುವುದಿಲ್ಲ ಎಂದು ಹೊಳೆನರಸೀಪುರ ಪೊಲೀಸರು ಹಿಂಬರಹ ಕೊಟ್ಟಿದ್ದರು. ಆ ಹಿಂಬರಹ ರದ್ದುಪಡಿಸಿ ಎ. ಐ. ಆರ್ ದಾಖಲಿಸಿಕೊಳ್ಳಲು ಪೊಲೀಸರಿಗೆ ನಿರ್ದೇಶನ ನೀಡಬೇಕು.
ವಿಡಿಯೋ ಮಾಡಿರುವವರು ಮತ್ತು ವಿಡಿಯೋವನ್ನು ಇತರರಿಗೆ ಹಂಚಿಕೆ ಮಾಡಿರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ, ಪೂರ್ಣ ಪ್ರಕರಣದ ನ್ಯಾಯಾಂಗ ತನಿಖೆ ಸೇರಿದಂತೆ ಸ್ವತಂತ್ರ ತನಿಖಾ ಸಂಸ್ಥೆಗಳಿಗೆ ವಹಿಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.












Click it and Unblock the Notifications