ಬಿಜೆಪಿ-ಜೆಡಿಎಸ್ ಮೈತ್ರಿಗೆ ಪ್ರಜ್ವಲ್ ಕೇಸ್ ಅಡ್ಡಿ ಇಲ್ಲ, ಡಿಕೆಶಿಗೆ ಹಿನ್ನಡೆ
ಬೆಂಗಳೂರು, ಮೇ 27: ಕರ್ನಾಟಕದಲ್ಲಿ 2023ರ ವಿಧಾನಸಭೆ ಚುನಾವಣೆ ಬಳಿಕ ಜೆಡಿಎಸ್ ಪಕ್ಷ ಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲ ಘೋಷಣೆ ಮಾಡಿತು. ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಯನ್ನು ಜೆಡಿಎಸ್ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಎದುರಿಸುತ್ತಿದೆ. ಹಾಸನ, ಮಂಡ್ಯ ಮತ್ತು ಕೋಲಾರದಲ್ಲಿ ಜೆಡಿಎಸ್ ಅಭ್ಯರ್ಥಿಗಳು ಕಣಕ್ಕಿಳಿದಿದ್ದಾರೆ.
ರಾಜ್ಯದಲ್ಲಿ 2ನೇ ಹಂತದ ಲೋಕಸಭೆ ಚುನಾವಣೆ ಮೇ 7ರಂದು ನಡೆಯಿತು. ಆದರೆ ಇದಕ್ಕೂ ಮೊದಲು ಹಾಸನ ಸಂಸದ, 2024ರ ಲೋಕಸಭೆ ಚುನಾವಣೆಯ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರದ್ದು ಎಂದು ಆರೋಪಿಸಲಾದ ಲೈಂಗಿಕ ದೌರ್ಜನ್ಯ ಪ್ರಕರಣದ ವಿಡಿಯೋ ಬಿಡುಗಡೆ ಆಯಿತು.

ಸರ್ಕಾರ ಈ ಕುರಿತು ತನಿಖೆ ನಡೆಸಲು ಎಸ್‌ಐಟಿ ರಚನೆ ಮಾಡಿತು. ಆದರೆ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾದರು. ಈಗ ಪಾಸ್‌ಪೋರ್ಟ್ ರದ್ದುಗೊಳಿಸಲು ಕೋರಿ ಎಸ್‌ಐಟಿ ವಿದೇಶಾಂಗ ಇಲಾಖೆಗೆ ಪತ್ರ ಬರೆದಿದೆ. ಪ್ರಜ್ವಲ್ ರೇವಣ್ಣ ಮೇ 31ರಂದು ಆಗಮಿಸುತ್ತೇನೆ ಎಂದು ಸೋಮವಾರ ವಿಡಿಯೋ ಬಿಡುಗಡೆ ಮಾಡಿದ್ದಾರೆ.
ಆರೋಪ, ಪ್ರತ್ಯಾರೋಪಗಳಿಗೆ ದಾರಿ: ಪ್ರಜ್ವಲ್ ರೇವಣ್ಣ ಪ್ರಕರಣದ ವಿಚಾರದಲ್ಲಿ ಜೆಡಿಎಸ್-ಬಿಜೆಪಿ ವಿರುದ್ಧ ಕಾಂಗ್ರೆಸ್ ಆರೋಪಗಳನ್ನು ಮಾಡಿತು. ಬಿಜೆಪಿ, ಜೆಡಿಎಸ್ ನಾಯಕರು ಕಾಂಗ್ರೆಸ್, ಸರ್ಕಾರದ ವಿರುದ್ಧ ಟೀಕೆಗಳನ್ನು ಮಾಡಿ, ಪ್ರಕರಣಕ್ಕೆ ರಾಜಕೀಯದ ಸ್ವರೂಪ ನೀಡಿದರು.
ಆದರೆ ಲೋಕಸಭೆ ಚುನಾವಣೆ ಮುಗಿಯುತ್ತಿದ್ದಂತೆಯೇ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಘೋಷಣೆಯಾಯಿತು. ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಈ ಚುನಾವಣೆಯನ್ನು ಎದುರಿಸುತ್ತಿವೆ. ಪ್ರಜ್ವಲ್ ಪ್ರಕರಣ ಮೈತ್ರಿಯ ಮೇಲೆ ಯಾವುದೇ ಪರಿಣಾಮವನ್ನು ಬೀರಲಿಲ್ಲ.
ಮೂರು ಶಿಕ್ಷಕ, ಮೂರು ಪದವೀಧರ ಕ್ಷೇತ್ರಕ್ಕೆ ಜೂನ್ 3ರಂದು ಮತದಾನ ನಡೆಯುತ್ತಿದೆ, ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯಂತೆ ಬಿಜೆಪಿ ಜೆಡಿಎಸ್‌ಗೆ 2 ಸೀಟುಗಳನ್ನು ಬಿಟ್ಟುಕೊಟ್ಟಿದೆ. ಈ ಚುನಾವಣೆಯ ಪ್ರಚಾರವನ್ನು ಉಭಯ ಪಕ್ಷಗಳ ನಾಯಕರು ಒಟ್ಟಾಗಿ ನಡೆಸುತ್ತಿದ್ದಾರೆ.
ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ಸಭೆ ಭಾನುವಾರ ಬೆಂಗಳೂರಿನಲ್ಲಿ ನಡೆಯಿತು. ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ, ಪ್ರತಿಪಕ್ಷ ನಾಯಕ ಆರ್. ಅಶೋಕ ಸಭೆಯಲ್ಲಿ ಪಾಲ್ಗೊಂಡಿದ್ದರು. ಉಭಯ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿಯನ್ನು ನಡೆಸಿದರು.
ಪ್ರಜ್ವಲ್ ರೇವಣ್ಣ ಪ್ರಕರಣದ ಬಳಿಕ ಒಕ್ಕಲಿಗರ ಬೆಂಬಲ ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ ಸಿಗಲಿದೆ ಎಂದು ನಿರೀಕ್ಷೆ ಮಾಡಲಾಗಿತ್ತು. ಡಿಸಿಎಂ ಡಿ. ಕೆ. ಶಿವಕುಮಾರ್ ಒಕ್ಕಲಿಗ ಸಮುದಾಯದ ಪ್ರಭಾವಿ ನಾಯಕರಾಗುತ್ತಾರೆ ಎಂದು ಅಂದಾಜಿಸಲಾಗಿತ್ತು. ಆದರೆ ಮೈತ್ರಿ ಗಟ್ಟಿಯಾಗಿದ್ದು, ಡಿ. ಕೆ. ಶಿವಕುಮಾರ್‌ಗೆ ಹಿನ್ನಡೆಯಾಗಿದೆ.
ಬಿಜೆಪಿ-ಜೆಡಿಎಸ್ ನಾಯಕರು ಒಟ್ಟಾಗಿ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಕ್ಷೇತ್ರದ ವ್ಯಾಪ್ತಿಗೆ ಬೆಂಗಳೂರು ನಗರ (ಕೇಂದ್ರ, ಉತ್ತರ, ದಕ್ಷಿಣ), ಬೆಂಗಳೂರು ಗಾಮೀಣ ಮತ್ತು ರಾಮನಗರ ಜಿಲ್ಲೆಗಳು ಒಳಪಡುತ್ತವೆ.
ಬೆಂಗಳೂರು ಗ್ರಾಮೀಣ ಮತ್ತು ರಾಮನಗರ ಜಿಲ್ಲೆಗಳಲ್ಲಿ ಕೆಪಿಸಿಸಿ ಅಧ್ಯಕ್ಷ, ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್. ಬೆಂಗಳೂರು ಗ್ರಾಮಾಂತರ ಸಂಸದ ಡಿ. ಕೆ. ಸುರೇಶ್ ಪ್ರಭಾವ ಹೆಚ್ಚಿದೆ. ಆದರೆ ಮೈತ್ರಿಕೂಟದ ನಾಯಕರು ಪ್ರಜ್ವಲ್ ಪ್ರಕರಣದ ಬಳಿಕ ಒಂದಾಗಿ ನಿಂತಿದ್ದು, ಡಿ. ಕೆ. ಶಿವಕುಮಾರ್‌ಗೆ ತಮ್ಮ ಪ್ರಭಾವ ಇರುವ ಕ್ಷೇತ್ರಗಳಲ್ಲಿಯೇ ಹಿನ್ನಡೆ ತಂದಿದೆ.
ಆರ್. ಅಶೋಕ ಮಾತನಾಡಿ, "ನಮ್ಮ ಮೈತ್ರಿ ಹೀಗೆ ಮುಂದುವರೆದರೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ವೈಟ್‌ವಾಷ್ ಆಗಲಿದೆ. ಚುನಾವಣಾ ಫಲಿತಾಂಶ ನಿರ್ಧರಿಸಲು ಯಾವುದೇ ಸಮೀಕ್ಷೆ ಬೇಕಾಗಿಲ್ಲ. ನಾವು ಕಾಂಗ್ರೆಸ್ ಪಕ್ಷದವರಿಗೆ ಚೊಂಬು ನೀಡುತ್ತೇವೆ. ಆದ್ದರಿಂದ ನಮ್ಮ ಮೈತ್ರಿ ಮುರಿಯಲು ಕಾಂಗ್ರೆಸ್ ನಾಯಕರು ಷಡ್ಯಂತ್ರ ರೂಪಿಸುತ್ತಿದ್ದಾರೆ" ಎಂದು ಆರೋಪ ಮಾಡಿದರು.
ಪ್ರಜ್ವಲ್ ರೇವಣ್ಣ ದೇಶಕ್ಕೆ ಆಗಮಿಸಿದ ಮೇಲೆ, ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ಮೇಲೆ ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ನಾಯಕರು ಕಾಂಗ್ರೆಸ್ ವಿರುದ್ಧ ಒಗ್ಗಟ್ಟಾಗಿ ನಿಲ್ಲಲಿದ್ದಾರೆ. ಇದು ರಾಜ್ಯ ರಾಜಕೀಯದ ಮೇಲೆ ಯಾವ ಪ್ರಭಾವ ಬೀರಲಿದೆ? ಎಂದು ಕಾದು ನೋಡಬೇಕಿದೆ.












Click it and Unblock the Notifications