ದೇಶಕ್ಕೆ ಬರುವ ಮೊದಲೇ ಕೋರ್ಟ್ ಮೊರೆ ಹೋದ ಪ್ರಜ್ವಲ್ ರೇವಣ್ಣ!
ಬೆಂಗಳೂರು, ಮೇ 29: ವಿದೇಶದಲ್ಲಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ದೇಶಕ್ಕೆ ಬರುವ ಮೊದಲೇ ಕೋರ್ಟ್ ಮೊರೆ ಹೋಗಿದ್ದಾರೆ. ಮೇ 31ರಂದು ಎಸ್‌ಐಟಿ ಮುಂದೆ ಹಾಜರಾಗುತ್ತೇನೆ ಎಂದು ಈಗಾಗಲೇ ವಿಡಿಯೋದಲ್ಲಿ ಪ್ರಜ್ವಲ್ ಮಾಹಿತಿ ನೀಡಿದ್ದಾರೆ.
ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ಆರೋಪಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿದ್ದಾರೆ. ಅವರ ವಿರುದ್ಧ ಮೂರು ಪ್ರಕರಣ ದಾಖಲಾಗಿದೆ. ಬಂಧನ ಭೀತಿಯಲ್ಲಿರುವ ಅವರು ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನಿಗಾಗಿ ಬೆಂಗಳೂರು ನಗರದಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಮೂರು ಪ್ರಕರಣದಲ್ಲಿಯೂ ನಿರೀಕ್ಷಣಾ ಜಾಮೀನು ನೀಡುವಂತೆ ಕೋರ್ಟ್‌ಗೆ ಮನವಿ ಮಾಡಿದ್ದಾರೆ.
ವಿಡಿಯೋ ಬಿಡುಗಡೆ ಮಾಡಿದ್ದ ಪ್ರಜ್ವಲ್: ಏಪ್ರಿಲ್ 26ರಂದು ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಗೆ ಮತದಾನ ಮಾಡಿದ ಬಳಿಕ ಪ್ರಜ್ವಲ್ ರೇವಣ್ಣ ವಿದೇಶಕ್ಕೆ ಪರಾರಿಯಾಗಿದ್ದಾರೆ. ಮೇ 1ರಂದು ಅವರು, 'ವಿಚಾರಣೆಗೆ ಹಾಜರಾಗಲು ನಾನು ಬೆಂಗಳೂರಿನಲ್ಲಿ ಇಲ್ಲದ ಕಾರಣ, ನಾನು ನನ್ನ ವಕೀಲರ ಮೂಲಕ CID ಬೆಂಗಳೂರಿಗೆ ಮನವಿ ಮಾಡಿದ್ದೇನೆ. ಸತ್ಯ ಆದಷ್ಟು ಬೇಗ ಹೊರಬರಲಿದೆ' ಎಂದು ಫೇಸ್‌ಬುಕ್ ಪೋಸ್ಟ್ ಒಂದನ್ನು ಹಾಕಿದ್ದರು.
ಬಳಿಕ ಅವರ ಕುರಿತು ಯಾವುದೇ ಮಾಹಿತಿ ಇರಲಿಲ್ಲ. ಸೋಮವಾರ ದಿಢೀರ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದ ಪ್ರಜ್ವಲ್ ರೇವಣ್ಣ ಮೇ 31ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಎಸ್ಐಟಿ ಮುಂದೆ ವಿಚಾರಣೆಗೆ ಹಾಜರಾಗುತ್ತೇನೆ ಎಂದು ಮಾಹಿತಿ ನೀಡಿದ್ದರು.
ಸದ್ಯದ ಮಾಹಿತಿ ಪ್ರಕಾರ ಪ್ರಜ್ವಲ್ ರೇವಣ್ಣ ಶುಕ್ರವಾರ ಮಧ್ಯರಾತ್ರಿ 12.30ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾಣ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಆದರೆ ಬೆಂಗಳೂರಿಗೆ ಬರುವ ಮೊದಲೇ ಅವರು ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ.
ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಎಸ್‌ಐಟಿಗೆ ನೋಟಿಸ್ ಜಾರಿ ಮಾಡಿದೆ. ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಪ್ರಜ್ವಲ್ ರೇವಣ್ಣ ವಿಮಾನ ನಿಲ್ದಾಣಕ್ಕೆ ಬಂದ ತಕ್ಷಣ ಬಂಧಿಸಬೇಕು ಎಂದು ಎಸ್‌ಐಟಿ ಅಧಿಕಾರಿಗಳು ಕಾಯುತ್ತಿದ್ದಾರೆ.
ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಜ್ವಲ್ ರೇವಣ್ಣ ಪರ ವಕೀಲರು ಮೇ 31ರಂದು ಪ್ರಜ್ವಲ್ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಆದ್ದರಿಂದ ಮೇ 30ರಂದು ಅರ್ಜಿ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಆದರೆ ನ್ಯಾಯಾಧೀಶರು ಈ ಮನವಿ ತಿರಸ್ಕಾರ ಮಾಡಿದರು.
ಕರ್ನಾಟಕ ಸರ್ಕಾರ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿದೆ. ಹೊಳೆನರಸೀಪುರ ಠಾಣೆಯಲ್ಲಿ ಪ್ರಕರಣ ದಾಖಲಾದ ಪ್ರಕರಣ, ಕೆ. ಆರ್. ನಗರ ಅಪಹರಣ ಪ್ರಕರಣ ಸೇರಿ ಮೂರು ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿದ್ದಾರೆ.
ಕೆ. ಆರ್. ನಗರ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಎಚ್. ಡಿ. ರೇವಣ್ಣ ಸಹ ಆರೋಪಿ. ಎಸ್‌ಐಟಿ ಅಧಿಕಾರಿಗಳು ಈ ಪ್ರಕರಣದಲ್ಲಿ ಅವರನ್ನು ಬಂಧಿಸಿದ್ದರು. ಕೋರ್ಟ್ ಜಾಮೀನು ನೀಡಿದ ಬಳಿಕ ಅವರು ಬಿಡುಗಡೆಗೊಂಡಿದ್ದಾರೆ.
ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮೇ 23ರಂದು 'ಪ್ರಜ್ವಲ್ ರೇವಣ್ಣನಿಗೆ ನನ್ನ ಎಚ್ಚರಿಕೆ' ಎಂದು ಪತ್ರವೊಂದನ್ನು ಬರೆದಿದ್ದರು. ಪ್ರಜ್ವಲ್ ರೇವಣ್ಣ ತಕ್ಷಣ ಆಗಮಿಸಬೇಕು, ಎಸ್‌ಐಟಿ ಮುಂದೆ ಶರಣಾಗಬೇಕು ಎಂದು ಪತ್ರದಲ್ಲಿ ಸೂಚನೆ ನೀಡಿದ್ದರು.












Click it and Unblock the Notifications