ಪೊಲೀಸ್ ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ಫ್ರೀ ವ್ಯವಸ್ಥೆ: ಪ್ರತಾಪ್ ಸಿಂಹ ಹೆಸರು ಹೇಳದೆ ಪ್ರಿಯಾಂಕ್ ಖರ್ಗೆ
ಪೊಲೀಸ್ ಠಾಣೆಗೆ ನುಗ್ಗಿದರೆ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ಉಚಿತ ವ್ಯವಸ್ಥೆ ಮಾಡುವುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರ ಹೆಸರು ಹೇಳದೆ ಸಚಿವ ಪ್ರಿಯಾಂಕ್ ಖರ್ಗೆ ಅವರು ವಾರ್ನಿಂಗ್ ಕೊಟ್ಟಿದ್ದಾರೆ.
ಸೋಶಿಯಲ್ ಮೀಡಿಯಾ ಎಕ್ಸ್‌ನಲ್ಲಿ ಟ್ವೀಟ್ ಮಾಡಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರು, ಮೈಸೂರಿನ ಕಡೆಯ "ಪೇಟೆ ರೌಡಿ'ಯೊಬ್ಬ ಪೊಲೀಸರನ್ನು ಬೆದರಿಸುವ ಮಾತುಗಳನ್ನಾಡಿದ್ದಾನೆ. ಅಸ್ತಿತ್ವ ಕಳೆದುಕೊಂಡ ಕತ್ತಲೆ ಜಗತ್ತಿನ ಆತ್ಮದಂತೆ ಪರಿತಪಿಸುತ್ತಿರುವ ಆ ವ್ಯಕ್ತಿ ವಾರಕ್ಕೊಮ್ಮೆ ಗೋಗರೆದು ಮಾಧ್ಯಮಗಳನ್ನು ಕರೆಸಿಕೊಂಡು ಅಸಂಬದ್ಧ ಹೇಳಿಕೆ ನೀಡುತ್ತಾ ಅಸ್ತಿತ್ವ ಉಳಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾನೆ..

"ಪೊಲೀಸ್ ಠಾಣೆಗೆ ನುಗ್ಗುತ್ತೇನೆ" ಎಂದಿರುವ ಆ ವ್ಯಕ್ತಿಗೆ ಮುಕ್ತ ಆಹ್ವಾನವಿದೆ, ಪೊಲೀಸ್ ಠಾಣೆಗೆ ನುಗ್ಗಿದ ನಂತರ ಸೀದಾ ಪರಪ್ಪನ ಅಗ್ರಹಾರಕ್ಕೆ ನುಗ್ಗಿಸುವ ವ್ಯವಸ್ಥೆಯನ್ನು ಉಚಿತವಾಗಿ ಕಲ್ಪಿಸಲಾಗುವುದು! ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರ ಕರ್ತವ್ಯಕ್ಕೆ ಯಾರೇ ಅಡ್ಡಿಪಡಿಸಿದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಲು ಸನ್ನದ್ದವಾಗಿದೆ ಗೃಹ ಇಲಾಖೆ, ಸೂಕ್ಷ್ಮ ಸಂದರ್ಭಗಳನ್ನು ಬಳಸಿಕೊಂಡು ಸಮಾಜದ ಸ್ವಾಸ್ಥ್ಯ ಕದಡುವ ಪ್ರಯತ್ನಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಪೊಲೀಸರ ನೈತಿಕ ಸ್ಥೈರ್ಯ ಕಸಿಯಲು ಬಿಡುವುದಿಲ್ಲ ಎಂದು ಪರೋಕ್ಷವಾಗಿ ಪ್ರತಾಪ್ ಸಿಂಹಗೆ ಎಚ್ಚರಿಕೆ ಕೊಟ್ಟಿದ್ದಾರೆ.
ಮಾಜಿ ಸಂಸದ ಪ್ರತಾಪ್ ಸಿಂಹ ಹೇಳಿದ್ದೇನು ?
ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲೆಯ ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ನಡೆದ ಶಾಂತಿ ಸಭೆಯಲ್ಲಿ ಅಲ್ಲಿನ ಇನ್‌ಸ್ಪೆಕ್ಟರ್ ಧನಂಜಯ ಅವರು ಆಡಿದ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ್ದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಬ್ರಿಟಿಷರ ಕಾಲದ ದರ್ಪವನ್ನು ಪೊಲೀಸರು ತಮ್ಮ ಮನೆಯಲ್ಲಿ ಇಟ್ಟುಕೊಳ್ಳಲಿ. ಯುವಕರಿಗೆ ಧಮ್ಕಿ ಹಾಕಲು ನೀವ್ಯಾರು, ಇನ್ನೊಮ್ಮೆ ಈ ರೀತಿ ಮಾತನಾಡಿದರೆ ನಾನೇ ನೇರವಾಗಿ ಪೊಲೀಸ್ ಠಾಣೆಗೆ ನುಗ್ಗುತ್ತೇನೆ ಎಂದಿದ್ದರು. ಅಲ್ಲದೆ ಪೋಲಿಸಪ್ಪಾ, ಮಸೀದಿ ರೋಡಲ್ಲಿ ಹೋದ್ರೆ, ಕುಣಿದ್ರೆ ಗ್ರಹಚಾರ ಬಿಡಿಸ್ತೀರಾ? ಎಂದೂ ಮಾಜಿ ಸಂಸದ ಪ್ರತಾಪ್ ಸಿಂಹ ಪ್ರಶ್ನೆ ಮಾಡಿದ್ದರು.
ಏನಿದು ಪ್ರಕರಣ ?
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಬೇಕು ಎಂದು ಹಠ ಮಾಡಬೇಡಿ, ಮಸೀದಿ ಮುಂದೆಯೇ ಹೋಗಿ ಪಟಾಕಿ ಸಿಡಿಸುವುದು ಬೇಡ. ನಿಮ್ಮ ಸಂಭ್ರಮವನ್ನು ಅನ್ಯ ಧರ್ಮೀಯರು ನೋಡಿದರೆ ಹೌದು ಹೇಗೆ ಸಂತೋಷದಿಂದ ಆಚರಣೆ ಮಾಡುತ್ತಿದ್ದಾರೆ ಎಂದುಕೊಳ್ಳಬೇಕು.
ಇದನ್ನು ಬಿಟ್ಟು ಮಸೀದಿ ಮುಂದೆ ಉದ್ದೇಶಪೂರ್ವಕವಾಗಿ ಪಟಾಕಿ ಸಿಡಿಸಿದರೆ, ಗ್ರಹಚಾರ ಬಿಡಿಸ್ತೇನೆ ಎಂಬ ಮೈಸೂರು ಜಿಲ್ಲೆ ಟಿ. ನರಸೀಪುರ ಇನ್‌ಸ್ಪೆಕ್ಟರ್ ಧನಂಜಯ್ ಅವರು ಹೇಳಿದ್ದಾರೆ ಎನ್ನಲಾದ ಮಾತು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ, ಅಲ್ಲದೆ ಈ ವಿಚಾರವು ತೀವ್ರ ಚರ್ಚೆಗೆ ಗ್ರಾಸವಾಗಿದೆ.


Click it and Unblock the Notifications
