Siddaramaiah: ಪ್ರಾಸಿಕ್ಯೂಷನ್‌ಗೆ ಅನುಮತಿ, ಆಗಸ್ಟ್‌ 27ರಂದು ರಾಜಭವನಕ್ಕೆ ಮುತ್ತಿಗೆ

ಬೆಂಗಳೂರು, ಆಗಸ್ಟ್ 20: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದು ಭಾರೀ ಚರ್ಚೆಗೆ ಕಾರಣವಾಗಿದೆ. ರಾಜ್ಯಪಾಲರ ನಡೆ ವಿರೋಧಿಸಿ 'ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ' ಪಂಜಿನ ಮೆರವಣಿಗೆ ಮತ್ತು ರಾಜಭವನ ಮುತ್ತಿಗೆಗೆ ಕರೆ ನೀಡಿದೆ.

ಮಂಗಳವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ಪ್ರಧಾನ ಸಂಚಾಲಕ ಕೆ. ಎಂ. ರಾಮಚಂದ್ರಪ್ಪ ಈ ಕುರಿತು ಮಾಹಿತಿ ನೀಡಿದರು. ಆಗಸ್ಟ್ 21ರಂದು ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ನಡೆಯಲಿದ್ದು, ಆಗಸ್ಟ್ 27ರಂದು ರಾಜಭವನಕ್ಕೆ ಮುತ್ತಿಗೆ ಹಾಕಲಾಗುತ್ತದೆ.

Prosecution Against Siddaramaiah Karnataka Exploited Communities Union To Lay Siege To Rajbhavan

ರಾಜ್ಯಪಾಲ ಥಾವರಚಂದ್ ಗೆಹ್ಲೇಟ್ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯ ಸೆಕ್ಷನ್ 17-ಎ ಮತ್ತು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ಸೆಕ್ಷನ್-2023ರ ಸೆಕ್ಷನ್ 218ರ ಅಡಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ಅನುಮತಿ ನೀಡಿದ್ದಾರೆ. ಸಿದ್ದರಾಮಯ್ಯ ಇದನ್ನು ಪ್ರಶ್ನಿಸಿ ಹೈಕೋರ್ಟ್‌ ಮೊರೆ ಹೋಗಿದ್ದು, ಆಗಸ್ಟ್ 29ರ ತನಕ ಯಾವುದೇ ಕ್ರಮ ಕೈಗೊಳ್ಳದಂತೆ ಕೋರ್ಟ್ ಮಧ್ಯಂತರ ಆದೇಶ ನೀಡಿದೆ.

ರಾಜಭವನಕ್ಕೆ ಮುತ್ತಿಗೆ: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು 'ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ' ಖಂಡಿಸಿದೆ. ಕಳೆದ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ನಾಡಿನ ನೆಲ, ಜಲ, ಭಾಷೆ ಮತ್ತು ದಮನಿತ ಸಮುದಾಯಗಳ ಧ್ವನಿಯಾಗಿ ಕಾರ್ಯ ನಿರ್ವಹಿಸುತ್ತಾ ಬಂದಿದ್ದಾರೆ. ಜನರ ಆಶೀರ್ವಾದದಿಂದ ನಿರಂತರವಾಗಿ ಜನಸೇವೆಯಲ್ಲಿ ನಿರತರಾಗಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ತಪ್ಪು ಮಾಡಿಲ್ಲವೆಂದು ರಾಜ್ಯದ ಜನರಿಗೂ ತಿಳಿದಿದೆ ಎಂದು ಒಕ್ಕೂಟ ಹೇಳಿದೆ.

ಬಿಜೆಪಿ, ಜೆಡಿಎಸ್ ಪಕ್ಷಗಳ ಅಧಿಕಾರ ಅವಧಿಯಲ್ಲಿ ನಿವೇಶನ ಹಂಚಿಕೆ ಆಗಿರುವುದು ಎಲ್ಲರಿಗೂ ತಿಳಿದಿರುವ ಸಂಗತಿ. ರಾಜಭವನವನ್ನು ಬಳಸಿಕೊಂಡ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯ ಸರ್ಕಾರದ ವಿರುದ್ಧ ಷಡ್ಯಂತ್ರ ಮಾಡುತ್ತಿವೆ. ರಾಜ್ಯ ಸರ್ಕಾರವನ್ನು ಬೀಳಿಸಬೇಕೆಂಬುದು ಕೇಂದ್ರ ಸರ್ಕಾರದ ಪಿತೂರಿ, ಹೀಗಾಗಿ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಭಾರತದ ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯ ಸಂರಕ್ಷಕರಾಗಿ ಕಾರ್ಯನಿರ್ವಹಿಸಬೇಕಿದ್ದ ರಾಜ್ಯಪಾಲರು ಕೇಂದ್ರದ ಸರ್ಕಾರದ ಏಜೆಂಟರಂತೆ ವರ್ತಿಸುತ್ತಾ ಹಾಗೂ ಕುಮ್ಮಕ್ಕಿನಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಮಾಡಲು ಹೊರಟಿದ್ದಾರೆ. ರಾಜ್ಯಪಾಲರು ದುರುದ್ದೇಶದಿಂದ ಮುಖ್ಯಮಂತ್ರಿಗಳ ಮೇಲೆ ಮಸಿ ಬಳಿಯುತ್ತಾ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವ ಹೀನ ಕೃತ್ಯಕ್ಕೆ ಕೈ ಹಾಕಿದ್ದಾರೆ ಎಂದು ಒಕ್ಕೂಟ ದೂರಿದೆ.

ನಾಡಿನ ಶೋಷಿತ ಸಮುದಾಯಗಳ ಅಪೂರ್ವ ಬೆಂಬಲದಿಂದಾಗಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಬಡಜನರ ಪರವಾಗಿರುವುದೇ ಪ್ರತಿಪಕ್ಷಗಳ ಭಯಕ್ಕೆ ಕಾರಣವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಯಶಸ್ವಿಯಾಗಿ ಅನುಷ್ಠಾನ ಮಾಡಿರುವುದು ಅವರನ್ನು ಕಾಡುತ್ತಿದೆ. ದಲಿತ, ಹಿಂದುಳಿದ, ಅಲ್ಪ ಸಂಖ್ಯಾತ, ಸಮುದಾಯಗಳ ಹಕ್ಕುಗಳನ್ನು ಮತ್ತಷ್ಟು ಬಲಗೊಳಿಸಲಿದೆ ಎಂಬ ಭಯದ ಕಾರಣಕ್ಕಾಗಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಕೇಂದ್ರ ಸರ್ಕಾರ ಹವಣಿಸುತ್ತಿದೆ ಎಂದು ಒಕ್ಕೂಟ ಕೇಂದ್ರ ಸರ್ಕಾರದ ವಿರುದ್ಧ ಕಿಡಿ ಕಾರಿದೆ.

ಜನ ನಾಯಕ ಸಿದ್ದರಾಮಯ್ಯರನ್ನು ರಾಜಕೀಯವಾಗಿ ಮುಗಿಸಿದರೆ, ಕಾಂಗ್ರೆಸ್ ಪಕ್ಷವನ್ನು ಕೂಡ ಮುಗಿಸಬಹುದು ಎಂಬ ಭ್ರಮೆಯಲ್ಲಿ ಕೇಂದ್ರ ಸರ್ಕಾರ ಮತ್ತು ಪ್ರತಿಪಕ್ಷಗಳು ಷಡ್ಯಂತ್ರ ರೂಪಿಸುತ್ತಿವೆ. ಭಾರತದ ಸಂವಿಧಾನ ಮತ್ತು ಪ್ರಜಾ ಪ್ರಭುತ್ವ ಸಂರಕ್ಷಣೆಗಾಗಿ ನಿರಂತರವಾಗಿ ಚಳುವಳಿ ರೂಪಿಸುತ್ತಾ ಬರುತ್ತಿರುವ ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ಈಗಾಗಲೇ ತಾಲ್ಲೂಕು, ಜಿಲ್ಲಾ ಮತ್ತು ರಾಜ್ಯ ಮಟ್ಟದಲ್ಲಿ ವಿವಿಧ ರೀತಿಯ ಹೋರಾಟಗಳನ್ನು ನಿರಂತರವಾಗಿ ಮಾಡಿದೆ, ಇನ್ನೂ ಹೆಚ್ಚಿನ ಸ್ಪೂರ್ತಿಯೊಂದಿಗೆ ಹೋರಾಡುತ್ತೇವೆ. ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ನಡೆಯುತ್ತಿರುವ ಈ ಪಿತೂರಿಯ ವಿರುದ್ಧ ರಾಜ್ಯವ್ಯಾಪಿ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ ನಿರ್ಧರಿಸಿದೆ.

ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ವಿರೋಧಿಸಿ, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸಲು ಹೊರಟಿರುವುದನ್ನು ಖಂಡಿಸಿ ಆಗಸ್ಟ್ 21ರಂದು ಬೆಂಗಳೂರು ನಗರದಲ್ಲಿ ವಿದ್ಯಾರ್ಥಿಗಳ ಪಂಜಿನ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ವಿದ್ಯಾರ್ಥಿಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಂವಿಧಾನ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡುತ್ತಿರುವ ಕೇಂದ್ರ ಸರ್ಕಾರ ಮತ್ತು ರಾಜ್ಯಪಾಲರ ಕುತಂತ್ರಗಳನ್ನು ವಿರೋಧಿಸಿ ಆಗಸ್ಟ್ 27 ರಂದು ರಾಜಭವನ ಮುತ್ತಿಗೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಮುಂದಾಗುವ ನಿಟ್ಟಿನಲ್ಲಿ ನಾಡಿನ ಪ್ರಜ್ಞಾವಂತ ಜನತೆ ಮತ್ತು ಅಹಿಂದ ಸಮುದಾಯಗಳು ಈ ಹೋರಾಟದಲ್ಲಿ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಒಕ್ಕೂಟ ಕರೆಯನ್ನು ಸಹ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+