ಆಗಸ್ಟ್ 19ರಂದು ಸಿಎಂ ವಿರುದ್ಧ ಎನ್‌ಡಿಎ ಒಳಸಂಚು ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಡಿಸಿಎಂ ಡಿ.ಕೆ.ಶಿವಕುಮಾರ್
ಬೆಂಗಳೂರು, ಆಗಸ್ಟ್, 18: ಇದೀಗ ರಾಜ್ಯಾದ್ಯಂದ ಮುಡಾ ಪ್ರಕರಣದ ಸದ್ದು ಜೋರಾಗಿದ್ದು, ಸಿದ್ದರಾಮಯ್ಯ ವಿರುದ್ಧ ವಿಪಕ್ಷ ನಾಯಕರು ಆರೋಪಗಳ ಸುರಿಮಳೆಗೂಯುತ್ತಿದ್ದಾರೆ. ಇನ್ನು ಸಿಎಂ ವಿರುದ್ಧ ಎನ್‌ಡಿಎ ಒಳಸಂಚು ಖಂಡಿಸಿ ಸೋಮವಾರ (ಆಗಸ್ಟ್ 19) ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು, ನಾಯಕರು ಪಾಲ್ಗೊಳ್ಳಬೇಕೆಂದು ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮೂಲಕ ಮನವಿ ಮಾಡಿದ್ದಾರೆ.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಕಡೆಗೂ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ರಾಜಭವನದಿಂದ ಈ ನಿರ್ಣಯ ಹೊರಬೀಳುತ್ತಿದ್ದಂತೆ ಕಾನೂನಾತ್ಮಕ ಮತ್ತು ರಾಜಕೀಯ ಹೋರಾಟ ಕೈಗೊಳ್ಳಲು ಕಾಂಗ್ರೆಸ್ ನಿರ್ಧಾರ ಮಾಡಿದೆ.

ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಖಂಡಿಸಿ ಆಗಸ್ಟ್ 19ರಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸಲು ಡಿ.ಕೆ.ಶಿವಮುಕಾರ್ ಕರೆ ಕೊಟ್ಟಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟಿಸಲು ಸೂಚನೆ ಕೊಟ್ಟಿದ್ದಾರೆ. ಸಿಎಂ ಮೇಲೆ ಸುಮ್ಮಬೆ ಆರೋಪ ಮಾಡಲು ಬಿಜೆಪಿಯವರು ಹೊರಟಿದ್ದಾರೆ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಆದ್ದರಿಂದ ಪಕ್ಷದ ಕಾರ್ಯಕರ್ತರು, ಮುಖಂಡರಿಗೆ ಶಾಂತಿಯುತ ಪ್ರತಿಭಟನೆ ನಡೆಸಲು ಡಿಸಿಎಂ ಡಿ.ಕೆ. ಶಿವಕುಮಾರ್ ಮನವಿ ಮಾಡಿದ್ದಾರೆ.
ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ @Siddaramaiah ಅವರ ವಿರುದ್ಧ NDA ಒಳಸಂಚು ಖಂಡಿಸಿ ಆಗಸ್ಟ್ 19ರ ಸೋಮವಾರದಂದು ಬೆಳಗ್ಗೆ 11 ಗಂಟೆಗೆ ರಾಜ್ಯಾದ್ಯಂತ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಪಕ್ಷದ ಎಲ್ಲಾ ಕಾರ್ಯಕರ್ತರು, ನಾಯಕರು ಈ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕೆಂದು ಮನವಿ ಮಾಡುತ್ತೇನೆ. pic.twitter.com/kSH3kOVwbT
— DK Shivakumar (@DKShivakumar) August 18, 2024
ರಾಜ್ಯಪಾಲರ ವಿರುದ್ಧ ಪಂಜಿನ ಮೆರವಣಿಗೆ: ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಹಿನ್ನೆಲೆ ಗುಂಡ್ಲುಪೇಟೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ಆಕ್ರೋಶ ಹೊರಹಾಕಿದರು.
ಮೈಸೂರು-ಊಟಿ ಹೆದ್ದಾರಿ, ಚಾಮರಾಜನಗರದ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪಂಜಿನ ಮೆರವಣಿಗೆ ನಡೆಸಿ ರಾಜ್ಯಪಾಲರ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಕಿಡಿಕಾರಿದರು. ಸಿಎಂ ಸಿದ್ದರಾಮಯ್ಯಗೆ ಜೈಕಾರ ಹಾಕುತ್ತಾ ರಾಜ್ಯಪಾಲರ ವಿರುದ್ಧ ಘೋಷಣೆ ಕೂಗಿ ಕೂಡಲೇ ರಾಜ್ಯಪಾಲರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು.
ರಾಷ್ಟ್ರೀಯ ಹೆದ್ದಾರಿ ತಡೆ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವುದನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಶನಿವಾರ ಮಧ್ಯಾಹ್ನ ಗುಂಡ್ಲುಪೇಟೆಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಪಟ್ಟಣದ ಕಾಂಗ್ರೆಸ್ ಕಚೇರಿಯಿಂದ ಜಾಥಾ ಹೊರಟ ಕೈ ಮುಖಂಡರು, ಕಾರ್ಯಕರ್ತರು ಎಂಡಿಸಿಸಿ ಬ್ಯಾಂಕ್ ವೃತ್ತದ ಬಳಿ ಮಾನವ ಸರಪಳಿ ನಿರ್ಮಿಸಿ ಬಳಿಕ ಸಾರಿಗೆ ಬಸ್ ನಿಲ್ದಾಣದ ಮುಂದೆ ರಸ್ತೆ ತಡೆದು ಆಕ್ರೋಶ ಹೊರಹಾಕಿದರು.
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಬಿಜೆಪಿ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದ ಕಾರ್ಯಕರ್ತರು, ಸಿದ್ದರಾಮಯ್ಯ ಸರ್ಕಾರದ ಉತ್ತಮ ಕಾರ್ಯ ಸಹಿಸದೇ ಕೇಂದ್ರ ಸರ್ಕಾರ ಪಿತೂರಿ ನಡೆಸಿದೆ ಎಂದು ಕಿಡಿಕಾರಿದರು.
ಕೂಡಲೇ ರಾಜ್ಯಪಾಲರನ್ನು ವಜಾ ಮಾಡಬೇಕು ಎಂದು ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದರು. ಮೈಸೂರು- ಊಟಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸಿಗೂ ಅಧಿಕ ಕಾಲ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.












Click it and Unblock the Notifications