Breaking News: 402 ಪಿಎಸ್‌ಐ ನೇಮಕಾತಿ ಪರೀಕ್ಷೆ ಮುಂದೂಡಿಕೆ
ಚಿಕ್ಕಮಗಳೂರು, ಸೆಪ್ಟೆಂಬರ್ 12: ಅಭ್ಯರ್ಥಿಗಳ, ವಿರೋಧ ಪಕ್ಷಗಳ ಒತ್ತಾಯಕ್ಕೆ ಮಣಿದ ಕರ್ನಾಟಕ ಸರ್ಕಾರ ಪಿಎಸ್‌ಐ ನೇಮಕಾತಿ ಪರೀಕ್ಷೆಯನ್ನು ಮುಂದೂಡಿಕೆ ಮಾಡಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಐಎ) 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಸೆಪ್ಟೆಂಬರ್ 22ರಂದು ನಡೆಸುವುದಾಗಿ ಈ ಹಿಂದೆ ದಿನಾಂಕವನ್ನು ನಿಗದಿ ಮಾಡಿತ್ತು.
ಬೆಂಗಳೂರಿನಲ್ಲಿ ಗುರುವಾರ ಮಾತನಾಡಿದ ಗೃಹ ಸಚಿವ ಡಾ. ಜಿ. ಪರಮೇಶ್ವರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪಿಎಸ್‌ಐ) ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಮಾಹಿತಿ ನೀಡಿದರು. ಸೆಪ್ಟೆಂಬರ್ 28ರ ಶನಿವಾರ ಪರೀಕ್ಷೆಯನ್ನು ನಡೆಸಲಾಗುತ್ತದೆ ಎಂದು ಹೇಳಿದರು.

ಸಚಿವ ಡಾ. ಜಿ. ಪರಮೇಶ್ವರ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆಯನ್ನು ಮುಂದೂಡಿಕೆ ಮಾಡುವ ಕುರಿತು ಇಲಾಖೆ ಅಧಿಕಾರಿಗಳು ಮತ್ತು ಕೆಐಎ ಜೊತೆ ಚರ್ಚಿಸಿ ತೀರ್ಮಾನಿಸಲಾಗುತ್ತದೆ ಎಂದು ಹೇಳಿದ್ದರು. ಈಗ ದಿನಾಂಕವನ್ನು ಮುಂದೂಡಿಕೆ ಮಾಡಲಾಗಿದೆ. ಈ ಕುರಿತು ಶೀಘ್ರದಲ್ಲಿಯೇ ಕೆಐಎ ಆದೇಶವನ್ನು ಹೊರಡಿಸುವ ನಿರೀಕ್ಷೆ ಇದೆ.
ಸೆಪ್ಟೆಂಬರ್ 22ರಂದು ಕೇಂದ್ರ ಲೋಕಸೇವಾ ಆಯೋಗದ ಪರೀಕ್ಷೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದ್ದರಿಂದ ಅಂದೇ ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ನಡೆಸಿದರೆ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಪರೀಕ್ಷೆ ಮುಂದೂಡಿಕೆ ಮಾಡಬೇಕು ಎಂದು ಒತ್ತಾಯಿಸಲಾಗಿತ್ತು. ಈಗ ಪರೀಕ್ಷೆಯನ್ನು ಸೆಪ್ಟೆಂಬರ್ 28ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಪಿಎಸ್‌ಐ ನೇಮಕಾತಿಗೆ ಅರ್ಜಿ ಸಲ್ಲಿಕೆ ಮಾಡಿರುವ 100ಕ್ಕೂ ಅಧಿಕ ಅಭ್ಯರ್ಥಿಗಳು ಯುಪಿಎಸ್‌ಸಿ ಪರೀಕ್ಷೆಯನ್ನು ಸಹ ಬರೆಯುತ್ತಿದ್ದಾರೆ. ಆದ್ದರಿಂದ ಒಂದೇ ದಿನ ಪರೀಕ್ಷೆ ನಡೆಸಿದರೆ ಅಭ್ಯರ್ಥಿಗಳಿಗೆ ತೊಂದರೆಯಾಗಲಿದೆ. ಪಿಎಸ್ಐ ನೇಮಕಾತಿ ಪರೀಕ್ಷೆ ದಿನಾಂಕವನ್ನು ಮುಂದೂಡಿಕೆ ಮಾಡಬೇಕು ಎಂದು ಅಭ್ಯರ್ಥಿಗಳು ಸರ್ಕಾರಕ್ಕೆ ಮನವಿ ಮಾಡಿದ್ದರು. ಅಲ್ಲದೇ ವಿರೋಧ ಪಕ್ಷಗಳು ಸಹ ಪರೀಕ್ಷೆ ಮುಂದೂಡಿ ಎಂದು ಸರ್ಕಾರವನ್ನು ಒತ್ತಾಯಿಸಿದ್ದವು.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ 402 ಪಿಎಸ್‌ಐ ಹುದ್ದೆಗಳಿಗೆ ಸೆಪ್ಟೆಂಬರ್ 22ರಂದು ಲಿಖಿತ ಪರೀಕ್ಷೆ ನಡೆಯಲಿದ್ದು ಇದಕ್ಕೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ನಡೆಸಿದೆ. 66,000 ಮಂದಿ ಅರ್ಜಿ ಸಲ್ಲಿಸಿದ್ದು, ಪರೀಕ್ಷೆಗೆ ಒಂದು ವಾರ ಮೊದಲು ಪ್ರವೇಶ ಪತ್ರ ಬಿಡುಗಡೆ ಮಾಡಲಾಗುವುದು. ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಹಾಲ್ ಟಿಕೆಟ್ ಡೌನ್‌ಲೋಡ್ ಮಾಡಿಕೊಳ್ಳಬಹುದು ಎಂದು ಹೇಳಿದ್ದರು. ಆದರೆ ಈಗ ಪರೀಕ್ಷೆ ಮುಂದೂಡಿಕೆ ಮಾಡಿದ್ದು, ಈ ಕುರಿತು ಅಂತಿಮ ಆದೇಶ ಕೆಐಎ ಹೊರಡಿಸಬೇಕಿದೆ.
ಪರೀಕ್ಷೆ ಮುಂದೂಡಿಕೆಗೆ ಒತ್ತಾಯ: 402 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಮುಂದೂಡಿಕೆ ಮಾಡಬೇಕು ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ. ವೈ. ವಿಜಯೇಂದ್ರ ಸಹ ಸರ್ಕಾರವನ್ನು ಒತ್ತಾಯಿಸಿದ್ದರು. 'ಕೆಪಿಎಸ್‌ಸಿ ಪರೀಕ್ಷೆಯ ಗೊಂದಲಗಳ ನಡುವೆ ಹಠಕ್ಕೆ ಬಿದ್ದವರಂತೆ ಪರೀಕ್ಷೆ ನಡೆಸಿದ್ದ ರಾಜ್ಯ ಸರ್ಕಾರ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ನ್ಯೂನತೆ ಬಯಲಾದ ಬೆನ್ನಲ್ಲೇ ಮತ್ತೆ ಮರು ಪರೀಕ್ಷೆಗೆ ಆದೇಶ ಹೊರಡಿಸಿ ಸಾವಿರಾರು ಪರೀಕ್ಷಾರ್ಥಿಗಳ ಶಾಪಕ್ಕೆ ಗುರಿಯಾಗಿತ್ತು. ಇದೀಗ ಅಂತದ್ದೇ ಮತ್ತೊಂದು ಎಡವಟ್ಟು ಮಾಡಲು ಸರ್ಕಾರ ಮುಂದಾಗಿದೆ. ಸೆಪ್ಟೆಂಬರ್ 22ರಂದು ಯುಪಿಎಸ್‌ಸಿ ಹಾಗೂ ಎಸ್‌ಎಸ್‌ಸಿ ಪರೀಕ್ಷೆಗಳ ದಿನಾಂಕ ನಿಗದಿಯಾಗಿದ್ದು, ಅದೇ ದಿನ ಪಿಎಸ್ಐ ಪರೀಕ್ಷೆ ನಡೆಸಲು ಮುಂದಾಗಿರುವ ರಾಜ್ಯ ಸರ್ಕಾರದ ಕ್ರಮ ಉದ್ಯೋಗಾಕಾಂಕ್ಷಿಗಳ ವಿರೋಧಿ ಧೋರಣೆ ಅಲ್ಲದೆ ಬೇರೇನೂ ಅಲ್ಲ' ಎಂದು ಆರೋಪಿಸಿದ್ದರು.
'ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ಸೆಪ್ಟೆಂಬರ್ 14 ಮತ್ತು 15ರಂದು ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೆಪ್ಟೆಂಬರ್ 5 ರಂದೇ ಪ್ರವೇಶ ಪತ್ರವನ್ನು ಡೌನ್ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು. ಆದರೆ ತಾಂತ್ರಿಕ ಕಾರಣಗಳಿಂದ ಕೆಲವು ಅಭ್ಯರ್ಥಿಗಳ ಪರೀಕ್ಷಾ ಕೇಂದ್ರಗಳ ಹಂಚಿಕೆಯಲ್ಲಿಯೂ ವ್ಯತ್ಯಯ ಕಂಡುಬಂದಿದ್ದು ತಾತ್ಕಾಲಿಕವಾಗಿ ಪ್ರವೇಶ ಪತ್ರದ ಡೌನ್ಲೋಡ್ ಪ್ರಕ್ರಿಯೆಯನ್ನೂ ಸಹ ಸ್ಥಗಿತಗೊಳಿಸುವ ಮೂಲಕ ಕೆಪಿಎಸ್‌ಸಿ ಹಾಗೂ ಸರ್ಕಾರದ ಹುಳುಕು ಬಯಲಾಗಿದೆ' ಎಂದು ದೂರಿದ್ದರು.
'ಉದ್ಯೋಗವನ್ನು ಅರಸಿ ಪರೀಕ್ಷೆಗಳನ್ನು ಬರೆಯುವ ಉದ್ಯೋಗಾಕಾಂಕ್ಷಿಗಳನ್ನು ಮತ್ತೊಮ್ಮೆ ಸಂಕಷ್ಟಕ್ಕೆ ದೂಡುವ ಮುನ್ನವೇ ರಾಜ್ಯದ ಸರ್ಕಾರ ಸೆಪ್ಟೆಂಬರ್ 22 ರಂದು ನಡೆಸಲು ನಿರ್ಧರಿಸಿರುವ ಪಿಎಸ್ಐ ಪರೀಕ್ಷೆ ಮುಂದೂಡಿಕೆ ಮಾಡಿ ಹಾಗೂ ಗ್ರೂಪ್ ಬಿ ಹುದ್ದೆಗಳ ಪರೀಕ್ಷೆಯ ಪ್ರವೇಶ ಪತ್ರ ಹಾಗೂ ಪರೀಕ್ಷಾ ಕೇಂದ್ರಗಳ ಗೊಂದಲ ನಿವಾರಿಸಿ ಪರೀಕ್ಷಾರ್ಥಿಗಳಿಗೆ ತೊಂದರೆಗಳಾಗದಂತೆ ಎಚ್ಚರ ವಹಿಸುವಂತೆ ಆಗ್ರಹಿಸುತ್ತೇನೆ' ಎಂದು ವಿಜಯೇಂದ್ರ ಹೇಳಿದ್ದರು.












Click it and Unblock the Notifications