• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಿಎಸ್ಐ ನೇಮಕ ಅಕ್ರಮ: ಮರುಪರೀಕ್ಷೆಗೆ ಹೈಕೋರ್ಟ್ ಬ್ರೇಕ್!

By ಎಸ್ ಎಸ್ ಎಸ್
|
Google Oneindia Kannada News

ಬೆಂಗಳೂರು, ಸೆ.28. ಪೊಲೀಸ್‌ ಸಬ್‌ ಇನ್ಸ್‌ ಪೆಕ್ಟರ್‌ ಹುದ್ದೆಗಳ ನೇಮಕದಲ್ಲಿ ಭಾಗಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಮರು ಪರೀಕ್ಷೆ ನಡೆಸುವ ಸರ್ಕಾರ ಕೈಗೊಂಡಿದ್ದ ತೀರ್ಮಾನಕ್ಕೆ ಹೈಕೋರ್ಟ್ ತಡೆಯೊಡ್ಡಿದೆ. ಹಾಗಾಗಿ ಸದ್ಯಕ್ಕೆ ಮರುಪರೀಕ್ಷೆ ನಡೆಯುವ ಸಾಧ್ಯತೆಗಳು ಇಲ್ಲ. ನೇಮಕ ಕುರಿತ ಅನಿಶ್ಚಿತತೆ ಮುಂದುವರಿಯಲಿದೆ.

ಏ.29ರಂದು ಸರ್ಕಾರ ಕೈಗೊಂಡಿದ್ದ ಮರುಪರೀಕ್ಷೆ ನಿರ್ಧಾರ ರದ್ದು ಕೋರಿ ಹಲವು ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಆಲಿಸಿದ ನ್ಯಾ. ಜಿ.ನರೇಂದರ್‌ ಅವರಿದ್ದ ವಿಭಾಗೀಯಪೀಠ ಬುಧವಾರೆ ಈ ಆದೇಶವನ್ನು ನೀಡಿದೆ.

ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಪೀಠ, ನ್ಯಾಯಾಲಯದ ಮುಂದಿನ ಆದೇಶದವರೆಗೆ ಮರು ಪರೀಕ್ಷೆ ದಿನಾಂಕವನ್ನು ಪ್ರಕಟಿಸಬಾರದು ಎಂದು ಸರ್ಕಾರಕ್ಕೆ ನಿರ್ದೇಶನ ನೀಡಿ ವಿಚಾರಣೆಯನ್ನು ಮುಂದೂಡಿತು.

ಅರ್ಜಿದಾರರ ವಾದವೇನು?

ಅರ್ಜಿದಾರರ ಪರ ವಾದಿಸಿದ ವಕೀಲರು, ಈಗಾಗಲೇ ಪ್ರಕರಣದ ತನಿಖೆ ಪೂರ್ಣಗೊಂಡಿದೆ ಮತ್ತು 32 ಮಂದಿ ಕಳಂಕಿತರು ಎಂದು ಗುರುತಿಸಿ ಅವರ ವಿರುದ್ಧ ಆರೋಪ ಪಟ್ಟಿಯನ್ನೂ ಸಹ ದಾಖಲಿಸಲಾಗಿದೆ. ಹಾಗಾಗಿ ಕಳಂಕಿತರನ್ನು ಮತ್ತು ಕಳಂಕಿತರಲ್ಲದವರನ್ನು ಪ್ರತ್ಯೇಕಿಸಲು ಅವಕಾಶವಿರುವುದರಿಂದ ಮರು ಪರೀಕ್ಷೆ ನಡೆಸುವ ಅವಶ್ಯಕತೆ ಇಲ್ಲ ಎಂದು ಹೇಳಿದರು.

ಅಲ್ಲದೆ, ಈಗಾಗಲೇ ಆಯ್ಕೆಯಾಗಿರುವ ನೂರಾರು ಅಭ್ಯರ್ಥಿಗಳ ಭವಿಷ್ಯಕ್ಕೆ ತೊಂದರೆ ಆಗಲಿವೆ. ಜತೆಗೆ ಎಷ್ಟೊ ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದ್ದು, ಅವರಿಗೆ ಉದ್ಯೋಗ ಲಭಿಸುವುದು ಕಷ್ಟಕರವಾಗಲಿದೆ ಎಂದರು

ಕಳಂಕಿತರನ್ನು ಪ್ರತ್ಯೇಕಿಸಲಾಗದು:

ಅರ್ಜಿದಾರರ ವಾದಕ್ಕೆ ಪ್ರತ್ಯುತ್ತರ ನೀಡಿದ ಸರಕಾರದ ಹೆಚ್ಚುವರಿ ಅಡ್ವೊಕೇಟ್‌ ಪ್ರಕರಣ ವ್ಯಾಪಕವಾಗಿ ಹರಡಿದ್ದು, ನೇಮಕಾತಿ ಪ್ರಾಧಿಕಾರದ ವಿರುದ್ಧವೇ ಅಕ್ರಮವೆಸಗಿರುವ ಆರೋಪವಿರುವ ಹಿನ್ನೆಲೆಯಲ್ಲಿಕಳಂಕಿತ ಹಾಗೂ ಕಳಂಕಿತರಲ್ಲದ ಅಭ್ಯರ್ಥಿಗಳನ್ನು ಪ್ರತ್ಯೇಕಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿವ್ಯಾಪಕ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಕಂಡುಬಂದಿರುವ ಹಿನ್ನೆಲೆಯಲ್ಲಿಮರುಪರೀಕ್ಷೆಯ ತೀರ್ಮಾನ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಜತೆಗೆ ಹಲವು ಅಧಿಕಾರಿಗಳು, ಅಭ್ಯರ್ಥಿಗಳು, ಮಧ್ಯವರ್ತಿಗಳು ಭಾಗಿಯಾಗಿದ್ದಾರೆ. ಪರೀಕ್ಷೆಯಲ್ಲೇ ಅಕ್ರಮವಾಗಿರುವುದರಿಂದ ಸರಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಲು ಮರುಪರೀಕ್ಷೆ ನಡೆಸಲು ನಿರ್ಧರಿಸಿದೆ ಎಂದರು.

ಸರಕಾರ ಏ.29ರಂದು ಪಿಎಸ್‌ಐ ಹುದ್ದೆಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಆದೇಶ ಹೊರಡಿಸಿತ್ತು. ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ (ಪಿಎಸ್‌ಐ) ನೇಮಕಾತಿಗೆ ನಡೆಸಲಾಗಿದ್ದ ಲಿಖಿತ ಪರೀಕ್ಷೆ ರದ್ದುಪಡಿಸಿ, ಮರು ಪರೀಕ್ಷೆ ನಡೆಸುವ ಸಂಬಂಧ ಸರಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಆಯ್ಕೆಯಾಗಿದ್ದ ಕೆಲ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ)ಜು.19ರಂದು ವಜಾಗೊಳಿಸಿತ್ತು. ಅದರ ವಿರುದ್ಧ ಆಯ್ಕೆಯಾಗಿರುವ ಅಭ್ಯರ್ಥಿಗಳು ಮೇಲ್ಮನವಿ ಸಲ್ಲಿಸಿದ್ದಾರೆ.

ಪ್ರಕರಣದ ಹಿನ್ನೆಲೆ:

545 ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು 2022ರ ಜ.21ರಂದು ಅಧಿಸೂಚನೆ ಹೊರಡಿಸಲಾಗಿತ್ತು. 3 ಹಂತದಲ್ಲಿ ನೇಮಕ ಪ್ರಕ್ರಿಯೆ ನಡೆಸಲು ಆದೇಶದಲ್ಲಿ ತಿಳಿಸಲಾಗಿತ್ತು. ಒಟ್ಟು 1.20 ಲಕ್ಷಕ್ಕೂ ಅಧಿಕ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಿದ್ದರು.

ಮೊದಲ ಹಂತದಲ್ಲಿ ದೈಹಿಕ ಪರೀಕ್ಷೆಯ ನಂತರ 54,104 ಅಭ್ಯರ್ಥಿಗಳು ಮುಖ್ಯ ಪರೀಕ್ಷೆಗೆ ಆಯ್ಕೆಯಾದರು. ಬಳಿಕ ಲಿಖಿತ ಪರೀಕ್ಷೆ ನಡೆಯಿತು. ಅದರಲ್ಲಿ ಎರಡು ಪತ್ರಿಕೆ, ಒಂದು 100 ಅಂಕಗಳಿಗೆ ಮತ್ತು ಮತ್ತೊಂದು 150 ಅಂಕಗಳಿಗೆ ಪರೀಕ್ಷೆಯನ್ನು ನಡೆಸಲಾಗಿತ್ತು. ನಂತರ 545 ಅಭ್ಯರ್ಥಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನಾ ಕಾರ್ಯವೂ ನಡೆಯುತ್ತಿದೆ.

ಈ ಮಧ್ಯೆ, ಕಲಬುರಗಿಯ ಜ್ಞಾನಜ್ಯೋತಿ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆಯ ವೇಳೆ ಅಕ್ರಮ ನಡೆದಿದ ಎಂಬ ದೂರು ಕೇಳಿಬಂದಿತು. ಆ ಬಗ್ಗೆ ವ್ಯಾಪಕ ಪ್ರಾಥಮಿಕ ತನಿಖೆ ನಡೆಸಿದೆ ಅದರಲ್ಲಿ ಸತ್ಯಾಂಶವಿರುವುದ ಸಂಗತಿ ಬಯಲಾಯಿತು. ಆ ಸಂಬಂಧ 22 ಅಭ್ಯರ್ಥಿಗಳ ವಿರುದ್ಧ ಎಫ್ ಐಅರ್ ದಾಖಲಾಗಿ ಹಲವು ಅಭ್ಯರ್ಥಿಗಳು ಮತ್ತು ರಾಜಕೀಯ ಮುಖಂಡರು ಬಂಧನಕ್ಕೆ ಒಳಗಾಗಿದ್ದಾರೆ.

ನೇಮಕ ಪ್ರಕ್ರಿಯೆಯಲ್ಲಿ ಕೋಟ್ಯಂತರ ರೂ. ಹಣಕಾಸು ವ್ಯವಹಾರ ಹಾಗೂ ಭಾರಿ ಅಕ್ರಮ ನಡೆದಿರುವುದು ಮೇಲ್ನೋಟಕ್ಕೆ ಸಾಬೀತಾಗಿರುವ ಹಿನ್ನೆಲೆಯಲ್ಲಿ ಸರಕಾರ ಏ.29ರಂದು ನೇಮಕ ಪ್ರಕ್ರಿಯೆಯನ್ನು ರದ್ದುಗೊಳಿಸಿ, ಹೊಸದಾಗಿ ಮರು ಪರೀಕ್ಷೆ ನಡೆಸುವುದಾಗಿ ಆದೇಶಿಸಿದೆ.

English summary
High Court has stayed the government's decision to conduct a re-examination in the background of apparent irregularities in the appointment of police sub-inspectors.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X