PSI recruitment scam; ಮರು ಪರೀಕ್ಷೆಗೆ ಕೋರ್ಟ್ ಆದೇಶ
ಬೆಂಗಳೂರು, ನವೆಂಬರ್ 10: ಕರ್ನಾಟಕದ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ 545 ಪಿಎಸ್‌ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣದಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಮತ್ತೊಮ್ಮೆ ಲಿಖಿತ ಪರೀಕ್ಷೆಯನ್ನು ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ.
ಶುಕ್ರವಾರ ನ್ಯಾಯಮೂರ್ತಿ ದಿನೇಶ್ ಕುಮಾರ್ ನೇತೃತ್ವದ ವಿಭಾಗೀಯ ಪೀಠ ಈ ಕುರಿತು ಆದೇಶ ನೀಡಿದೆ. ರಾಜ್ಯದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಪಿಎಸ್ಐ ನೇಮಕಾತಿ ಲಿಖಿತ ಪರೀಕ್ಷೆ ಹಗರಣ ನಡೆದಿತ್ತು. ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿತ್ತು.

ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ಕಂಡು ಬಂದ ಬಳಿಕ ಸರ್ಕಾರವು ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರೀಕ್ಷೆ ಬರೆದು ಉತ್ತೀರ್ಣಗೊಂಡಿದ್ದ ಅಭ್ಯರ್ಥಿಗಳು ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದರು.
ಲಿಖಿತ ಪರೀಕ್ಷೆ ಬರೆಯುವಾಗ ಬ್ಲೂ ಟುತ್ ಬಳಕೆ, ಓಎಂಆರ್ ಶೀಟ್ ತಿದ್ದಿರುವುದು ಸೇರಿದಂತೆ ಹಲವು ಆರೋಪಗಳು ಈ ಅಕ್ರಮದಲ್ಲಿ ಕೇಳಿ ಬಂದಿವೆ. ಹಗರಣಕ್ಕೆ ಸಂಬಂಧಿಸಿದ ರಾಜ್ಯದ ವಿವಿಧೆಡೆ ದಾಖಲಾಗಿರುವ ಎಫ್ಐಆರ್ ಮತ್ತು ದೂರುಗಳ ಸಂಪೂರ್ಣವಾದ ತನಿಖೆಯನ್ನು ಸಿಐಡಿ ನಡೆಸಿತ್ತು.
ಈ ಅಕ್ರಮ ಪ್ರಕರಣದಲ್ಲಿ ಸಿಐಡಿ ಪೊಲೀಸರು ಪೊಲೀಸ್ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರಾಗಿದ್ದ ಅಮೃತ್ ಪೌಲ್ ಬಂಧಿಸಿದ್ದರು. ಹಗರಣ ಬಯಲಿಗೆ ಬಂದ ಸಂದರ್ಭದಲ್ಲಿ ರಾಜ್ಯದ ಪ್ರತಿಪಕ್ಷವಾಗಿದ್ದ ಕಾಂಗ್ರೆಸ್ ಈ ವಿಚಾರ ಮುಂದಿಟ್ಟುಕೊಂಡು ಬಿಜೆಪಿ ವಿರುದ್ಧ ತೀವ್ರ ಟೀಕೆಗಳನ್ನು ಮಾಡಿತ್ತು.
ಅಭ್ಯರ್ಥಿಗಳಿಗೆ ನೆಮ್ಮದಿ; ಶುಕ್ರವಾರ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿಗಳಾದ ಪಿ. ಎಸ್. ದಿನೇಶ್ ಕುಮಾರ್, ಟಿ. ಜಿ. ಶಿವಶಂಕರೇ ಗೌಡ ಅವರಿದ್ದ ವಿಭಾಗೀಯ ಪೀಠ ಪಿಎಸ್‌ಐ ನೇಮಕಾತಿ ಮರು ಪರೀಕ್ಷೆಗೆ ಆದೇಶ ನೀಡಿದ್ದು, ಅಭ್ಯರ್ಥಿಗಳಿಗೆ ಸಿಹಿಸುದ್ದಿ ಸಿಕ್ಕಿದಂತೆ ಆಗಿದೆ.
545 ಪಿಎಸ್‌ಐಗಳ ನೇಮಕಾತಿಗಾಗಿ ಅಕ್ಟೋಬರ್ 3, 2021ರಂದು ರಾಜ್ಯದ 92 ಕೇಂದ್ರಗಳಲ್ಲಿ ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಒಟ್ಟು 54,289 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ಪರೀಕ್ಷೆ ಬರೆದ 52 ಅಭ್ಯರ್ಥಿಗಳು ಸೇರಿದಂತೆ ಹಗರಣಕ್ಕೆ ಸಂಬಂಧಿಸಿದಂತೆ 110 ಜನರನ್ನು ಹಗರಣದ ತನಿಖೆ ನಡೆಸುತ್ತಿದ್ದ ಸಿಐಡಿ ಬಂಧಿಸಿತ್ತು.
ಕರ್ನಾಟಕ ಹೈಕೋರ್ಟ್‌ನಲ್ಲಿ ಅರ್ಜಿಯ ವಿಚಾರಣೆ ನಡೆಯುವಾಗ ಸರ್ಕಾರ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹೇಳಿತ್ತು. ಕೋರ್ಟ್ ಈ ಕುರಿತು ಮರು ಪರಿಶೀಲನೆ ನಡೆಸುವಂತೆ ಸೂಚಿಸಿತ್ತು.
ಕರ್ನಾಟಕದ ಪೊಲೀಸ್ ಇಲಾಖೆ ಪಿಎಸ್‌ಐ ನೇಮಕಾತಿ ಹಗರಣದಲ್ಲಿ ಭಾಗಿಯಾದ 52 ಅಭ್ಯರ್ಥಿಗಳನ್ನು ಶಾಶ್ವತವಾಗಿ ಡಿಬಾರ್ ಮಾಡಿದೆ. 545 ಹುದ್ದೆಗಳ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯಲ್ಲಿ ಅಕ್ರಮವೆಸಗಿ ಅಪರಾಧ ಪ್ರಕರಣದಲ್ಲಿ ದಸ್ತಗಿರಿಯಾಗಿರುವ ಅಭ್ಯರ್ಥಿಗಳನ್ನು ಪೊಲೀಸ್ ಇಲಾಖೆಯು ನಡೆಸುವ ಎಲ್ಲಾ ಪರೀಕ್ಷೆಗಳಲ್ಲಿ ಭಾಗವಹಿಸದಂತೆ ಶಾಶ್ವತವಾಗಿ ಡಿಬಾರ್ ಮಾಡಲಾಗಿದೆ.
545 (ಪುರುಷ & ಮಹಿಳಾ) ಹಾಗೂ ಸೇವಾನಿರತ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದಿನಾಂಕ 03/10/2021 ರಂದು ಬೆಳಗ್ಗೆ 11 ರಿಂದ 12.30 ರವರೆಗೆ ಪತ್ರಿಕೆ-1ನ್ನು ಹಾಗೂ ಮಧ್ಯಾಹ್ನ 3 ರಿಂದ 4.30 ರವರೆಗೆ ಪತ್ರಿಕೆ-2ರ ಲಿಖಿತ ಪರೀಕ್ಷೆಗಳನ್ನು ನಡೆಸಲಾಗಿತ್ತು. ಈ ಲಿಖಿತ ಪರೀಕ್ಷೆಗಳಲ್ಲಿ ಅಕ್ರಮ ನಡೆದಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಸರ್ಕಾರ ನೇಮಕಾತಿಯ ಲಿಖಿತ ಪರೀಕ್ಷೆಗಳಲ್ಲಿ ನಡೆದಿರುವ ಅಕ್ರಮಗಳ ಕುರಿತು ತನಿಖೆ ನಡೆಸುವಂತೆ ಸಿಐಡಿಗೆ ಆದೇಶಿಸಿತ್ತು.












Click it and Unblock the Notifications