ಪಿಎಸ್‌ಐ ನೇಮಕಾತಿ ಹಗರಣ; ಮರು ಪರೀಕ್ಷೆ ಸಾಧ್ಯವಿಲ್ಲ ಎಂದ ಸರ್ಕಾರ
ಬೆಂಗಳೂರು, ಜುಲೈ 06; ಪೊಲೀಸ್ ಸಬ್ ಇನ್‌ಸ್ಪೆಕ್ಟರ್ (ಪಿಎಸ್‌ಐ) ನೇಮಕ ಅಕ್ರಮಕ್ಕೆ ಸಂಬಂಧಿಸಿದಂತೆ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ. ಇದರಿಂದಾಗಿ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಜತೆಗೆ ಸದ್ಯಕ್ಕೆ ನೇಮಕ ಪತ್ರ ಸಿಗಲಿದೆ ಎಂದು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭ್ಯರ್ಥಿಗಳಿಗೆ ನಿರಾಸೆಯಾಗಿದೆ.
ಸರ್ಕಾರದ ಈ ನಿರ್ಧಾರದಿಂದ ಸದ್ಯಕ್ಕೆ ಬಿಕ್ಕಟ್ಟು ಬಗೆಹರಿಯುವ ಲಕ್ಷಣಗಳು ಕಾಣಿಸದಂತಾಗಿದೆ. ಮರುಪರೀಕ್ಷೆ ನಡೆಸಲು ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಆಯ್ಕೆಯಾಗಿದ್ದ ನೂರಕ್ಕೂ ಅಧಿಕ ಅಭ್ಯರ್ಥಿಗಳು ಸಲ್ಲಿಸಿದ್ದ ಅರ್ಜಿಗಳನ್ನು ನ್ಯಾಯಮೂರ್ತಿ ಜಿ. ನರೇಂದರ್ ಹಾಗೂ ನ್ಯಾಯಮೂರ್ತಿ ಸಿ. ಎಂ. ಪೂಣಚ್ಚ ಅವರಿದ್ದ ಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರವಾಗಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಾಗಿ, ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲಿ ಆರೋಪಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗಷ್ಟೇ ಪರೀಕ್ಷೆ ನಡೆಸಲಾಗದು. ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ನಡೆದ ಚರ್ಚೆಯ ವರದಿಯನ್ನು ನ್ಯಾಯಾಲಯಕ್ಕೆ ಗೌಪ್ಯವಾಗಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿ, ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬುದಕ್ಕೆ ಕಾರಣಗಳನ್ನೊಳಗೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದರು. ಸರ್ಕಾರದ ವರದಿ ಪರಿಶೀಲಿಸಿದ ಪೀಠ, ಹಾಗಿದ್ದರೆ ಅರ್ಜಿಗಳನ್ನು ಮೆರಿಟ್ ಆಧಾರದಲ್ಲಿ ಜು.10ಕ್ಕೆ ವಿಚಾರಣೆ ಮುಂದೂಡಿತು.
ಹಿಂದಿನ ಆದೇಶವೇನು?; ಅರ್ಜಿಯನ್ನು ಜೂ.15ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಚಾರ್ಜ್‌ಶೀಟ್‌ನಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಬಹುದೇ?, ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ? ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ಕೋರ್ಟ್‌ಗೆ ತಿಳಿಸುವಂತೆ ಎಜಿ ಅವರಿಗೆ ಸೂಚಿಸಿತ್ತು. ನ್ಯಾಯಾಲಯದ ನಿರ್ದೇಶನದಂತೆ ಸರ್ಕಾರದಿಂದ ಮಾಹಿತಿ ಪಡೆದು ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ಬುಧವಾರ ನ್ಯಾಯಪೀಠಕ್ಕೆ ಸಲ್ಲಿಸಲಾಯಿತು.
ಪ್ರಕರಣದ ಹಿನ್ನೆಲೆ: 545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವುದಾಗಿ 2022ರ ಏ.27ರಂದು ಅಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು. ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಕೆಲ ಅಭ್ಯರ್ಥಿಗಳು ಕರ್ನಾಟಕ ಆಡಳಿತಾತ್ಮಕ ನ್ಯಾಯಮಂಡಳಿ (ಕೆಎಟಿ) ಮೆಟ್ಟಿಲೇರಿದ್ದರು.
ಆ ಅರ್ಜಿಗಳನ್ನು ಕೆಎಟಿ 2022ರ ಜು.19ರಂದು ವಜಾಗೊಳಿಸಿತ್ತು. ಇದರಿಂದ, ಅರ್ಜಿದಾರರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಅರ್ಜಿಯನ್ನು 2022ರ ಸೆ.28ರಂದು ವಿಚಾರಣೆ ನಡೆಸಿದ್ದ ಹೈಕೋರ್ಟ್, ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತ್ತು.












Click it and Unblock the Notifications