ಪಿಎಸ್‌ಐ ಹಗರಣ ಮರು ಪರೀಕ್ಷೆ; ಹೈಕೋರ್ಟ್‌ನಲ್ಲಿ ಜುಲೈ 12ಕ್ಕೆ ವಿಚಾರಣೆ
ಬೆಂಗಳೂರು, ಜುಲೈ 11; ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದ್ದಾಗ ಬೆಳಕಿಗೆ ಬಂದಿರುವ ಪಿಎಸ್‌ಐ ನೇಮಕಾತಿ ಹಗರಣ ಇನ್ನೂ ತಾರ್ಕಿಕ ಅಂತ್ಯ ಕಂಡಿಲ್ಲ. ಹಗರಣದ ಹಿನ್ನೆಲೆಯಲ್ಲಿ ಹೊಸದಾಗಿ ಲಿಖಿತ ಪರೀಕ್ಷೆ ನಡೆಸಲು ನಿಕಪೂಟರ್ವ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದು ಕೋರಿ ಹಲವು ಅಭ್ಯರ್ಥಿಗಳು ಕರ್ನಾಟಕ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಅಭ್ಯರ್ಥಿಗಳು ಸಲ್ಲಿಕೆ ಮಾಡಿರುವ ಅರ್ಜಿಗಳ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಜುಲೈ 12ಕ್ಕೆ ಮುಂದೂಡಿದೆ. ಮರು ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿರುವ ಆದೇಶ ರದ್ದುಪಡಿಸಬೇಕು. ಕಳಂಕಿತ ಮತ್ತು ಕಳಂಕರಹಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಲಾಗಿದೆ.

ಲಿಖಿತ ಪರೀಕ್ಷೆ ಬರೆದು ಆಯ್ಕೆಯಾಗಿದ್ದ ನೂರಾರು ಅಭ್ಯರ್ಥಿಗಳು ಸಲ್ಲಿಸಿರುವ ಅರ್ಜಿಗಳ ವಿಚಾರಣೆ ನ್ಯಾಯಮೂರ್ತಿ ಜಿ. ನರೇಂದರ್ ನೇತೃತ್ವದ ವಿಭಾಗೀಯ ಪೀಠದ ಮುಂದೆ ಸೋಮವಾರ ವಿಚಾರಣೆಗೆ ಬಂದಿದ್ದವು.
ಆಕ್ಷೇಪಣೆ ಸಲ್ಲಿಕೆ; ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ರೊಬೆನ್ ಜಾಕಬ್ ಹಾಜರಾಗಿ, ಪರೀಕ್ಷೆಯಲ್ಲಿ ಆಯ್ಕೆಯಾಗಿರುವ ಯಾವುದೇ ಆರೋಪಕ್ಕೆ ಗುರಿಯಾಗದ ಅಭ್ಯರ್ಥಿಗಳಿಗೆ ಮತ್ತೊಂದು ಪರೀಕ್ಷೆ ನಡೆಸದಿರಲು ಕೈಗೊಂಡಿರುವ ನಿರ್ಧಾರಕ್ಕೆ ಸಂಬಂಧಿಸಿದಂತೆ ಪೂರಕವಾಗಿ ಕಾರಣಗಳನ್ನು ವಿವರಿಸಿ ನ್ಯಾಯಾಲಯಕ್ಕೆ ಆಕ್ಷೇಪಣೆ ಸಲ್ಲಿಸಲಾಗಿದೆ ಎಂದು ಮಾಹಿತಿ ನೀಡಿದರು.
ಅರ್ಜಿದಾರರ ಪರ ವಕೀಲರು, ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತಮ್ಮ ಕಕ್ಷಿದಾರರ ವಿರುದ್ಧ ರಾಜ್ಯದ ಯಾವುದೇ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿಲ್ಲ. ಆರೋಪಿಗಳ ವಿರುದ್ಧ ಯಾವೆಲ್ಲ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ. ಅವುಗಳ ಸ್ಥಿತಿಗತಿ ಕುರಿತ ಮಾಹಿತಿ ಒಳಗೊಂಡ ಪ್ರಮಾಣಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ ಎಂದು ತಿಳಿಸಿದರು
ಈ ಹೇಳಿಕೆ ದಾಖಲಿಸಿಕೊಂಡ ನ್ಯಾಯಪೀಠ, ಉಭಯ ಪಕ್ಷಕಾರರರು ಸಲ್ಲಿಸಿರುವ ದಾಖಲೆಗಳನ್ನು ಪರಸ್ಪರ ಹಂಚಿಕೊಳ್ಳಬೇಕು ಎಂದು ನಿರ್ದೇಶಿಸಿ ವಿಚಾರಣೆಯನ್ನು ಜುಲೈ 12ಕ್ಕೆ ಮುಂದೂಡಿತು. ಜುಲೈ 4ರಂದು ಕರ್ನಾಟಕ ಸರ್ಕಾರ ಹಗರಣದ ಆರೋಪ ಪಟ್ಟಿಯಲ್ಲಿ ಹೆಸರಿರುವ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಅಭ್ಯರ್ಥಿಗಳಿಗಷ್ಟೇ ಮರು ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ಗೆ ತಿಳಿಸಿತ್ತು.
ಈ ಅರ್ಜಿ ವಿಚಾರಣೆ ಸಂದರ್ಭದಲ್ಲಿ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಹಾಜರಾಗಿ, ಪಿಎಸ್‌ಐ ಪರೀಕ್ಷೆಯಲ್ಲಿ ಉತ್ತೀರ್ಣರಾದವರಲ್ಲಿ ಆರೋಪಿತ ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದವರಿಗಷ್ಟೇ ಪರೀಕ್ಷೆ ನಡೆಸಲಾಗದು ಎಂದು ಹೇಳಿದ್ದರು.
ಈ ಸಂಬಂಧ ಸರ್ಕಾರದ ಮಟ್ಟದಲ್ಲಿ ನಡೆದ ಚರ್ಚೆಯ ವರದಿಯನ್ನು ನ್ಯಾಯಾಲಯಕ್ಕೆ ಗೌಪ್ಯವಾಗಿ ಸಲ್ಲಿಸಲಾಗುತ್ತಿದೆ ಎಂದು ತಿಳಿಸಿ, ಯಾವ ಕಾರಣಕ್ಕೆ ಪರೀಕ್ಷೆ ನಡೆಸಲು ಸಾಧ್ಯವಿಲ್ಲ ಎಂಬುದಕ್ಕೆ ಕಾರಣಗಳನ್ನೊಳಗೊಂಡ ವರದಿಯನ್ನು ಮುಚ್ಚಿದ ಲಕೋಟೆಯಲ್ಲಿ ನ್ಯಾಯಪೀಠಕ್ಕೆ ಸಲ್ಲಿಸಿದ್ದರು.
ಜೂನ್ 15ರಂದು ಅರ್ಜಿಯ ವಿಚಾರಣೆ ಸಮಯದಲ್ಲಿ ಹೈಕೋರ್ಟ್, 545 ಪಿಎಸ್‌ಐ ಹುದ್ದೆಗಳಿಗೆ ಆಯ್ಕೆಯಾಗಿದ್ದ ಅಭ್ಯರ್ಥಿಗಳಲ್ಲಿ ಚಾರ್ಜ್‌ಶೀಟ್‌ನಲ್ಲಿ ಹೆಸರಿರುವವರನ್ನು ಹೊರತುಪಡಿಸಿ ಉಳಿದವರಿಗೆ ಮಾತ್ರ ಪರೀಕ್ಷೆ ನಡೆಸಬಹುದೇ?, ಆ ಪರೀಕ್ಷೆಯ ಫಲಿತಾಂಶದ ಆಧಾರದಲ್ಲಿ ಅವರನ್ನು ಹುದ್ದೆಗೆ ಪರಿಗಣಿಸಲು ಸಾಧ್ಯವೇ? ಎಂಬ ಬಗ್ಗೆ ಸರ್ಕಾರದಿಂದ ಮಾಹಿತಿ ಪಡೆದು ಕೋರ್ಟ್‌ಗೆ ತಿಳಿಸುವಂತೆ ಎಜಿಗೆ ಸೂಚಿಸಿತ್ತು.
545 ಪಿಎಸ್‌ಐ ಹುದ್ದೆಗಳ ನೇಮಕಾತಿಗೆ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮದ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಮರುಪರೀಕ್ಷೆ ನಡೆಸುವುದಾಗಿ 2022ರ ಏ.29ರಂದು ಅಂದಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತು. ಈ ಆದೇಶ ರದ್ದುಪಡಿಸಬೇಕು, ಕಳಂಕರಹಿತ ಮತ್ತು ಕಳಂಕಿತ ಅಭ್ಯರ್ಥಿಗಳನ್ನು ಪ್ರತ್ಯೇಕಿಸಿ ಹಿಂದಿನ ಅಧಿಸೂಚನೆ ಪ್ರಕಾರವೇ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ನೇಮಕಾತಿ ಆದೇಶ ನೀಡಲು ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಅಭ್ಯರ್ಥಿಗಳು ಅರ್ಜಿಯಲ್ಲಿ ಕೋರಿದ್ದಾರೆ.












Click it and Unblock the Notifications