KPSC ಮರುಪರೀಕ್ಷೆ: ಆರ್.ಅಶೋಕ್ ಕೊಟ್ರು ಸರ್ಕಾರಕ್ಕೆ ಮಹತ್ವದ ಸಲಹೆ
ಇತ್ತೀಚೆಗೆ ನಡೆದ KPSC ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ ಲೋಪಗಳು ಕಂಡುಬಂದ ಹಿನ್ನೆಲೆ ಮರುಪರೀಕ್ಷೆ ನಡೆಸುವಂತೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ. ಜೊತೆಗೆ ಕರ್ತವ್ಯ ಲೋಪ ಎಸಗಿದ ಅಧಿಕಾರಿಗಳನ್ನು ಸೇವೆಯಿಂದ ಅಮಾನತು ಮಾಡಲಾಗಿದೆ. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಕೆಪಿಎಸ್‌ಸಿ ಪರೀಕ್ಷೆಯಲ್ಲಿ ಕಾಂಗ್ರೆಸ್ ಸರ್ಕಾರಕ್ಕೆ ಕೆಟ್ಟ ಮೇಲೆ ಬುದ್ಧಿ ಬಂತು ಎಂದು ಟೀಕಿಸಿದ್ದಾರೆ.
ʼಕೆಪಿಎಸ್‌ಸಿ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯಲ್ಲಿ ಆಗಿರುವ ಘೋರ ಲೋಪಗಳನ್ನ ಒಪ್ಪಿಕೊಂಡು ಮರುಪರೀಕ್ಷೆ ನಡೆಸಲು ಸರ್ಕಾರ ಕೈಗೊಂಡಿರುವ ನಿರ್ಧಾರ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ಲಕ್ಷಾಂತರ ಉದ್ಯೋಗಾಕಾಂಕ್ಷಿಗಳು ಹಾಗು ಪ್ರತಿಪಕ್ಷಗಳ ಹೋರಾಟಕ್ಕೆ ಸಿಕ್ಕ ಜಯವಾಗಿದೆ ಎಂದಿದ್ದಾರೆ.

ʼಕೆಟ್ಟ ಮೇಲೆ ಬುದ್ಧಿ ಬಂತು ಎಂಬಂತೆ ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಮರುಪರೀಕ್ಷೆಯನ್ನು ಸಮರ್ಪಕವಾಗಿ ನಡೆಸಲು ಕ್ರಮ ಕೈಗೊಳ್ಳಬೇಕು. ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತೊಂದರೆಯಾಗದಂತೆ ಸೂಕ್ತ ಪರೀಕ್ಷಾ ದಿನಾಂಕ ನಿಗದಿ ಮಾಡುವುದು, ಅಭ್ಯರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ಪರೀಕ್ಷಾ ಕೇಂದ್ರಗಳ ಹಂಚಿಕೆ ಮಾಡುವುದು, ಪ್ರಶ್ನೆ ಪತ್ರಿಕೆ ರಚನೆ, ಕನ್ನಡಕ್ಕೆ ತರ್ಜುಮೆ ಸೇರಿದಂತೆ ಎಲ್ಲ ಅಂಶಗಳನ್ನ ಪರಿಗಣಿಸಿ ಈ ಹಿಂದೆ ಆದ ತಪ್ಪುಗಳು, ಲೋಪದೋಷಗಳು ಮರುಕಳಿಸದಂತೆ ಅತ್ಯಂತ ಜಾಗರೂಕತೆಯಿಂದ, ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಬೇಕು ಎಂದು ಕವಿಮಾತು ಹೇಳಿದ್ದಾರೆ.
ಈಗ ನಡೆದಿರುವ ಪರೀಕ್ಷೆಯಲ್ಲಿನ ಎಡವಟ್ಟುಗಳಿಗೆ ಕಾರಣರಾದ ಅಧಿಕಾರಿಗಳನ್ನ ಮತ್ತು ಸಿಬ್ಬಂದಿಗಳನ್ನ ಮುಲಾಜಿಲ್ಲದೆ ಕಪ್ಪುಪಟ್ಟಿಗೆ ಸೇರಿಸಬೇಕು. ಮುಂದೆ ಯಾವ ಸ್ಪರ್ಧಾತ್ಮಕ ಪರೀಕ್ಷೆಗಳ ಕರ್ತವ್ಯಕ್ಕೂ ಅವರು ನಿಯೋಜನೆಯಾಗದಂತೆ ಬ್ಲಾಕ್ ಲಿಸ್ಟ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಕೆಪಿಎಸ್‌ಸಿ ಪರೀಕ್ಷೆ ಲಕ್ಷಾಂತರ ಯುವ ಉದ್ಯೋಗಾಕಾಂಕ್ಷಿಗಳ ಭವಿಷ್ಯದ ಪ್ರಶ್ನೆ ಆಗಿರುವುದರಿಂದ ಅವರ ಬದುಕಿನ ಜೊತೆ ಚೆಲ್ಲಾಟವಾಡದೆ, ಇದನ್ನ ಅತ್ಯಂತ ಗಂಭೀರವಾಗಿ ಪರಿಗಣಿಸಿ ಪರೀಕ್ಷೆ ಸುವ್ಯವಸ್ಥಿತವಾಗಿ, ಅಚ್ಚುಕಟ್ಟಾಗಿ ನಡೆಯುವಂತೆ ಎಚ್ಚರ ವಹಿಸಬೇಕು ಎಂದಿದ್ದಾರೆ.
ಕೆಪಿಎಸ್‌ಸಿ ಪರೀಕ್ಷೆ ಕಡೆಗೆ ಈಗ ಇಡೀ ದೇಶವೇ ಎದುರು ನೋಡುತ್ತಿದ್ದು, ಇದು ಈಗ ಕೇವಲ ಅಭ್ಯರ್ಥಿಗಳ ಪರೀಕ್ಷೆಯಾಗಿ ಉಳಿದಿಲ್ಲ. ಇದು ಇಡೀ ಕಾಂಗ್ರೆಸ್ ಸರ್ಕಾರಕ್ಕೆ ಒಂದು ಸತ್ವ ಪರೀಕ್ಷೆಯಾಗಿದೆ ಎಂದು ಹೇಳಿದ್ದಾರೆ.

ಕರ್ನಾಟಕ ಲೋಕಸೇವಾ ಆಯೋಗವು (ಕೆಪಿಎಸ್‌ಸಿ) ಆಗಸ್ಟ್ 27ರಂದು ನಡೆಸಿದ ಗೆಜೆಟೆಡ್ ಪ್ರೊಬೇಷನರ್ಸ್ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಭಾರೀ ಚರ್ಚೆಗೆ ಕಾರಣವಾಗಿತ್ತು. ಪ್ರಶ್ನೆಪತ್ರಿಕೆಯಲ್ಲಿ ಕನ್ನಡ ಭಾಷೆಯನ್ನು ತಪ್ಪಾಗಿ ಬಳಕೆ ಮಾಡಲಾಗಿದೆ ಎಂದು ಹೇಳಲಾಗಿತ್ತು. ಹಾಗಾಗಿ, ಕೆಪಿಎಸ್‌ಸಿಯಲ್ಲಿ ಬದಲಾವಣೆ ಬೇಕು, ಕೆಪಿಎಸ್‌ಸಿ ಮರು ಪರೀಕ್ಷೆಯನ್ನು ನಡೆಸಬೇಕು ಎಂಬ ಕೂಗು ಜೋರಾಗಿತ್ತು. ಪ್ರಶ್ನೆಪತ್ರಿಕೆಯಲ್ಲಿನ ತಪ್ಪಾದ ಕನ್ನಡವನ್ನು ಖಂಡಿಸಿ ಇಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಕೂಡ ಹಮ್ಮಿಕೊಳ್ಳಲಾಗಿತ್ತು.
ಈ ಬಗ್ಗೆ ಇಂದು ಸಿಎಂ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿ, ಮುಂದಿನ ಎರಡು ತಿಂಗಳೊಳಗೆ ಮರುಪರೀಕ್ಷೆ ನಡೆಸುವಂತೆ ಆದೇಶಿಸಿದ್ದಾರೆ. ಕೆಪಿಎಸ್‌ಸಿ ಕಳೆದ ವಾರ ನಡೆಸಿದ್ದ ಕನ್ನಡಕ್ಕೆ ಅನುವಾದ ಮಾಡಲ್ಪಟ್ಟ ಪ್ರಶ್ನೆಗಳು ಅಸಮರ್ಪಕವಾಗಿದ್ದವೆಂಬ ವಿಚಾರ ನನ್ನ ಗಮನಕ್ಕೆ ಬಂದ ತಕ್ಷಣ, ಪರೀಕ್ಷಾರ್ಥಿಗಳಿಗೆ ಅನ್ಯಾಯವಾಗಬಾರದೆಂಬ ಉದ್ದೇಶದಿಂದ ಮುಂದಿನ ಎರಡು ತಿಂಗಳುಗಳ ಒಳಗೆ ಮರುಪರೀಕ್ಷೆ ಮಾಡುವಂತೆ ಕೆಪಿಎಸ್‌ಸಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ
ಕರ್ತವ್ಯ ಲೋಪವೆಸಗಿದ ಅಧಿಕಾರಿಗಳನ್ನು ಸೇವೆಯನ್ನು ಅಮಾನತು ಮಾಡಲಾಗಿದೆ. ಮುಂಬರುವ ಪರೀಕ್ಷೆಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ, ಸಮರ್ಪಕವಾಗಿ ನಡೆಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು. ನಾವು ನೇಮಕಾತಿ ಪ್ರಕ್ರಿಯೆಗಳ ಸಮಗ್ರತೆ ಮತ್ತು ನಂಬಿಕಾರ್ಹತೆಯನ್ನು ಎತ್ತಿಹಿಡಿದು, ಪರೀಕ್ಷಾರ್ಥಿಗಳ ಹಿತರಕ್ಷಿಸಲು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.












Click it and Unblock the Notifications