15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಬರೆಯಿಸಿ...
ಬೆಂಗಳೂರು, ನವೆಂಬರ್ 09: ವಕ್ಫ್ ಮಂಡಳಿಯ ಭೂಮಿ, ಆಸ್ತಿಗಳನ್ನು ಅಕ್ರಮ ಕಬಳಿಕೆಯ ವಿಚಾರ ಹೊಸ ಹೊಸ ರೂಪ ಪಡೆಯುತ್ತಿದೆ. ಕರ್ನಾಟಕ ಬಿಜೆಪಿಯು ಕಾಂಗ್ರೆಸ್ ಸರ್ಕಾರ ಹಾಗೂ ಕೈ ನಾಯಕರ ಮೇಲೆ ಮುಗಿಬಿದ್ದಿದೆ. ಇದೀಗ 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.
ನಗರದಲ್ಲಿ ಈ ಕುರಿತು ಶನಿವಾರ ಬಿಜೆಪಿ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ರಾಜ್ಯ ವಕ್ಫ್ ಮಂಡಳಿ ಬಡವರು, ರೈತರ ಭೂಮಿ ಕಬಳಿಸುತ್ತಿರುವುದರಿಂದ ಎಲ್ಲರೂ ಭೀತಿಗೊಳಗಾಗಿದ್ದಾರೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಈ ಅಕ್ರಮದ ಇದರ ನೇತೃತ್ವ ವಹಿಸಿದ್ದಾರೆ ಎಂದು ಅವರು ದೂರಿದರು.

ವಕ್ಪ್ ಆಸ್ತಿ, ಪಹಣಿ ನಮೂದು ವಿಚಾರವಾಗಿ ರೈತರಿಗೆ ನೋಟಿಸ್ ನೀಡಲಾಗಿದೆ. ಇದರಿಂದ ರೈತರು ಆತ್ಮಹತ್ಯೆ ಹಾದಿ ಹಿಡಿದಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಇದರ ಬೆನ್ನಲ್ಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೋಟಿಸ್ ವಾಪಸ್ ಪಡೆಯಲು ಸೂಚಿಸಲಾಗಿದೆ ಎಂದು ಸ್ಪಷ್ಟೀಕರಣ ನೀಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಆರ್.ಅಶೋಕ್ ಅವರು, ಮುಖ್ಯ ಕಾರ್ಯದರ್ಶಿ ಭೂಮಿ ವಶಪಡಿಸಿಕೊಳ್ಳಲು ಲಿಖಿತ ಸೂಚನೆ ನೀಡಿದ್ದಾರೆ. ಈ ಸತ್ಯ ಮರೆಮಾಚಲು ಮುಖ್ಯಮಂತ್ರಿ ಅವರು ನೋಟಿಸ್ ವಾಪಸ್ ಬಗ್ಗೆ ಸುಳ್ಳು ಹೇಳಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದರು.
ಮತಾಂತರಕ್ಕೆ ಟಿಪ್ಪು ಬಳಕೆಯಂತೆ ಈಗ ವಕ್ಫ ಬಳಕೆ
ಟಿಪ್ಪು ಸುಲ್ತಾನ್ ಖಡ್ಗ ಬಳಸಿ ಅಮಾಯಕರನ್ನು ಮತಾಂತರ ಮಾಡಿದ್ದ. ಅದೇ ರೀತಿ ಈಗ ಕಾಂಗ್ರೆಸ್ ವಕ್ಫ್ ಬಳಸಿಕೊಂಡು ಜನರ ಭೂಮಿ ಕಬಳಿಸುತ್ತಿದೆ. ಸರ್.ಎಂ.ವಿಶ್ವೇಶ್ವರಯ್ಯನವರು ಓದಿದ ಶಾಲೆಯನ್ನೂ ವಕ್ಫ್ ಆಸ್ತಿ ಎಂದು ಉಲ್ಲೇಖಿಸಲಾಗಿದೆ. 15 ದಿನಗಳಲ್ಲಿ ಎಲ್ಲ ಆಸ್ತಿಗಳನ್ನು ವಕ್ಫ್ ಮಂಡಳಿಗೆ ಬರೆಯಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಇನ್ನೂ ನಮ್ಮ ಬಿಜೆಪಿ ಸಂಸದ ಬಸವರಾಜ ಬೊಮ್ಮಾಯಿ ಅವರು ಕಬಳಿಕೆ ಮಾಡಿದ ಭೂಮಿ ವಾಪಸ್ ಪಡೆಯಿರಿ ಎಂದು ಹೇಳಿದ್ದಾರೆಯೇ ಹೊರತು, ರೈತರ ಜಮೀನು ಪಡೆಯಲು ಹೇಳಿಲ್ಲ. ಆದರೆ ಮಂಡಳಿಯ ಸದಸ್ಯರು ವಿಧಾನಸೌಧ ನಮ್ಮದು ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಕೋಲಾರದಲ್ಲಿ ವಾಲ್ಮೀಕಿ ಭವನ ನಿರ್ಮಿಸಲಾಗಿತ್ತು. ಈಗ ಅದರ ಮೇಲೆ ಮಸೀದಿ ಕಟ್ಟಿಸಿ ಕಾಂಪೌಂಡ್ ನಿರ್ಮಿಸಲಾಗಿದೆ. ಇಂತಹ ಅಕ್ರಮದ ವಿರುದ್ಧ ಬಿಜೆಪಿ ಹೋರಾಟ ಮಾಡುತ್ತಿದೆ ಎಂದು ವಿವರಿಸಿದರು.
ಬಿಜೆಪಿ ಮೇಲೆ ರಾಜಕೀಯ ಪ್ರೇರಿತ ಸುಳ್ಳು ಆರೋಪ
ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲದಕ್ಕೂ ಎಸ್‌ಐಟಿ ರಚಿಸುತ್ತಿದೆ. ಸಿದ್ದರಾಮಯ್ಯನವರ ಹಗರಣದ ವಿರುದ್ಧ ಕೆಂಪಣ್ಣ ಆಯೋಗ ರಚಿಸಲಾಗಿತ್ತು. ಅದರ ವರದಿ ಬಂದೇ ಇಲ್ಲ. ಕೋವಿಡ್ ಸಮಯದಲ್ಲಿ ಬಿ.ಎಸ್.ಯಡಿಯೂರಪ್ಪನವರು ಅಧಿಕಾರಿಗಳು ಹೇಳಿದಂತೆ ಖರೀದಿ ಮಾಡಲು ಸೂಚಿಸಿದ್ದಾರೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ, ಇದು ರಾಜಕೀಯ ಪ್ರೇರಿತ ಸುಳ್ಳು ಪ್ರಕರಣ. ಖರೀದಿ ಮಾಡುವ ಅಧಿಕಾರ ಮುಖ್ಯಮಂತ್ರಿಗಿಲ್ಲ. ಯಾವ ಕಂಪನಿಯಿಂದ, ಎಲ್ಲಿಂದ ಖರೀದಿ ಮಾಡಬೇಕೆಂದು ಆಗ ಆರೋಗ್ಯ ಅಧಿಕಾರಿಗಳೇ ತೀರ್ಮಾನಿಸಿದ್ದಾರೆ. ಈ ಪ್ರಕರಣ ಸರ್ಕಾರಕ್ಕೆ ತಿರುಗು ಬಾಣವಾಗಲಿದೆ ಎಂದು ಅವರು ಎಚ್ಚರಿಸಿದರು.
ಬಿಜೆಪಿ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ. ನಾವು ಆಡಳಿತ ಪಕ್ಷದಲ್ಲಿದ್ದಾಗ ಸಮಾಧಾನ ಚಿತ್ತದಿಂದ ಎಲ್ಲವನ್ನೂ ನಿರ್ವಹಿಸುತ್ತಿದ್ದೆವು. ಆದರೆ ಈ ಸರ್ಕಾರ ಎಲ್ಲಕ್ಕೂ ಹಿಂದೆ ಬಿಜೆಪಿ ಸರ್ಕಾರ, ಬಿಜೆಪಿ ನಾಯಕರೇ ಕಾರಣ ಎಂದು ಅಪಾದಿಸುತ್ತಿದೆ ಎಂದು ಹೇಳಿದರು.












Click it and Unblock the Notifications