ಮುಡಾ ಕೇಸ್‌ನಲ್ಲಿ ಸಿಎಂ ಸಿದ್ದರಾಮಯ್ಯಗೆ ಕ್ಲೀನ್ ಚಿಟ್: ಆರ್.ಅಶೋಕ್ ವ್ಯಂಗ್ಯ
ಬೆಂಗಳೂರು, ಫೆಬ್ರವರಿ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ್ದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ)ದಲ್ಲಿನ ನಿವೇಶನ ಹಂಚಿಕೆ ಹಗರಣ ಪ್ರಕರಣದ ತನಿಖೆಯನ್ನು ಮೈಸೂರು ಲೋಕಾಯುಕ್ತ ಪೊಲೀಸರು ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇತರೆ ಆರೋಪಿಗಳಿಗೆ ಮೈಸೂರು ಲೋಕಾಯುಕ್ತ ಕ್ಲೀಚ್ ಚಿಟ್ ನೀಡಿದೆ ಎನ್ನುವ ಮಾಹಿತಿ ಬಹಿರಂಗಗೊಂಡಿದೆ.
ಮೈಸೂರು ಲೋಕಾಯುಕ್ತ ಪೊಲೀಸರು ತನಿಖೆ ಪೂರ್ಣಗೊಳಿಸಿ ವರದಿ ಸಿದ್ಧಪಡಿಸಿದ್ದು, ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವ ಮುನ್ನ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ನೋಟಿಸ್ ನೀಡಿದ್ದಾರೆ ಎನ್ನಲಾಗಿದೆ. ಇದು ತನಿಖೆಗೆ ಅರ್ಹವಲ್ಲದ ಪ್ರಕರಣ ಎಂದು ಲೋಕಾಯುಕ್ತ ಕ್ಲೀಚ್ ಚಿಟ್ ನೀಡಿದೆ ಎನ್ನುವ ಮಾಹಿತಿ ತಿಳಿದು ಬರುತ್ತಿದ್ದಂತೆ ವಿಪಕ್ಷ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದು, ಮೂಡಾ ಹಗರಣದಲ್ಲಿ ನಡೆಸಲಾಗಿರುವ ಲೋಕಾಯುಕ್ತ ತನಿಖೆಯು ಸಿದ್ದರಾಮಯ್ಯರಿಂದ, ಸಿದ್ದರಾಮಯ್ಯರಿಗಾಗಿ, ಸಿದ್ದರಾಮಯ್ಯರಿಗೋಸ್ಕರ ನಡೆಸಿದ ತನಿಖೆಯಾಗಿದ್ದು, ಇದರಲ್ಲಿ ನ್ಯಾಯ ಸಿಕ್ಕುತ್ತದೆ ಎನ್ನುವ ಭರವಸೆ ಯಾರಿಗೂ ಇರಲಿಲ್ಲ ಎಂದಿದ್ದಾರೆ.
ಮೂಡಾ ಹಗರಣದಲ್ಲಿ ತನಿಖೆಗೆ ಮೊದಲೇ ಮುಖ್ಯಮಂತ್ರಿಗಳಾದಿಯಾಗಿ, ಸಚಿವರು, ಕಾಂಗ್ರೆಸ್ ಶಾಸಕರು ಆರೋಪಿ ಸಿದ್ದರಾಮಯ್ಯ ಹಾಗೂ ಅವರ ಧರ್ಮ ಪತ್ನಿ ಅವರಿಗೆ ಕ್ಲೀನ್ ಚಿಟ್ ನೀಡಿದ್ದರು. ಇದನ್ನೇ ಲೋಕಾಯುಕ್ತ ಪೊಲೀಸರೂ ಸ್ವಲ್ಪ ತಡವಾಗಿ 'ಬಿ ರಿಪೋರ್ಟ್' ರೂಪದಲ್ಲಿ ನೀಡಿದ್ದಾರೆ. ಇದರಲ್ಲಿ ಆಶ್ಚರ್ಯಪಡುವಂತದ್ದು ಏನಿಲ್ಲ ಎಂದರು.

ಒಂದೇ ಒಂದು ದಿನ ನೆಪಮಾತ್ರಕ್ಕೆ ಆರೋಪಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿ ಅವರನ್ನು ವಿಚಾರಣೆ ನಡೆಸಿ ಕ್ಲೀನ್ ಚಿಟ್ ನೀಡಿರುವುದು ರಾಜ್ಯ ಕಂಡ 'ಐತಿಹಾಸಿಕ ದುರಂತ'. ಭ್ರಷ್ಟ ಕಾಂಗ್ರೆಸ್ ಸರ್ಕಾರದಲ್ಲಿ 'ನ್ಯಾಯ' ಮಣ್ಣುಪಾಲಾಗಿದೆ. ಸಮರ್ಪಕ ತನಿಖೆಯನ್ನೇ ನಡೆಸದೆ ಕ್ಲೀನ್ ಚಿಟ್ ನೀಡಿ 'ನ್ಯಾಯದ ಸಮಾಧಿ' ಮಾಡಿದೆ ಈ ದುಷ್ಟ ಕಾಂಗ್ರೆಸ್ ಸರ್ಕಾರ. ಕೋರ್ಟಿಗೆ ಸಂಪೂರ್ಣ ಸಾಕ್ಷ್ಯ ಒದಗಿಸದೇ ಪ್ರಕರಣವನ್ನು ಮುಚ್ಚಿ ಹಾಕಿ ಸತ್ಯದ ಸಮಾಧಿ ಮಾಡಲು ಹೊರಟಿರುವ ಸಿಎಂ ಸಿದ್ದರಾಮಯ್ಯನವರ ಪ್ರಯತ್ನಕ್ಕೆ ಜಯ ಸಿಗುವುದಿಲ್ಲ. ಇಂದಲ್ಲ ನಾಳೆ, ಉಪ್ಪು ತಿಂದ ಸಿದ್ದರಾಮಯ್ಯನವರು ನೀರು ಕುಡಿಯಲೇಬೇಕು ಎಂದು ಆರ್.ಆಶೋಕ್ ಟೀಕಿಸಿದ್ದಾರೆ.












Click it and Unblock the Notifications