Rahul Gandhi : ಮತಗಳ್ಳತನ ಆರೋಪ: ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ; ಸ್ಪೋಟಕ ದಾಖಲೆ ಬಿಡುಗಡೆ!
ಬೆಂಗಳೂರು, ಆಗಸ್ಟ್ 08: ರಾಜ್ಯ ಮಟ್ಟದಲ್ಲಿ ಮಾತ್ರವಲ್ಲದೇ ರಾಷ್ಟ್ರ ಮಟ್ಟದಲ್ಲಿ ಮತಗಳ್ಳತನ ಆರೋಪ ಕೇಳಿ ಬಂದಿದ್ದು, ತೀವ್ರ ಚರ್ಚೆಗೆ ಕಾರಣವಾಗಿದೆ. ಮತಗಳ್ಳತನ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಇಂದು (ಶುಕ್ರವಾರ)ನಮ್ಮ ಮತ, ನಮ್ಮ ಹಕ್ಕು ಎಂಬ ಬೃಹತ್ ಪ್ರತಿಭಟನೆಯನ್ನ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶ ನಡೆಯಲಿದೆ. ಸಮಾವೇಶದ ನಂತರ ರಾಹುಲ್ ಗಾಂಧಿ ಸೇರಿದಂತೆ ಕಾಂಗ್ರೆಸ್ ನಾಯಕರು ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತಗಳ್ಳತನದ ಕುರಿತಂತೆ ದಾಖಲೆಸಹಿತ ದೂರು ನೀಡಲಿದ್ದಾರೆ.
ರಾಜ್ಯದ ವಿವಿಧ ಲೋಕಸಭಾ ಕ್ಷೇತ್ರದಲ್ಲಿ ಮತಗಳ್ಳತನವಾಗಿದೆ ಎಂಬ ದಾಖಲೆಯನ್ನ ಬಿಡುಗಡೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸ್ಪೋಟಕ ಮಾಹಿತಿಯನ್ನ ಬಹಿರಂಗ ಪಡಿಸಿದ್ದು, ಬಿಜೆಪಿಗೆ ಅನುಕೂಲವಾಗುವಂತೆ ಚುನಾವಣಾ ಆಯೋಗ ನಡೆದುಕೊಳ್ಳುತ್ತಿದೆ. ಮತಗಳ್ಳತನಕ್ಕೆ ನೆರವು ನೀಡುತ್ತಿದೆ ಎಂದು ರಾಹುಲ್ ಆರೋಪಿಸಿದ್ದರು. ಅದರ ಕುರಿತು ಜನಾಂದೋಲನ ಸೃಷ್ಟಿಯಾಗುವಂತೆ ಮಾಡಲು ಕಾಂಗ್ರೆಸ್ ಇಂದು ಬೃಹತ್ ಪ್ರತಿಭಟನಾ ಸಮಾವೇಶ ನಡೆಸುತ್ತಿದೆ. ಕೆಲ ಕ್ಷಣದಲ್ಲಿ ಬೃಹತ್ ಪ್ರತಿಭಟನಾ ಸಮಾವೇಶದಲ್ಲಿ ರಾಹುಲ್ ಗಾಂಧಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರು ಪಾಲ್ಗೊಳ್ಳಲಿದ್ದಾರೆ.

ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನಾ ಸಮಾವೇಶಕ್ಕಾಗಿ ಬೃಹತ್ ವೇದಿಕೆಯನ್ನು ನಿರ್ಮಿಸಲಾಗಿದೆ. ಜತೆಗೆ ಸಾರ್ವಜನಿಕರಿಗಾಗಿ 8 ಸಾವಿರ ಆಸನಗಳನ್ನು ಅಳವಡಿಸಲಾಗಿದೆ. ಅದರ ಜತೆಗೆ ಸ್ವಾತಂತ್ರ್ಯ ಉದ್ಯಾನದಲ್ಲಿಯೂ ಆಸನ ವ್ಯವಸ್ಥೆ ಕಲ್ಪಿಸಲಾಗಿದ್ದು, ವೇದಿಕೆ ಕಾರ್ಯಕ್ರಮ ವೀಕ್ಷಣೆಗಾಗಿ ಎಲ್‌ಇಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿಭಟನಾ ಸಮಾವೇಶವನ್ನು ಯಶಸ್ವಿಗೊಳಿಸಲು ಬೆಂಗಳೂರಿನಲ್ಲಿಯೇ ಮೊಕ್ಕಾಂ ಹೂಡಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ರಾಜ್ಯ ನಾಯಕರೊಂದಿಗೆ ಗುರುವಾರವೂ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಸಿದ್ಧತೆಯನ್ನು ಪರಿಶೀಲಿಸಿದರು.
ಇನ್ನೂ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಮಾವೇಶವು ಮಧ್ಯಾಹ್ನ 1.30ರವರೆಗೆ ನಡೆಯಲಿದ್ದು, ಅದಾದ ನಂತರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ , ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, ಗೃಹ ಸಚಿವ ಡಾ. ಜಿ ಪರಮೇಶ್ವರ್ ಸೇರಿದಂತೆ ಮತ್ತಿತರ ನಾಯಕರ ನಿಯೋಗ ಶೇಷಾದ್ರಿ ರಸ್ತೆಯಲ್ಲಿನ ಮುಖ್ಯ ಚುನಾವಣಾಧಿಕಾರಿಗಳ ಕಚೇರಿಗೆ ತೆರಳಿ ಮತಗಳವು ಮತ್ತು ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದಂತೆ ತಮ್ಮ ಆರೋಪಗಳ ಕುರಿತು ಮಹತ್ವದ ದಾಖಲೆ ಸಹಿತ ದೂರನ್ನು ಮುಖ್ಯ ಚುನಾವಣಾಧಿಕಾರಿಗಳಿಗೆ ಸಲ್ಲಿಸಲಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ಪಕ್ಷದ ರಾಷ್ಟ್ರೀಯ ಹಾಗೂ ರಾಜ್ಯ ನಾಯಕರು ಪಾಲ್ಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಭದ್ರತೆ ದೃಷ್ಟಿಯಿಂದ ಫ್ರೀಡಂ ಪಾರ್ಕ್ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. 6 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. 12 ಡಿಸಿಪಿ, 45 ಎಸಿಪಿ, 128 ಇನ್‌ಸ್ಪೆಕ್ಟರ್‌ಗಳು, 421 ಪಿಎಸ್‌ಐ, 591 ಮಂದಿ ಮಹಿಳಾ ಪೊಲೀಸ್ ಸಿಬ್ಬಂದಿ, ಕೆಎಸ್‌ಆರ್‌ಪಿ ಹಾಗೂ ಸಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ.
ಕಾಂಗ್ರೆಸ್ ಬೃಹತ್ ಪ್ರತಿಭಟನೆ ಹಿನ್ನಲೆ ಮಹಾರಾಣಿ ಕಾಲೇಜು ಜಂಕ್ಷನ್, ಶೇಷಾದ್ರಿ ರಸ್ತೆ, ಮೆಜೆಸ್ಟಿಕ್, ಉಪ್ಪಾರಪೇಟೆ, ಕಾಟನ್‌ಪೇಟೆ, ಕೆಂಪೇಗೌಡ ಬಸ್ ನಿಲ್ದಾಣ, ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ ಸುತ್ತಮುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಗರುಡ ಫೋರ್ಸ್ ಸಿಬ್ಬಂದಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರತಿಭಟನಾನಿರತರ ಮಧ್ಯೆ 500 ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗುತ್ತದೆ. ಇನ್ನೂ ಪ್ರತಿಭಟನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಂಪುಟದ ಸಚಿವರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಅಲ್ಲದೆ, ವಿವಿಧ ಜಿಲ್ಲೆಗಳಿಂದ ಸಾವಿರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.












Click it and Unblock the Notifications