Karnataka Rain: ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಮಳೆ; ಐಎಂಡಿ
ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಕಡೆಗಳಲ್ಲಿ ಡಿಸೆಂಬರ್ ಮುಗಿಯುತ್ತಾ ಬಂದರೂ ಮಳೆಯಾಗುತ್ತಿದೆ. ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿದ್ದು ತುಂತುರು ಮಳೆಯಾಗಿದೆ. ಬೆಂಗಳೂರಿನಲ್ಲಿ ಕೂಡ ಬೆಳಗ್ಗೆಯಿಂದಲೇ ಮೋಡ ಮುಸುಕಿದ ವಾತಾವರಣವಿದ್ದು ಮಧ್ಯಾಹ್ನದ ನಂತರ ಮಳೆ ಸುರಿದಿದೆ. ಶುಕ್ರವಾರ ಕೂಡ ರಾಜ್ಯದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಐಎಂಡಿ ಬೆಂಗಳೂರು ನಿರ್ದೇಶಕರು ಹಾಗೂ ವಿಜ್ಞಾನಿಯಾದ ಸಿಎಸ್ ಪಾಟೀಲ್ ರಾಜ್ಯದಲ್ಲಿ ಮಳೆಯಾಗುವ ಬಗ್ಗೆ ಮುನ್ಸೂಚನೆ ನೀಡಿದ್ದು, ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದ್ದು ಶುಕ್ರವಾರ ಕೂಡ ಮಳೆ ಮುಂದುವರೆಯಲಿದೆ ಎಂದು ಮಾಹಿತಿ ನೀಡಿದ್ದಾರೆ.

ರಾಮನಗರ, ಬೆಂಗಳೂರು, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರದ ಹಲವು ಕಡೆಗಳಲ್ಲಿ ಗುರುವಾರ ಮಳೆಯಾಗಿದೆ. ಬಂಗಳಾಕೊಲ್ಲಿ ಸಾಗರದಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಕರ್ನಾಟಕದ ಕರಾವಳಿ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಕಡೆಗಳಲ್ಲಿ ಶುಕ್ರವಾರ ಕೂಡ ಮಳೆಯಾಗಲಿದೆ ಎಂದು ಹೇಳಿದ್ದಾರೆ.
ಶುಕ್ರವಾರ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕನಿಷ್ಠ ಉಷ್ಣಾಂಶ ಸುಮಾರು 17 ರಿಂದ 19 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ಸಾಧ್ಯತೆ ಇದೆ ಎಂದು ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಳೆ ಮುನ್ಸೂಚನೆ
ಬೆಂಗಳೂರಿನಲ್ಲಿ ಕೂಡ ಶುಕ್ರವಾರ ಅಲ್ಲಲ್ಲಿ ಹಗುರವಾದ ಮಳೆಯಾಗಲಿದೆ ಎಂದು ಮಾಹಿತಿ ನೀಡಿದ್ದು, ಶುಕ್ರವಾರ ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಗರಿಷ್ಠ ಉಷ್ಣಾಂಶ 25 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದ್ದಾರೆ.
ಗುರುವಾರ ಕೂಡ ನಗರದಲ್ಲಿ ಅಲ್ಲಲ್ಲಿ ತುಂತುರು ಮಳೆಯಾಗಿದೆ. ಶುಕ್ರವಾರ ಕೂಡ ನಗರದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದ್ದು, ದ್ವಿಚಕ್ರ ವಾಹನ ಸವಾರರು, ಕಚೇರಿಗೆ ಹೋಗುವವರು, ಶಾಲೆಗೆ ಹೋಗುವವರಿಗೆ ಸಮಸ್ಯೆಯಾಗುವ ಸಾಧ್ಯತೆ ಇದೆ.
ಶುಕ್ರವಾರದ ಬಳಿಕ ರಾಜ್ಯದಲ್ಲಿ ಒಣಹವೆ ಮುಂದುವರೆಯಲಿದ್ದು ಈ ಬಾರಿ ಚಳಿ ಹೆಚ್ಚಾಗಲಿದೆ ಎಂದು ಹೇಳಲಾಗಿದೆ. ಈ ವರ್ಷ ರಾಜ್ಯದ ಜನತೆ ಈಗಾಗಲೇ ವಿಪರೀತ ಬಿಸಿಲು ಮತ್ತು ಭಾರಿ ಮಳೆಗೆ ಸಾಕ್ಷಿಯಾಗಿದ್ದು ಈಗ ತೀವ್ರ ಚಳಿಯನ್ನು ಅನುಭವಿಸಬೇಕಾಗಿದೆ.












Click it and Unblock the Notifications